Darshan
Darshan Twitter
ಸುದ್ದಿಗಳು

ರೇಣುಕಾಸ್ವಾಮಿ ಕೊಲೆ: ನಟ ದರ್ಶನ್‌ ಸೇರಿ ನಾಲ್ವರು ಎರಡು ದಿನ ಪೊಲೀಸ್‌ ಕಸ್ಟಡಿಗೆ; ಪವಿತ್ರಾಗೆ ನ್ಯಾಯಾಂಗ ಬಂಧನ

Bar & Bench

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿನ ಪ್ರಮುಖ ಆರೋಪಿ ನಟ ದರ್ಶನ್‌ ಸೇರಿ ನಾಲ್ಕು ಮಂದಿಯನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಗುರುವಾರ ಮತ್ತೆ ಎರಡು ದಿನ ಪೊಲೀಸ್‌ ಕಸ್ಟಡಿಗೆ ನೀಡಿದೆ. ಉಳಿದ 11 ಮಂದಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಆರೋಪಿಗಳ ಕಸ್ಟಡಿ ಅವಧಿ ಇಂದು ಮುಗಿದ ಹಿನ್ನೆಲೆಯಲ್ಲಿ ಕಾಮಾಕ್ಷಿ ಪಾಳ್ಯ ಪೊಲೀಸರು ಬೆಂಗಳೂರಿನ 24ನೇ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ವಿಶ್ವನಾಥ್‌ ಚನ್ನಬಸಪ್ಪ ಗೌಡರ್‌ ಮುಂದೆ ಆರೋಪಿಗಳನ್ನು ಹಾಜರುಪಡಿಸಿದರು.

ಘಟನೆಯ ಮಾಹಿತಿ ಪಡೆದ ಮ್ಯಾಜಿಸ್ಟ್ರೇಟ್‌ ಅವರು ದರ್ಶನ್‌, ವಿನಯ್‌, ಪ್ರದೂಷ್‌, ಧನರಾಜ್‌ ಅವರನ್ನು ಜೂನ್‌ 22ರವರೆಗೆ ಪೊಲೀಸ್‌ ಕಸ್ಟಡಿಗೆ ನೀಡಿದ್ದಾರೆ. ಉಳಿದಂತೆ ಪವಿತ್ರಾ, ರಾಘವೇಂದ್ರ, ನಾಗರಾಜ, ಲಕ್ಷ್ಮಣ, ಪವನ್‌, ರಾಘವೇಂದ್ರ, ನಂದೀಶ, ಜಗದೀಶ, ಅನುಕುಮಾರ್‌, ಕೇಶವಮೂರ್ತಿ, ನಿಖಿಲ್‌ ನಾಯಕ್‌ ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ.

ಈಗಾಗಲೇ ಒಟ್ಟಾರೆ 10 ದಿನ ದರ್ಶನ್‌ ಮತ್ತು ಇತರೆ ಆರೋಪಿಗಳು ಪೊಲೀಸ್‌ ಕಸ್ಟಡಿಯಲ್ಲಿ ಕಳೆದಿದ್ದಾರೆ. ರವಿ, ಕಾರ್ತಿಕ್‌ ಅವರನ್ನು ನಿನ್ನೆಯೇ ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು.

ಪ್ರಕರಣದ ಹಿನ್ನೆಲೆ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಂಬಂಧ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಪವಿತ್ರಾ ಗೌಡ, ದರ್ಶನ್‌ ಅಲಿಯಾಸ್‌ ಡಿ ಬಾಸ್‌, ಪುಟ್ಟಸ್ವಾಮಿ ಅಲಿಯಾಸ್‌ ಪವನ್‌, ರಾಘವೇಂದ್ರ, ನಂದೀಶ್‌, ಜಗದೀಶ್‌ ಅಲಿಯಾಸ್‌ ಜಗ್ಗ, ಅನುಕುಮಾರ್‌, ರವಿ ಶಂಕರ್‌ ಅಲಿಯಾಸ್‌ ರವಿ, ಧನರಾಜ್‌ ಡಿ ಅಲಿಯಾಸ್‌ ರಾಜು, ವಿನಯ್‌ ವಿ, ನಾಗರಾಜು, ಲಕ್ಷ್ಮಣ, ದೀಪಕ್‌, ಪ್ರದೂಷ್‌, ಕಾರ್ತಿಕ್‌ ಅಲಿಯಾಸ್‌ ಕಪ್ಪೆ, ಕೇಶವಮೂರ್ತಿ, ನಿಖಿಲ್‌ ನಾಯಕ್‌ ಆರೋಪಿಗಳಾಗಿದ್ದು, ಐಪಿಸಿ ಸೆಕ್ಷನ್‌ಗಳಾದ 302 (ಕೊಲೆ), 201 (ಸಾಕ್ಷ್ಯ ನಾಶ), 120 (ಬಿ) (ಕ್ರಿಮಿನಲ್‌ ಪಿತೂರಿ), 364 (ಅಪಹರಣ), 355 (ಕ್ರಿಮಿನಲ್‌ ಉದ್ದೇಶದಿಂದ), 384 (ಸುಲಿಗೆ), 143 (ಅಕ್ರಮ ಕೂಟ), 147 (ದೊಂಬಿ), 148 (ಮಾರಕಾಸ್ಟ್ರ ಬಳಕೆ) ಜೊತೆಗೆ 149 (ಏಕೈಕ ಉದ್ದೇಶದಿಂದ ಎಲ್ಲರೂ ಒಟ್ಟುಗೂಡಿ ಕೃತ್ಯ ಎಸಗಿರುವುದು) ಅಡಿ ಪ್ರಕರಣ ದಾಖಲಿಸಲಾಗಿದೆ.