Actor Darshan with his girlfriend Pavitra Gowda 
ಸುದ್ದಿಗಳು

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್‌ ಸೇರಿ 17 ಆರೋಪಿಗಳ ನ್ಯಾಯಾಂಗ ಬಂಧನ ಸೆ.9ರವರೆಗೆ ವಿಸ್ತರಣೆ

Bar & Bench

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿನ ಎರಡನೇ ಆರೋಪಿ ನಟ ದರ್ಶನ್‌, ಆತನ ಗೆಳತಿ ಪವಿತ್ರಾಗೌಡ ಸೇರಿದಂತೆ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನ ಸೆಪ್ಟೆಂಬರ್‌ 9ರ ವರೆಗೆ ವಿಸ್ತರಣೆಯಾಗಿದೆ.

ಎಲ್ಲಾ ಆರೋಪಿಗಳನ್ನು ವಿಡಿಯೊ ಕಾನ್ಫರೆನ್ಸ್‌ ಮೂಲಕ ಬೆಂಗಳೂರಿನ 24ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಧೀಶೆ ಎಸ್‌ ನಿರ್ಮಲಾ ಅವರ ಮುಂದೆ ಹಾಜರುಪಡಿಸಲಾಗಿತ್ತು.

ಪ್ರಕರಣದ ಕುರಿತು ಮಾಹಿತಿ ಪಡೆದ ಮ್ಯಾಜಿಸ್ಟ್ರೇಟ್‌ ಅವರು ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನವನ್ನು ವಿಸ್ತರಿಸಿ ಆದೇಶಿಸಿದ್ದಾರೆ.

ಈ ಮಧ್ಯೆ, ಜೈಲಿನಲ್ಲಿ ವಿಶೇಷ ಆತಿಥ್ಯ ಒದಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಅವರನ್ನು ಬಳ್ಳಾರಿ ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರಿಸಲು ನ್ಯಾಯಾಲಯವು ನಿನ್ನೆ ಅನುಮತಿಸಿತ್ತು. ಇತರೆ ಒಂಬತ್ತು ಆರೋಪಿಗಳನ್ನು ರಾಜ್ಯದ ಬೇರೆ ಬೇರೆ ನ್ಯಾಯಾಲಯಗಳಿಗೆ ಸ್ಥಳಾಂತರಿಸಲು ಅನುಮತಿಸಲಾಗಿದೆ.

ಪವಿತ್ರಾಗೌಡ ಜಾಮೀನು ಅರ್ಜಿ ಆದೇಶ ಆಗಸ್ಟ್‌ 31ಕ್ಕೆ

ಕೊಲೆ ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿರುವ ಪವಿತ್ರಾ ಗೌಡ, ವಿ ವಿನಯ್‌, ಅನುಕುಮಾರ್‌ ಅಲಿಯಾಸ್‌ ಅನು ಮತ್ತು ಕೇಶವಮೂರ್ತಿ ಅವರ ಜಾಮೀನು ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ಬೆಂಗಳೂರಿನ ಸತ್ರ ನ್ಯಾಯಾಲಯವು ಆದೇಶವನ್ನು ಆಗಸ್ಟ್‌ 31ಕ್ಕೆ ಕಾಯ್ದಿರಿಸಿದೆ.

ಬೆಂಗಳೂರಿನ 57ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜೈಶಂಕರ್‌ ಅವರು ಇಂದು ವಿಶೇಷ ಸರ್ಕಾರಿ ಅಭಿಯೋಜಕ ಪಿ ಪ್ರಸನ್ನಕುಮಾರ್‌ ಅವರ ವಾದ ಆಲಿಸಿದ್ದು, ಆದೇಶ ಕಾಯ್ದಿರಿಸಿದರು.

ಪವಿತ್ರಾ ಗೌಡ ಪರ ಹಿರಿಯ ವಕೀಲ ರೇನಿ ಸೆಬಾಸ್ಟಿಯನ್‌, ಅನುಕುಮಾರ್‌ ಪರ ಕೆ ರಾಮ್‌ ಸಿಂಗ್‌, ವಿ ವಿನಯ್‌ ಪರ ಕೆ ನಟರಾಜ್‌ ಮತ್ತು ಕೇಶವಮೂರ್ತಿ ಪರ ರಂಗನಾಥ್‌ ರೆಡ್ಡಿ ನಿನ್ನೆ ವಾದಿಸಿದ್ದರು.

ಪ್ರಕರಣದ ಹಿನ್ನೆಲೆ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಂಬಂಧ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಪವಿತ್ರ ಗೌಡ, ದರ್ಶನ್‌ ಅಲಿಯಾಸ್‌ ಡಿ ಬಾಸ್‌, ಪುಟ್ಟಸ್ವಾಮಿ ಅಲಿಯಾಸ್‌ ಪವನ್‌, ರಾಘವೇಂದ್ರ, ನಂದೀಶ್‌, ಜಗದೀಶ್‌ ಅಲಿಯಾಸ್‌ ಜಗ್ಗ, ಅನುಕುಮಾರ್‌, ರವಿ ಶಂಕರ್‌ ಅಲಿಯಾಸ್‌ ರವಿ, ಧನರಾಜ್‌ ಡಿ ಅಲಿಯಾಸ್‌ ರಾಜು, ವಿನಯ್‌ ವಿ, ನಾಗರಾಜು, ಲಕ್ಷ್ಮಣ, ದೀಪಕ್‌, ಪ್ರದೂಷ್‌, ಕಾರ್ತಿಕ್‌ ಅಲಿಯಾಸ್‌ ಕಪ್ಪೆ, ಕೇಶವಮೂರ್ತಿ, ನಿಖಿಲ್‌ ನಾಯಕ್‌ ಆರೋಪಿಗಳಾಗಿದ್ದು, ಐಪಿಸಿ ಸೆಕ್ಷನ್‌ಗಳಾದ 302 (ಕೊಲೆ), 201 (ಸಾಕ್ಷ್ಯ ನಾಶ), 120 (ಬಿ) (ಕ್ರಿಮಿನಲ್‌ ಪಿತೂರಿ), 364 (ಅಪಹರಣ), 355 (ಕ್ರಿಮಿನಲ್‌ ಉದ್ದೇಶದಿಂದ), 384 (ಸುಲಿಗೆ), 143 (ಅಕ್ರಮ ಕೂಟ), 147 (ದೊಂಬಿ), 148 (ಮಾರಕಾಸ್ಟ್ರ ಬಳಕೆ) ಜೊತೆಗೆ 149 (ಏಕೈಕ ಉದ್ದೇಶದಿಂದ ಎಲ್ಲರೂ ಒಟ್ಟುಗೂಡಿ ಕೃತ್ಯ ಎಸಗಿರುವುದು) ಅಡಿ ಪ್ರಕರಣ ದಾಖಲಿಸಲಾಗಿದೆ.