Darshan and Karnataka HC 
ಸುದ್ದಿಗಳು

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜಾಮೀನು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ನಟ ದರ್ಶನ್‌

ನಟ ದರ್ಶನ್‌, ಅವರ ಗೆಳತಿ ಪವಿತ್ರಾಗೌಡ, ದರ್ಶನ್‌ ವ್ಯವಸ್ಥಾಪಕ ಆರ್‌ ನಾಗರಾಜು ಮತ್ತು ಎಂ ಲಕ್ಷ್ಮಣ್‌ ಅವರ ಜಾಮೀನು ಅರ್ಜಿಯನ್ನು ವಿಚಾರಣಾಧೀನ ನ್ಯಾಯಾಲಯವು ನಿನ್ನೆಯಷ್ಟೇ ತಿರಸ್ಕರಿಸಿತ್ತು.

Bar & Bench

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ನಟ ದರ್ಶನ್‌ ಅವರು ಜಾಮೀನು ಕೋರಿ ಕರ್ನಾಟಕ ಹೈಕೋರ್ಟ್‌ಗೆ ಮಂಗಳವಾರ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯು ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ. ವಿಚಾರಣಾಧೀನ ನ್ಯಾಯಾಲಯವು ನಿನ್ನೆ ದರ್ಶನ್‌ಗೆ ಜಾಮೀನು ನಿರಾಕರಿಸಿತ್ತು.

ದರ್ಶನ್‌ಗೆ ಜಾಮೀನು ಕೋರಿ ಅವರ ಪರವಾಗಿ ಅರ್ಜಿ ಸಲ್ಲಿಸಿರುವುದಾಗಿ ವಕೀಲ ಎಸ್‌ ಸುನಿಲ್‌ ಕುಮಾರ್‌ ತಿಳಿಸಿದ್ದಾರೆ. ವಿಚಾರಣಾಧೀನ ನ್ಯಾಯಾಲಯವು ಜಾಮೀನು ತಿರಸ್ಕರಿಸಲು ಸಕಾರಣಗಳನ್ನು ನೀಡಿಲ್ಲ. ಜಪ್ತಿ ಮಾಡಲಾಗಿರುವ ವಸ್ತುಗಳನ್ನು ಪೊಲೀಸರೇ ಸೃಷ್ಟಿ ಮಾಡಿದ್ದಾರೆ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿದೆ ಎಂದು ಸುನಿಲ್‌ ಕುಮಾರ್‌ ತಿಳಿಸಿದ್ದಾರೆ.

ದರ್ಶನ್‌ ಅವರು ಪ್ರಭಾವಿಯಾಗಿದ್ದು, ಸಾಮಾಜಿಕವಾಗಿ ಸಾಕಷ್ಟು ಹಿತಾಸಕ್ತಿ ಹೊಂದಿದ್ದಾರೆ. ರೇಣುಕಾಸ್ವಾಮಿ ಕೊಲೆ ಸ್ಥಳದಲ್ಲಿ ದರ್ಶನ್‌ ಇದ್ದರು ಎಂಬುದಕ್ಕೆ ವಂಶವಾಹಿ ಸಾಕ್ಷಿ ಇದೆ. ರೇಣುಕಾಸ್ವಾಮಿಯನ್ನು ಹೀನಾಯವಾಗಿ ಕೊಲೆ ಮಾಡಲಾಗಿದೆ ಎಂಬುದರ ಬಗ್ಗೆ ಮರಣೋತ್ತರ ಪರೀಕ್ಷೆಯಲ್ಲಿ ವಿವರಿಸಲಾಗಿದೆ ಎಂದು ಪ್ರಾಸಿಕ್ಯೂಷನ್‌ ಪ್ರಬಲವಾಗಿ ವಾದಿಸಿತ್ತು.

ನಟ ದರ್ಶನ್‌, ಅವರ ಗೆಳತಿ ಪವಿತ್ರಾಗೌಡ, ದರ್ಶನ್‌ ವ್ಯವಸ್ಥಾಪಕ ಆರ್‌ ನಾಗರಾಜು ಮತ್ತು ಎಂ ಲಕ್ಷ್ಮಣ್‌ ಅವರ ಜಾಮೀನು ಅರ್ಜಿಯನ್ನು ವಿಚಾರಣಾಧೀನ ನ್ಯಾಯಾಲಯವು ನಿನ್ನೆಯಷ್ಟೇ ತಿರಸ್ಕರಿಸಿತ್ತು.

ಪ್ರಕರಣದ ಹಿನ್ನೆಲೆ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ದೂರು ದಾಖಲಾಗಿದ್ದು ಪವಿತ್ರ ಗೌಡ, ದರ್ಶನ್‌ ಅಲಿಯಾಸ್‌ ಡಿ ಬಾಸ್‌, ಪುಟ್ಟಸ್ವಾಮಿ ಅಲಿಯಾಸ್‌ ಪವನ್‌, ರಾಘವೇಂದ್ರ, ನಂದೀಶ್‌, ಜಗದೀಶ್‌ ಅಲಿಯಾಸ್‌ ಜಗ್ಗ, ಅನುಕುಮಾರ್‌, ರವಿ ಶಂಕರ್‌ ಅಲಿಯಾಸ್‌ ರವಿ, ಧನರಾಜ್‌ ಡಿ ಅಲಿಯಾಸ್‌ ರಾಜು, ವಿನಯ್‌ ವಿ, ನಾಗರಾಜು, ಲಕ್ಷ್ಮಣ, ದೀಪಕ್‌, ಪ್ರದೂಷ್‌, ಕಾರ್ತಿಕ್‌ ಅಲಿಯಾಸ್‌ ಕಪ್ಪೆ, ಕೇಶವಮೂರ್ತಿ, ನಿಖಿಲ್‌ ನಾಯಕ್‌ ಆರೋಪಿಗಳಾಗಿದ್ದಾರೆ. ಇವರ ವಿರುದ್ಧ, ಐಪಿಸಿ ಸೆಕ್ಷನ್‌ಗಳಾದ 302 (ಕೊಲೆ), 201 (ಸಾಕ್ಷ್ಯ ನಾಶ), 120 (ಬಿ) (ಕ್ರಿಮಿನಲ್‌ ಪಿತೂರಿ), 364 (ಅಪಹರಣ), 355 (ಕ್ರಿಮಿನಲ್‌ ಉದ್ದೇಶದಿಂದ), 384 (ಸುಲಿಗೆ), 143 (ಅಕ್ರಮ ಕೂಟ), 147 (ದೊಂಬಿ), 148 (ಮಾರಕಾಸ್ಟ್ರ ಬಳಕೆ) ಜೊತೆಗೆ 149 (ಏಕೈಕ ಉದ್ದೇಶದಿಂದ ಎಲ್ಲರೂ ಒಟ್ಟುಗೂಡಿ ಕೃತ್ಯ ಎಸಗಿರುವುದು) ಅಡಿ ಪ್ರಕರಣ ದಾಖಲಾಗಿದೆ.