Darshan and Karnataka HC 
ಸುದ್ದಿಗಳು

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮನೆ ಊಟ, ಹಾಸಿಗೆ ಕೋರಿರುವ ನಟ ದರ್ಶನ್‌ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿದ ಹೈಕೋರ್ಟ್‌

ಜೈಲಿನಲ್ಲಿ ನೀಡಲಾಗುತ್ತಿರುವ ಆಹಾರ ಜೀರ್ಣಿಸಿಕೊಳ್ಳಲು ಆಗುತ್ತಿಲ್ಲ. ಜೈಲಿನ ಊಟದಿಂದಾಗಿ ಭೇದಿ ಆಗುತ್ತಿದೆ. ದೇಹದ ತೂಕ ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ಮನೆ ಆಹಾರ ತರಿಸಿಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶಿಸಬೇಕು ಎಂದು ಕೋರಿರುವ ದರ್ಶನ್.

Bar & Bench

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ತೂಗುದೀಪ ಶ್ರೀನಿವಾಸ್ ಅವರು ತಮಗೆ ಮನೆ ಊಟ ಪಡೆಯಲು ಅನುಮತಿಸುವಂತೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಮೇಲ್ವಿಚಾರಕರಿಗೆ ನಿರ್ದೇಶಿಸಬೇಕು ಎಂದು ಕೋರಿರುವ ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ಶುಕ್ರವಾರ, ಜು.19ಕ್ಕೆ ಮುಂದೂಡಿದೆ.

ನಟ ದರ್ಶನ್‌ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಸ್‌ ಆರ್‌ ಕೃಷ್ಣಕುಮಾರ್ ಅವರ ಏಕಸದಸ್ಯ ಪೀಠ ಗುರುವಾರ ವಿಚಾರಣೆಗೆ ನಡೆಸಿತು.

ವಿಶೇಷ ಸರ್ಕಾರಿ ಅಭಿಯೋಜಕರಾದ ಪಿ ಪ್ರಸನ್ನ ಕುಮಾರ್ ಮತ್ತು ಹೆಚ್ಚುವರಿ ಅಡ್ವೊಕೇಟ್ ಜನರಲ್ ವಿ ಜಿ ಭಾನುಪ್ರಕಾಶ್ ಅವರು ದರ್ಶನ್ ಅರ್ಜಿಗೆ ಸಂಬಂಧಿಸಿದಂತೆ ಪೀಠಕ್ಕೆ ಲಿಖಿತ ಆಕ್ಷೇಪಣೆ ಸಲ್ಲಿಸಿದರು. ದರ್ಶನ್‌ಗೆ ಮನೆ ಊಟ, ಪುಸ್ತಕ ಮತ್ತು ಹಾಸಿಗೆ ಕಲ್ಪಿಸಲು ಅವಕಾಶವಿಲ್ಲ ಎಂಬುದಕ್ಕೆ ಸಂಬಂಧಿಸಿದ ತೀರ್ಪುಗಳನ್ನು ಸಲ್ಲಿಸಿದರು. ದರ್ಶನ್‌ ಪರ ಹಿರಿಯ ವಕೀಲ ಕೆ ಎನ್‌ ಫಣೀಂದ್ರ ಅವರು ಸೌಲಭ್ಯ ಕಲ್ಪಿಸುವುದಕ್ಕೆ ಪೂರಕವಾದ ತೀರ್ಪುಗಳನ್ನು ಸಲ್ಲಿಸಿದರು.

ಉಭಯ ಪಕ್ಷಕಾರರಿಂದ ಸಂಬಂಧಿತ ತೀರ್ಪುಗಳು ಮತ್ತು ಟಿಪ್ಪಣಿ (ಸಿನಾಪ್ಸಸ್‌) ಸ್ವೀಕರಿಸಿದ ಪೀಠವು ಶುಕ್ರವಾರಕ್ಕೆ (ಜುಲೈ 19) ಅರ್ಜಿ ವಿಚಾರಣೆ ಮುಂದೂಡಿತು.

ಜೈಲಿನಲ್ಲಿ ನೀಡಲಾಗುತ್ತಿರುವ ಆಹಾರ ಜೀರ್ಣಿಸಿಕೊಳ್ಳಲು ತನಗೆ ಆಗುತ್ತಿಲ್ಲ. ಜೈಲಿನ ಊಟದಿಂದಾಗಿ ಪದೇ ಪದೇ ಭೇದಿ ಆಗುತ್ತಿದೆ. ಪರಿಣಾಮ ದೇಹದ ತೂಕ ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ಮನೆ ಆಹಾರ ತರಿಸಿಕೊಳ್ಳಲು ಜೈಲು ಅಧಿಕಾರಿಗಳಿಗೆ ಮೌಖಿಕವಾಗಿ ಮನವಿ ಮಾಡಲಾಗಿತ್ತು. ಆದರೆ, ಅವರು ಇದಕ್ಕೆ ಒಪ್ಪಿಲ್ಲ. ಹೀಗಾಗಿ, ಜೈಲಿನ ಮೇಲ್ವಿಚಾರಕರಿಗೆ ನಿರ್ದೇಶನ ನೀಡಬೇಕು ಎಂದು ಎಂದು ದರ್ಶನ್ ಅರ್ಜಿಯಲ್ಲಿ ಕೋರಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ದರ್ಶನ್ 12 ದಿನಗಳ ಪೊಲೀಸ್ ಕಸ್ಟಡಿಯಲ್ಲಿದ್ದರು. ತದನಂತರ 2024ರ ಜೂನ್ 22ರಿಂದ ನ್ಯಾಯಾಂಗ ಬಂಧನದಲ್ಲಿದ್ದು, ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾ ಕೈದಿಯಾಗಿದ್ದಾರೆ. ದರ್ಶನ್ ವಿರುದ್ಧ ಭಾರತೀಯ ದಂಡ ಸಂಹಿತೆ-1860ರ (ಐಪಿಸಿ) ಕಲಂ 302, 120ಬಿ, 201, 364, 355, 384, 143, 147, 148 ಮತ್ತು 149 ಅಡಿ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.