Darshan and Pavitra Gowda 
ಸುದ್ದಿಗಳು

ರೇಣುಕಾಸ್ವಾಮಿ ಕೊಲೆ: ದರ್ಶನ್‌ ಸೇರಿ 17 ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ 3,991 ಪುಟಗಳ ಆರೋಪ ಪಟ್ಟಿ ಸಲ್ಲಿಕೆ

ಒಟ್ಟು 10 ಕಡತ, 7 ಸಂಪುಟಗಳ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಲಾಗಿದೆ. ಒಟ್ಟಾರೆ 231 ಸಾಕ್ಷಿಗಳ ಉಲ್ಲೇಖಿಸಲಾಗಿದ್ದು, ಈ ಪೈಕಿ ಮೂವರು ಪ್ರತ್ಯಕ್ಷ ಸಾಕ್ಷಿಯಾಗಿದ್ದಾರೆ ಎನ್ನಲಾಗಿದೆ.

Bar & Bench

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ ಮತ್ತು ಪವಿತ್ರಾಗೌಡ ಸೇರಿ 17 ಮಂದಿ ವಿರುದ್ಧ ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯಕ್ಕೆ 3,991 ಪುಟಗಳ ಆರೋಪ ಪಟ್ಟಿಯನ್ನು ತನಿಖಾಧಿಕಾರಿಗಳು ಬುಧವಾರ ಸಲ್ಲಿಸಿದ್ದಾರೆ. ಕೊಲೆ ಪ್ರಕರಣದಲ್ಲಿ ಮೂರು ತಿಂಗಳ ಒಳಗೆ ಸಂಬಂಧಿತ ನ್ಯಾಯಾಲಯಕ್ಕೆ ಪೊಲೀಸರು ಆರೋಪ ಪಟ್ಟಿ ಸಲ್ಲಿಸಬೇಕಾಗಿದ್ದು, ಇದರ ಭಾಗವಾಗಿ ಆರೋಪ ಪಟ್ಟಿ ಸಲ್ಲಿಕೆಯಾಗಿದೆ.

ಬೆಂಗಳೂರಿನ 24ನೇ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ಎಸ್‌ ನಿರ್ಮಲಾ ಅವರ ನ್ಯಾಯಾಲಯಕ್ಕೆ ಆರೋಪ ಪಟ್ಟಿಯನ್ನು ಕಾಮಾಕ್ಷಿ ಪಾಳ್ಯ ಪೊಲೀಸರು ಸಲ್ಲಿಸಿದ್ದಾರೆ. ಆರೋಪ ಪಟ್ಟಿಯನ್ನು ವಿಸ್ತೃತವಾಗಿ ಪರಿಶೀಲಿಸುವುದಾಗಿ ಪ್ರಾಸಿಕ್ಯೂಷನ್‌ ಪರ ವಕೀಲರಿಗೆ ನ್ಯಾಯಾಲಯ ತಿಳಿಸಿದೆ.

10 ಕಡತ, 7 ಸಂಪುಟಗಳ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಲಾಗಿದೆ. ಒಟ್ಟಾರೆ 231 ಸಾಕ್ಷಿಗಳನ್ನು ಉಲ್ಲೇಖಿಸಲಾಗಿದ್ದು, ಈ ಪೈಕಿ ಮೂವರು ಪ್ರತ್ಯಕ್ಷ ಸಾಕ್ಷಿಯಾಗಿದ್ದಾರೆ. ವೈದ್ಯರು, ತಹಶೀಲ್ದಾರ್‌, ಆರ್‌ಟಿಒ ಅಧಿಕಾರಿಗಳನ್ನು ಸಾಕ್ಷ್ಯವಾಗಿ ಉಲ್ಲೇಖಿಸಲಾಗಿದೆ. ಪೂರಕವಾಗಿ 8 ಎಫ್‌ಎಸ್‌ಎಲ್‌ ವರದಿ ಸಲ್ಲಿಕೆ ಮಾಡಲಾಗಿದೆ.

ಪ್ರದೋಶ್‌ ಮೊಬೈಲ್‌ನಲ್ಲಿ ಘಟನೆಗೆ ಸಂಬಂಧಿಸಿದ ವಿಡಿಯೊ, ಆರೋಪಿಗಳ ನಡುವಿನ ಸಂದೇಶ ವಿನಿಮಯ, ಕರೆಯನ್ನು ಆಧರಿಸಿ ಸಂಚಿನ ವಿವರ ನೀಡಲಾಗಿದೆ. ಪವನ್‌ಗೆ ಸೂಚಿಸಿ ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಕರೆಸಲಾಗಿದ್ದು, ದರ್ಶನ್‌ ಬಟ್ಟೆಯಲ್ಲಿ ರೇಣುಕಾಸ್ವಾಮಿ ರಕ್ತದ ಕಲೆ ಪತ್ತೆಯಾಗಿದೆ ಎನ್ನಲಾಗಿದೆ. ಇದೇ ಪ್ರಕರಣದಕ್ಕೆ ಸಂಬಂಧಿಸಿದಂತೆ ಸಾಕ್ಷಿಯಾಗಿ ಪರಿಗಣಿಸುವ ಸಂಬಂಧ ದರ್ಶನ್ ಸ್ನೇಹಿತ, ಹಾಸ್ಯ ನಟ ಚಿಕ್ಕಣ್ಣ ಹೇಳಿಕೆಯನ್ನೂ ನ್ಯಾಯಾಲಯದಲ್ಲಿ ಪೊಲೀಸರು ದಾಖಲಿಸಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.

ಜೂನ್‌ 11ರಂದು ದರ್ಶನ್‌ ಸೇರಿ ಇತರೆ ಆರೋಪಿಗಳ ಬಂಧನವಾಗಿತ್ತು. ದರ್ಶನ್‌ ಸದ್ಯ ಬಳ್ಳಾರಿ ಜಿಲ್ಲಾ ಕಾರಾಗೃಹದಲ್ಲಿದ್ದಾರೆ. ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನ ಸೆಪ್ಟೆಂಬರ್‌ 9ಕ್ಕೆ ಮುಗಿಯಲಿದೆ.

ಪ್ರಕರಣದ ಹಿನ್ನೆಲೆ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಂಬಂಧ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಪವಿತ್ರ ಗೌಡ, ದರ್ಶನ್‌ ಅಲಿಯಾಸ್‌ ಡಿ ಬಾಸ್‌, ಪುಟ್ಟಸ್ವಾಮಿ ಅಲಿಯಾಸ್‌ ಪವನ್‌, ರಾಘವೇಂದ್ರ, ನಂದೀಶ್‌, ಜಗದೀಶ್‌ ಅಲಿಯಾಸ್‌ ಜಗ್ಗ, ಅನುಕುಮಾರ್‌, ರವಿ ಶಂಕರ್‌ ಅಲಿಯಾಸ್‌ ರವಿ, ಧನರಾಜ್‌ ಡಿ ಅಲಿಯಾಸ್‌ ರಾಜು, ವಿನಯ್‌ ವಿ, ನಾಗರಾಜು, ಲಕ್ಷ್ಮಣ, ದೀಪಕ್‌, ಪ್ರದೂಷ್‌, ಕಾರ್ತಿಕ್‌ ಅಲಿಯಾಸ್‌ ಕಪ್ಪೆ, ಕೇಶವಮೂರ್ತಿ, ನಿಖಿಲ್‌ ನಾಯಕ್‌ ಆರೋಪಿಗಳಾಗಿದ್ದು, ಐಪಿಸಿ ಸೆಕ್ಷನ್‌ಗಳಾದ 302 (ಕೊಲೆ), 201 (ಸಾಕ್ಷ್ಯ ನಾಶ), 120 (ಬಿ) (ಕ್ರಿಮಿನಲ್‌ ಪಿತೂರಿ), 364 (ಅಪಹರಣ), 355 (ಕ್ರಿಮಿನಲ್‌ ಉದ್ದೇಶದಿಂದ), 384 (ಸುಲಿಗೆ), 143 (ಅಕ್ರಮ ಕೂಟ), 147 (ದೊಂಬಿ), 148 (ಮಾರಕಾಸ್ಟ್ರ ಬಳಕೆ) ಜೊತೆಗೆ 149 (ಏಕೈಕ ಉದ್ದೇಶದಿಂದ ಎಲ್ಲರೂ ಒಟ್ಟುಗೂಡಿ ಕೃತ್ಯ ಎಸಗಿರುವುದು) ಅಡಿ ಪ್ರಕರಣ ದಾಖಲಿಸಲಾಗಿತ್ತು.