Karnataka HC and LGBT
Karnataka HC and LGBT 
ಸುದ್ದಿಗಳು

ತೃತೀಯ ಲಿಂಗಿಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ: ಮನವಿ ಇತ್ಯರ್ಥಪಡಿಸಿದ ಕರ್ನಾಟಕ ಹೈಕೋರ್ಟ್‌

Bar & Bench

ತೃತೀಯ ಲಿಂಗಿಗಳಿಗೆ ವಿಶೇಷ ಮೀಸಲು ಪೇದೆಗಳ ಹುದ್ದೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ರಾಜ್ಯ ಸರ್ಕಾರವು ನಿರ್ಧಾರ ಕೈಗೊಂಡಿದೆ. ಈ ಮೂಲಕ ಅರ್ಜಿದಾರರ ಕೋರಿಕೆ ಈಡೇರಿದೆ. ತೃತೀಯ ಲಿಂಗಿಗಳಿಗೆ ಹೆಚ್ಚಿನ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಕಾನೂನು ಹೋರಾಟ ಮಾಡಲು ಮಧ್ಯಪ್ರವೇಶಕಾರರು ಸ್ವತಂತ್ರವಾಗಿದ್ದಾರೆ ಎಂದು ಹೇಳಿರುವ ಕರ್ನಾಟಕ ಹೈಕೋರ್ಟ್‌ ಬುಧವಾರ ಈ ಸಂಬಂಧ ಸಲ್ಲಿಕೆಯಾಗಿದ್ದ ಮನವಿ ವಿಲೇವಾರಿ ಮಾಡಿದೆ.

ಸರ್ಕಾರಿ ಉದ್ಯೋಗದಲ್ಲಿ ತೃತೀಯ ಲಿಂಗಿಗಳಿಗೆ ಸಮತಲ ಮೀಸಲಾತಿ ಕಲ್ಪಿಸುವ ಕುರಿತು ಸಲ್ಲಿಸಲಾಗಿದ್ದ ಲೈಂಗಿಕ ಅಲ್ಪಸಂಖ್ಯಾತರು, ಎಚ್‌ಐವಿ ಪೀಡಿತರ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಸಂಗಮ ಸ್ವಯಂ ಸೇವಾ ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮತ್ತು ʼಜೀವʼ ಎನ್‌ಜಿಓ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಮತ್ತು ನ್ಯಾಯಮೂರ್ತಿ ಎಸ್‌ ಆರ್‌ ಕೃಷ್ಣ ಕುಮಾರ್ ಅವರ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.

ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ವಕೀಲರು “ರಾಜ್ಯ ನಾಗರಿಕ ಸೇವೆಗಳ ಸಾಮಾನ್ಯ ನೇಮಕಾತಿ (ನಿಯಮಗಳು) 1977ಕ್ಕೆ ತಿದ್ದುಪಡಿ ಮಾಡಿ ರಾಜ್ಯ ನಾಗರಿಕ ಸೇವೆಗಳ ನೇಮಕಾತಿ ತಿದ್ದುಪಡಿ (ನಿಯಮಗಳು) 2021ರ ನಿಯಮ 9ಕ್ಕೆ ಉಪ ನಿಯಮ 1 (ಡಿ) ಸೇರ್ಪಡೆಗೊಳಿಸಲಾಗಿದೆ. ಈ ಉಪನಿಯಮ 1ರ ಅಡಿ ತೃತೀಯ ಲಿಂಗಿಗಳಿಗೆ ಶೇ. 1ರಷ್ಟು ಸಮತಲ ಮೀಸಲಾತಿ ಕಲ್ಪಿಸಿ ಕಳೆದ ವರ್ಷದ ಜುಲೈ 6ರಂದು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಧಿಸೂಚನೆ ಹೊರಡಿಸಲಾಗಿದೆ. ಆನಂತರ ಸರ್ಕಾರದ ಎಲ್ಲಾ ನಿಗಮ ಮತ್ತು ಮಂಡಳಿಗಳಿಗೆ ಸುತ್ತೋಲೆಯನ್ನು ಕಳುಹಿಸಲಾಗಿದ್ದು, ಸರ್ಕಾರದ ನಿಯಮಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕೋರಲಾಗಿದೆ” ಎಂದರು.

ಅರ್ಜಿದಾರರ ಪರವಾಗಿ ಮಧ್ಯಪ್ರವೇಶ ಮನವಿ ಸಲ್ಲಿಸಿದ್ದ ಹಿರಿಯ ವಕೀಲೆ ಜಯ್ನಾ ಕೊಠಾರಿ ಅವರು “ಮೀಸಲಾತಿಯನ್ನು ಸರ್ಕಾರದ ನಿಗಮ ಮತ್ತು ಮಂಡಳಿಗಳ ಜೊತೆಗೆ ಶೈಕ್ಷಣಿಕ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳು ಇತ್ಯಾದಿ ಸಂಸ್ಥೆಗಳಿಗೆ ವಿಸ್ತರಿಸಬೇಕು. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ವರ್ಸಸ್‌ ಭಾರತ ಸರ್ಕಾರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ರಾಜ್ಯ ಸರ್ಕಾರವು ತೃತೀಯ ಲಿಂಗಿಗಳನ್ನು ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ವರ್ಗ ಎಂದು ಪರಿಗಣಿಸಿ ಅವರ ಶ್ರೇಯೋಭಿವೃದ್ಧಿಗೆ ಕ್ರಮವಹಿಸಬೇಕು. ಶೈಕ್ಷಣಿಕ ಸಂಸ್ಥೆಗಳಲ್ಲಿ ಪ್ರವೇಶಾತಿ ಮತ್ತು ಸರ್ಕಾರಿ ಉದ್ಯೋಗದಲ್ಲಿ ಅವರಿಗೆ ಎಲ್ಲಾ ರೀತಿಯ ಮೀಸಲಾತಿಯನ್ನು ಕಲ್ಪಿಸಬೇಕು” ಎಂದು ಕೋರಿದರು. ಇದನ್ನು ಪೀಠವು ಆದೇಶದಲ್ಲಿ ದಾಖಲಿಸಿಕೊಂಡಿದ್ದು, ಬೇರೆ ಕೋರಿಕೆಗಳನ್ನು ಒಳಗೊಂಡ ಹೊಸ ಅರ್ಜಿ ಸಲ್ಲಿಸಲು ಅರ್ಜಿದಾರರು ಸ್ವತಂತ್ರರಾಗಿದ್ದಾರೆ ಎಂದು ಹೇಳಿ ಪ್ರಸ್ತುತ ತನ್ನ ಮುಂದಿದ್ದ ಮನವಿಯನ್ನು ಇತ್ಯರ್ಥಪಡಿಸಿತು.