Chief Justice Ritu Raj Awasthi, Justices B Veerappa and P Krishna Bhat 
ಸುದ್ದಿಗಳು

ರುದ್ರೇಶ್ ಕೊಲೆ ಪ್ರಕರಣ: ವಿಶೇಷ ನ್ಯಾಯಾಲಯದಿಂದ ಸೆಷನ್ಸ್‌ ನ್ಯಾಯಾಲಯಕ್ಕೆ ವಿಚಾರಣೆ ವರ್ಗಾಯಿಸಲು ಕೋರಿದ್ದ ಮನವಿ ವಜಾ

ಪ್ರಕರಣವನ್ನು ಎನ್‌ಐಎ ವಿಶೇಷ ನ್ಯಾಯಾಲಯದಿಂದ ಸೆಷನ್ಸ್ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಬೇಕು. ಹಾಗೆಯೇ, ಯುಎಪಿಎ ಅಡಿ ಆರೋಪಗಳನ್ನು ಕೈ ಬಿಡಬೇಕು ಎಂದು ಆರೋಪಿಗಳು ಕೋರಿದ್ದರು. ಆ ಅರ್ಜಿಗಳನ್ನು ಎನ್‌ಐಎ ವಿಶೇಷ ನ್ಯಾಯಾಲಯ ವಜಾಗೊಳಿಸಿತ್ತು.

Bar & Bench

ಆರ್‌ಎಸ್‌ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣದ ವಿಚಾರಣೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕಾಯಿದೆ ಅಡಿ ಸ್ಥಾಪಿಸಲಾಗಿರುವ ವಿಶೇಷ ನ್ಯಾಯಾಲಯದಿಂದ ಸೆಷನ್ಸ್ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲು ಆದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ವಜಾ ಮಾಡಿದೆ (ಇರ್ಫಾನ್‌ ಪಾಷಾ ಮತ್ತು ಇತರರು ಹಾಗೂ ಕರ್ನಾಟಕ ರಾಜ್ಯ).

ಇರ್ಫಾನ್ ಪಾಷಾ, ವಾಸಿಂ ಅಹ್ಮದ್‌, ಮೊಹಮ್ಮದ್‌ ಸಾದಿಕ್‌ ಮತ್ತು ಮೊಹಮ್ಮದ್‌ ಮುಜೀಬ್‌ ಉಲ್ಲಾ ಅವರು ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿಯ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪುನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿಗಳಾದ ಬಿ ವೀರಪ್ಪ ಮತ್ತು ಪಿ ಕೃಷ್ಣಭಟ್ ಅವರನ್ನು ಒಳಗೊಂಡ ಪೂರ್ಣಪೀಠ ಪ್ರಕಟಿಸಿತು.

ಪ್ರಕರಣವನ್ನು ಎನ್‌ಐಎ ವಿಶೇಷ ನ್ಯಾಯಾಲಯದಿಂದ ಸೆಷನ್ಸ್ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಬೇಕು. ಹಾಗೆಯೇ, ಪ್ರಕರಣದಲ್ಲಿ ತಮ್ಮ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ (ಯುಎಪಿಎ) ಅಡಿ ಹೊರಿಸಿರುವ ಆರೋಪಗಳನ್ನು ಕೈ ಬಿಡಬೇಕು ಎಂದು ಕೋರಿ ಆರೋಪಿಗಳು ಎನ್‌ಐಎ ಕಾಯಿದೆಯ ಸೆಕ್ಷನ್ 20ರ ಅಡಿಯಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿದ್ದರು.

ಅರ್ಜಿಗಳನ್ನು ಎನ್‌ಐಎ ವಿಶೇಷ ನ್ಯಾಯಾಲಯ ವಜಾಗೊಳಿಸಿದ್ದರಿಂದ ಹೈಕೋರ್ಟ್‌ಗೆ ಕ್ರಿಮಿನಲ್ ಮೇಲ್ಮನವಿ ಸಲ್ಲಿಸಿದ್ದರು. ಆದರೆ, ವಿಶೇಷ ನ್ಯಾಯಾಲಯ ಸೆಕ್ಷನ್ 20ರಡಿಯ ಅರ್ಜಿಗಳನ್ನು ತಿರಸ್ಕರಿಸಿ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಅವಕಾಶವಿಲ್ಲ. ಹೀಗಾಗಿ, ಈ ಮೇಲ್ಮನವಿಗಳಿಗೆ ವಿಚಾರಣಾ ಮಾನ್ಯತೆ ಇಲ್ಲವಾದ ಕಾರಣ ಅವುಗಳನ್ನು ತಿರಸ್ಕರಿಸಲಾಗಿದೆ ಎಂದು ಪೂರ್ಣಪೀಠವು ಆದೇಶದಲ್ಲಿ ಹೇಳಿದೆ.

ಅಲ್ಲದೆ, ಜಾಮೀನು ಕೋರಿದ್ದ ಅರ್ಜಿಗಳನ್ನು ತಿರಸ್ಕರಿಸಿ ಅಥವಾ ಪುರಸ್ಕರಿಸಿ ಎನ್‌ಐಎ ವಿಶೇಷ ನ್ಯಾಯಾಲಯ ಹೊರಡಿಸಿದ ಆದೇಶಗಳನ್ನು ಪ್ರಶ್ನಿಸಿ ಎನ್‌ಐಎ ಕಾಯಿದೆಯ ಸೆಕ್ಷನ್ 21ರ ಅಡಿಯಲ್ಲಿ ಸಲ್ಲಿಸಿದ ಮೇಲ್ಮನವಿಗಳು ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆ ಮಾನ್ಯತೆ ಹೊಂದಿರುತ್ತವೆ ಎಂದು ಆದೇಶದಲ್ಲಿ ಪೂರ್ಣಪೀಠ ಸ್ಪಷ್ಟಪಡಿಸಿದೆ. ಆರೋಪಿಗಳ ಪರ ವಕೀಲ ಎಸ್ ಬಾಲಕೃಷ್ಣನ್ ಮತ್ತು ಎನ್‌ಐಎ ತನಿಖಾಧಿಕಾರಿಗಳ ಪರ ವಕೀಲ ಪಿ ಪ್ರಸನ್ನಕುಮಾರ್ ವಾದ ಮಂಡಿಸಿದ್ದರು.

ಪ್ರಕರಣದ ಹಿನ್ನೆಲೆ: 2016ರ ಅಕ್ಟೋಬರ್‌ 16ರಂದು ಬೆಳಿಗ್ಗೆ ಬೆಂಗಳೂ ಆರ್‌ಎಸ್‌ಎಸ್ ಪಥಸಂಚಲನ ಕಾರ್ಯಕ್ರಮ ನಡೆದಿತ್ತು. ಅಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಶಿವಾಜಿ ನಗರದಲ್ಲಿರುವ ಕಾಮರಾಜ ರಸ್ತೆಯಲ್ಲಿನ ಶ್ರೀನಿವಾಸ ಮೆಡಿಕಲ್ ಸ್ಟೋರ್ ಎದುರು ಗಣವೇಷಧಾರಿಯಾಗಿ ನಿಂತಿದ್ದ ರುದ್ರೇಶ್ ಅವರನ್ನು ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದರು. ಘಟನೆ ಕುರಿತು ಕಮರ್ಷಿಯಲ್ ಸ್ಟ್ರೀಟ್ ಠಾಣಾ ಪೊಲೀಸರು ದೂರು ದಾಖಲಿಸಿಕೊಂಡು, ಮೇಲ್ಮನವಿದಾರರನ್ನು ಬಂಧಿಸಿದ್ದರು.

ಬಳಿಕ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಿ 2016ರ ಡಿಸೆಂಬರ್‌ 7ರಂದು ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿತ್ತು. ಈ ಆದೇಶ ಪ್ರಶ್ನಿಸಿ ಆರೋಪಿಗಳು ಸಲ್ಲಿಸಿದ್ದ ಅರ್ಜಿಗಳನ್ನು ವಿಚಾರಣಾಧೀನ ನ್ಯಾಯಾಲಯ ರದ್ದುಪಡಿಸಿತ್ತು. ಇದನ್ನು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ಗಳೂ ಪುರಸ್ಕರಿಸಿದ್ದವು. ಆನಂತರ ಎನ್‌ಐಎ ಕಾಯಿದೆ 2008ರ ಸೆಕ್ಷನ್ 20ರಡಿಯಲ್ಲಿ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಮೇಲ್ಮನವಿದಾರರು ಮಧ್ಯಂತರ ಅರ್ಜಿ ಸಲ್ಲಿಸಿದ್ದರು.

ಪ್ರಕರಣವನ್ನು ಎನ್‌ಐಎ ವಿಶೇಷ ನ್ಯಾಯಾಲಯದಿಂದ ಸೆಷನ್ಸ್ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಬೇಕು. ಹಾಗೆಯೇ, ಯುಎಪಿಎ ಅಡಿ ಆರೋಪಗಳನ್ನು ಕೈ ಬಿಡಬೇಕು ಎಂದು ಕೋರಿದ್ದರು. ಆ ಅರ್ಜಿಗಳನ್ನು ಎನ್‌ಐಎ ವಿಶೇಷ ನ್ಯಾಯಾಲಯ ವಜಾಗೊಳಿಸಿದ್ದರಿಂದ ಹೈಕೋರ್ಟ್‌ನಲ್ಲಿ ಕ್ರಿಮಿನಲ್ ಮೇಲ್ಮನವಿ ಸಲ್ಲಿಸಲಾಗಿತ್ತು.

Irfan Pasha and others V. State of Karnataka.pdf
Preview