High Court of Karnataka
High Court of Karnataka 
ಸುದ್ದಿಗಳು

ಕೊಡವರಿಗೆ ಪ್ರತ್ಯೇಕ ಸ್ಥಾನಮಾನ: ತಿಂಗಳಲ್ಲಿ ಆಕ್ಷೇಪಣೆ ಸಲ್ಲಿಸಲು ಕೇಂದ್ರ, ರಾಜ್ಯ ಸರ್ಕಾರಗಳಿಗೆ ಹೈಕೋರ್ಟ್‌ ಆದೇಶ

Bar & Bench

ಕೊಡವರಿಗೆ ಪ್ರತ್ಯೇಕ ಸ್ಥಾನಮಾನಕ್ಕಾಗಿ ಆಗ್ರಹಿಸಿ ಕೊಡವ ನ್ಯಾಷನಲ್ ಕೌನ್ಸಿಲ್ (ಸಿಎನ್‌ಸಿ) ಸಲ್ಲಿಸಿರುವ ಮನವಿ ಪರಿಗಣಿಸಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ಸಂಬಂಧ ನಾಲ್ಕು ವಾರಗಳಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ಈಚೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.

ಬಿಜೆಪಿ ಮುಖಂಡ, ರಾಜ್ಯಸಭಾ ಸದಸ್ಯರೂ ಆದ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ ಜಿ ಎಸ್ ಕಮಲ್ ಅವರ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.

ಅರ್ಜಿದಾರರ ಪರ ವಕೀಲರು, ನ್ಯಾಯಾಲಯ ಕಳೆದ ಬಾರಿ ನೀಡಿದ್ದ ನಿರ್ದೇಶನದಂತೆ ಅರ್ಜಿಯಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ಅನ್ನು ಪಕ್ಷಕಾರರನ್ನಾಗಿ ಮಾಡಲಾಗಿದೆ. ಆ ಕುರಿತು ಅರ್ಜಿಯಲ್ಲಿ ತಿದ್ದುಪಡಿ ಮಾಡಿ ಅದರ ಪ್ರತಿಯನ್ನು ಪ್ರತಿವಾದಿಗಳಿಗೆ ತಲುಪಿಸಲಾಗಿದೆ ಎಂದರು.

ಸಿಎನ್‌ಸಿ ಪರ ವಕೀಲರು, ತಾವು ಅರ್ಜಿದಾರರ ವಾದವನ್ನು ಬೆಂಬಲಸಲಿದ್ದೇವೆ. ಆ ಕುರಿತು ಅಫಿಡವಿಟ್‌ ಸಲ್ಲಿಸಲಾಗುವುದು ಎಂದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಿ ವಕೀಲರು, ಅರ್ಜಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಸಮಯಾವಕಾಶ ಕೋರಿದ ಹಿನ್ನೆಲೆಯಲ್ಲಿ ನ್ಯಾಯಾಲಯ ವಿಚಾರಣೆಯನ್ನು ಆಗಸ್ಟ್‌ 3ಕ್ಕೆ ಮುಂದೂಡಿತು. ಅಷ್ಟರಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ಸೂಚನೆ ನೀಡಿತು.

ಕೊಡವ ನ್ಯಾಷನಲ್ ಕೌನ್ಸಿಲ್ ಕೊಡವರಿಗೆ ಪ್ರತ್ಯೇಕ ಸ್ಥಾನಮಾನ ನೀಡುವಂತೆ ಕೋರಿ ಮನವಿ ಮಾಡಿದೆ, ಆದರೆ, ಸರ್ಕಾರ ಈವರೆಗೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಈ ಬಗ್ಗೆ ನಿರ್ದೇಶನ ನೀಡಬೇಕು ಆ ಕುರಿತಂತೆ ಸರ್ಕಾರಕ್ಕೆ ಆಯೋಗವೊಂದನ್ನು ರಚಿಸಲು ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.