ಯುವಕನೊಬ್ಬನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರು ಆ ಪ್ರಕರಣದಲ್ಲಿ ನಿಯತ ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ಸತ್ರ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಇದಲ್ಲದೆ, ತನ್ನ ಆಪ್ತರಾಗಿದ್ದ ಶಿವಕುಮಾರ್ ಎಂಬುವರು ದಾಖಲಿಸಿರುವ ಮತ್ತೊಂದು ಲೈಂಗಿಕ ಕಿರುಕುಳದ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಸಹ ಕೋರಿದ್ದಾರೆ.
ಸ್ವಪಕ್ಷದ ಕಾರ್ಯಕರ್ತ ನೀಡಿದ ದೂರಿನ ಹಿನ್ನೆಲೆಯಲ್ಲಿ ಬಂಧನಕ್ಕೆ ಒಳಗಾಗಿರುವ ಸೂರಜ್ ರೇವಣ್ಣ ಸಲ್ಲಿಸಿರುವ ನಿಯತ ಮತ್ತು ನಿರೀಕ್ಷಣಾ ಜಾಮೀನು ಅರ್ಜಿಗಳ ವಿಚಾರಣೆಯನ್ನು ಬುಧವಾರ ಜನಪ್ರತಿನಿಧಿಗಳ ವಿಶೇಷ ಸತ್ರ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ್ ಭಟ್ ಅವರು ವಿಚಾರಣೆ ನಡೆಸಿದರು.
ಅರ್ಜಿದಾರರ ವಾದ ಆಲಿಸಿದ ಪೀಠವು ಸೂರಜ್ ಆಪ್ತರಾಗಿದ್ದ ಶಿವಕುಮಾರ್ ಎಂಬುವರು ದಾಖಲಿಸಿರುವ ಪ್ರಕರಣದ ಸಂಬಂಧ ಸಿಐಡಿಗೆ ನೋಟಿಸ್ ಜಾರಿ ಮಾಡಿದ್ದು, ಪ್ರಕರಣದ ವಿಚಾರಣೆಯನ್ನು ಜುಲೈ 12ಕ್ಕೆ ಮುಂದೂಡಿದೆ. ಈ ಪ್ರಕರಣದಲ್ಲಿ ವಕೀಲ ನಿಖಿಲ್ ಕಾಮತ್ ಅವರು ಸೂರಜ್ ಪರವಾಗಿ ವಕಾಲತ್ತು ಹಾಕಿದ್ದಾರೆ.
ಚೇತನ್ ಎಂಬುವರು ದಾಖಲಿಸಿರುವ ದೂರಿನ ಸಂಬಂಧದ ಪ್ರಕರಣದಲ್ಲಿ ಈಗಾಗಲೇ ಸಿಐಡಿ ಆಕ್ಷೇಪಣೆ ಸಲ್ಲಿಸಿದ್ದು, ನಾಳೆ ವಿಚಾರಣೆ ನಡೆಯಲಿದೆ. ಇದರಲ್ಲಿ ವಕೀಲ ಜಿ ಅರುಣ್ ಸೂರಜ್ ಪರವಾಗಿ ವಕಾಲತ್ತು ಹಾಕಿದ್ದಾರೆ.
ಎರಡು ದಿನಗಳ ಹಿಂದೆ ಜನಪ್ರತಿನಿಧಿಗಳ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಸೂರಜ್‌ಗೆ ಜಾಮೀನು ನಿರಾಕರಿಸಿತ್ತು.
ಪ್ರಕರಣದ ಹಿನ್ನೆಲೆ: ಹೊಳೆನರಸೀಪುರದಲ್ಲಿ ಘನ್ನಿಗಡ ಫಾರ್ಮ್ ಹೌಸ್‌ಗೆ ಜೂನ್ 16ರಂದು ಕರೆಯಿಸಿಕೊಂಡು ಸೂರಜ್ ರೇವಣ್ಣ ತಮ್ಮ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ವಿಚಾರವನ್ನು ಬಹಿರಂಗಪಡಿಸಿದರೆ ಕೊಲ್ಲುವ ಬೆದರಿಕೆಯನ್ನೂ ಹಾಕಿದ್ದಾರೆ. ಈ ಸಂಬಂಧ ಹಣದ ಆಮಿಷವನ್ನೂ ಒಡ್ಡಿದ್ದರೂ ಎಂದು ಸಂತ್ರಸ್ತ ಯುವಕ ಸೂರಜ್ ಮತ್ತು ಅವರ ಬೆಂಬಲಿಗ ಶಿವಕುಮಾರ್ ವಿರುದ್ಧ ಜೂನ್ 22ರಂದು ದೂರು ನೀಡಿದ್ದರು. ಇದನ್ನು ಆಧರಿಸಿ ಹೊಳೆನರಸೀಪುರ ಗ್ರಾಮೀಣ ಠಾಣೆಯಲ್ಲಿ ಸೂರಜ್ ಮತ್ತು ಶಿವಕುಮಾರ್ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 377,342,506 ಜೊತೆಗೆ 34ರ ಅಡಿ ಪ್ರಕರಣ ಎಫ್‌ಐಆರ್ ದಾಖಲಿಸಲಾಗಿತ್ತು. ಈ ಪ್ರಕರಣದಲ್ಲಿ ಸೂರಜ್ ಬಂಧನವಾಗಿದೆ.
ಇನ್ನೊಂದು ಪ್ರಕರಣದಲ್ಲಿ ಸೂರಜ್ ಆಪ್ತ ಎನ್ನಲಾದ ಶಿವಕುಮಾರ್ ನೀಡಿದ ದೂರಿನ ಮೇರೆಗೆ ಸೂರಜ್ ರೇವಣ್ಣ, ಚನ್ನರಾಯಪಟ್ಟಣದ ರಕ್ಷಿತ್ ಮತ್ತು ಹಾಸನದ ಸಚಿನ್ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 342, 506, 377 ಜೊತೆಗೆ 34ರ ಅಡಿ ಜೂನ್ 25ರಂದು ಹೊಳೆನರಸೀಪುರದ ಗ್ರಾಮೀಣ ಠಾಣೆಯಲ್ಲಿ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.
ಸೂರಜ್ ತನ್ನ ಮೇಲೂ ಕೋವಿಡ್ ಲಾಕ್‌ಡೌನ್ ಸಂದರ್ಭದಲ್ಲಿ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಚೇತನ್ ವಿರುದ್ಧ ದೂರು ಕೊಡಿಸಲು ಸಚಿನ್, ರಕ್ಷಿತ್ ಮೂಲಕ ತನ್ನ ಮೇಲೆ ಒತ್ತಡ ಹೇರಿದ್ದಾರೆ. ಸೂರಜ್ ಪ್ರಭಾವಿ ಕುಟುಂಬದವರಾಗಿದ್ದು ಭಯದಿಂದ ವಿಚಾರವನ್ನು ಯಾರಿಗೂ ತಿಳಿಸಿರಲಿಲ್ಲ ಎಂದು ಶಿವಕುಮಾರ್ ದೂರಿನಲ್ಲಿ ವಿವರಿಸಿದ್ದಾರೆ. ಈ ಪ್ರಕರಣದಲ್ಲಿ ಸೂರಜ್ ನಿರೀಕ್ಷಣಾ ಜಾಮೀನು ಕೋರಿದ್ದಾರೆ.