WhatsApp 
ಸುದ್ದಿಗಳು

ವಾಟ್ಸಾಪ್‌ನಲ್ಲಿ ಬಿಜೆಪಿ ಪರ ಪ್ರಚಾರದ ಸಂದೇಶ ರವಾನೆ: ಸರ್ಕಾರಿ ನೌಕರನ ಅಮಾನತು ಆದೇಶಕ್ಕೆ ಹೈಕೋರ್ಟ್‌ ತಡೆ

ಹಾಸನ ಲೋಕಸಭಾ ಕ್ಷೇತ್ರದ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದೆ. ಹೀಗಾಗಿ, ಅರ್ಜಿದಾರರನ್ನು ಸೇವೆಯಿಂದ ಅಮಾನತ್ತಿನಲ್ಲಿಟ್ಟಿರುವುದನ್ನು ಮುಂದುವರಿಸದೇ ಇರುವುದು ಸೂಕ್ತ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

Bar & Bench

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪರ ಪ್ರಚಾರದ ಸಂದೇಶವನ್ನು ವಾಟ್ಸಾಪ್‌ ಗುಂಪಿಗೆ ರವಾನಿಸಿದ ಆರೋಪದ ಮೇಲೆ ಹಾಸನದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರ ಕಚೇರಿಯ ಪ್ರಥಮ ದರ್ಜೆಯ ಸಹಾಯಕ ಬಿ ಎಚ್ ಮಂಜುನಾಥ್ ಅವರನ್ನು ಸೇವೆಯಿಂದ ಅಮಾನುತುಗೊಳಿಸಿದ್ದ ಜಿಲ್ಲಾ ಚುನಾವಣಾ ಅಧಿಕಾರಿಯ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಈಚೆಗೆ ತಡೆಯಾಜ್ಞೆ ನೀಡಿದೆ.

ಹಾಸನ ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿಯ ಆದೇಶ ಪ್ರಶ್ನಿಸಿ ಬಿ ಎಚ್ ಮಂಜುನಾಥ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಎಸ್‌ ಸುನಿಲ್ ದತ್‌ ಯಾದವ್ ಮತ್ತು ಟಿ ವೆಂಕಟೇಶ್‌ ನಾಯ್ಕ್‌ ಅವರ ನೇತೃತ್ವದ ವಿಭಾಗೀಯ ಪೀಠ ನಡೆಸಿತು.

ಅರ್ಜಿಯೊಂದಿಗೆ ಸಲ್ಲಿಸಿರುವ ದಾಖಲೆ ಪರಿಶೀಲಿಸಿದ ಪೀಠವು ಸದ್ಯ ಹಾಸನ ಲೋಕಸಭಾ ಕ್ಷೇತ್ರದ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದೆ. ಹೀಗಾಗಿ, ಅರ್ಜಿದಾರರನ್ನು ಸೇವೆಯಿಂದ ಅಮಾನತ್ತಿನಲ್ಲಿಟ್ಟಿರುವುದನ್ನು ಮುಂದುವರಿಸದೇ ಇರುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿತು. ಅಲ್ಲದೇ, ಜಿಲ್ಲಾ ಚುನಾವಣಾಧಿಕಾರಿಯ ಆದೇಶಕ್ಕೆ ತಡೆಯಾಜ್ಞೆ ನೀಡಿ ಅರ್ಜಿ ವಿಚಾರಣೆ ಮುಂದೂಡಿತು.

ಪ್ರತಿವಾದಿಗಳಾಗಿರುವ ಹಾಸನ ಜಿಲ್ಲಾ ಚುನಾವಣಾಧಿಕಾರಿ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರಿಗೆ ನೋಟಿಸ್‌ ಜಾರಿಗೊಳಿಸಿದೆ.

ಅರ್ಜಿ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಮಂಜುನಾಥ್‌ ಯಾವುದೇ ರಾಜಕೀಯ ಪಕ್ಷದ ಪರವಾಗಿ ಕೆಲಸ ಮಾಡಿಲ್ಲ. ಯಾವುದೇ ರಾಜಕೀಯ ಪಕ್ಷದ ಪ್ರಚಾರದಲ್ಲೂ ಭಾಗಿಯಾಗಿಲ್ಲ. ಅವರು ಯಾವುದೇ ಸಂದೇಶ ಸಹ ರವಾನಿಸಿಲ್ಲ. ಆದರೆ, ಅವರ ಮೊಬೈಲ್‌ನಿಂದ ಅವರ ಸಂಬಂಧಿ ಎಚ್‌ ಜಿ ಮುಖೇಶ ಗೌಡ ವಿವಾದಿತ ಸಂದೇಶ ರವಾನಿಸಿದ್ದಾರೆ. ಅದನ್ನು ಮುಖೇಶ್‌ ಗೌಡ ಸಹ ಪ್ರಕರಣದ ಇಲಾಖಾ ವಿಚಾರಣೆಯಲ್ಲಿ ಒಪ್ಪಿಕೊಂಡಿದ್ದಾರೆ. ಅದನ್ನು ಪರಿಗಣಿಸದೆ ಅರ್ಜಿದಾರನ್ನು ಸೇವೆಯಿಂದ ಅಮಾನತು ಮಾಡಲಾಗಿದ್ದು, ಆ ಆದೇಶವನ್ನು ರದ್ದುಪಡಿಸಬೇಕು ಎಂದು ಕೋರಿದರು.

ಪ್ರಕರಣದ ಹಿನ್ನೆಲೆ: ಅರ್ಜಿದಾರರರು 2024ರ ಮಾರ್ಚ್‌ 31ರಂದು ಬಿಜೆಪಿ ಪರ ಚುನಾವಣಾ ಪ್ರಚಾರದ ಸಂದೇಶವನ್ನು “ಹಾಸನ ಪ್ರೀತಂ ಜೆ. ಗೌಡ ಎಂಎಲ್ಎ” ಎಂಬ ವಾಟ್ಸಾಪ್‌ ಗುಂಪಿಗೆ ರವಾನಿಸಿದ್ದಾರೆ ಎಂದು ಆರೋಪಿಸಿ ನಾಗೇಂದ್ರ ರಾಮ ಎಂಬುವವರು ಜಿಲ್ಲಾ ಚುನಾವಣಾ ಅಧಿಕಾರಿಗೆ ಇ-ಮೇಲ್‌ ಮೂಲಕ ದೂರು ಸಲ್ಲಿಸಿದ್ದರು. ಆ ಬಗ್ಗೆ ವಿಚಾರಣೆ ನಡೆಸಿ, ಅರ್ಜಿದಾರನ್ನು ಸೇವೆಯಿಂದ ಅಮಾನತುಗೊಳಿಸಿ ಏಪ್ರಿಲ್‌ 8ರಂದು ಜಿಲ್ಲಾ ಚುನಾವಣಾಧಿಕಾರಿ ಆದೇಶಿಸಿದ್ದರು.

ಈ ಆದೇಶ ಪ್ರಶ್ನಿಸಿ ಮಂಜುನಾಥ್‌ ಕರ್ನಾಟಕ ಆಡಳಿತಾತ್ಮಕ ನ್ಯಾಯಾಧಿಕರಣಕ್ಕೆ (ಕೆಎಟಿ) ಅರ್ಜಿ ಸಲ್ಲಿಸಿದ್ದರು. ಅರ್ಜಿದಾರರ ಅಮಾನತು ಆದೇಶಕ್ಕೆ ತಡೆ ನೀಡಲು ಕೆಎಟಿ ನಿಕಾಕರಿತ್ತು. ಇದರಿಂದ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.