High Court of Karnataka 
ಸುದ್ದಿಗಳು

ಹಾವೇರಿಯ ನೆಲವಾಗಿಲು ಗ್ರಾಮಸ್ಥರಿಗೆ ಪುನರ್ವಸತಿ: ಸರ್ಕಾರಕ್ಕೆ ಕೊನೆಯ ಬಾರಿಗೆ ಎರಡು ವಾರ ಕಾಲಾವಕಾಶ ನೀಡಿದ ಹೈಕೋರ್ಟ್‌

ಹಾವೇರಿ ಜಿಲ್ಲೆಯ ನೆಲವಾಗಿಲು ಗ್ರಾಮಸ್ಥರಿಗೆ ಕೊಡಿಯಾಲದಲ್ಲಿ ಪುನರ್ವಸತಿ ಕಲ್ಪಿಸುವುದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ 1993ರಲ್ಲಿ ಆದೇಶ ಹೊರಡಿಸಿದ್ದರೂ ಇದುವರೆವಿಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅರ್ಜಿ ಸಲ್ಲಿಕೆ.

Bar & Bench

ಹಾವೇರಿ ಜಿಲ್ಲೆಯ ನೆಲವಾಗಿಲು ಗ್ರಾಮವನ್ನು ಅದೇ ಜಿಲ್ಲೆಯ ಕೊಡಿಯಾಲ ಗ್ರಾಮಕ್ಕೆ ಸ್ಥಳಾಂತರಿಸುವ ಸಂಬಂಧ ಎರಡು ವಾರಗಳಲ್ಲಿ ಸ್ಥಿತಿಗತಿ ವರದಿ ಸಲ್ಲಿಸಲು ರಾಜ್ಯ ಸರ್ಕಾರ ವಿಫಲವಾದರೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ನ್ಯಾಯಾಲಯದ ಮುಂದೆ ಖುದ್ದು ವಿಚಾರಣೆಗೆ ಹಾಜರಾಗಬೇಕು ಎಂದು ಸೋಮವಾರ ಕರ್ನಾಟಕ ಹೈಕೋರ್ಟ್‌ ಆದೇಶಿಸಿದೆ.

ಹಾವೇರಿ ಜಿಲ್ಲೆಯ ನೆಲವಾಗಿಲು ಗ್ರಾಮಸ್ಥರಿಗೆ ಕೊಡಿಯಾಲದಲ್ಲಿ ಪುನರ್ವಸತಿ ಕಲ್ಪಿಸುವುದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ 1993ರಲ್ಲಿ ಆದೇಶ ಹೊರಡಿಸಿದ್ದರೂ ಇದುವರೆಗೂ ಯಾವುದೇ ಕ್ರಮವಾಗದಿರುವುದರ ಕುರಿತು ರೇಣುಕಾ ಹಾಗೂ ಮತ್ತಿರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಮನವಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಮತ್ತು ನ್ಯಾಯಮೂರ್ತಿ ಸೂರಜ್‌ ಗೋಂವಿದರಾಜ್‌ ನೇತೃತ್ವದ ವಿಭಾಗೀಯ ಪೀಠವು ವಿಚಾರಣೆ ನಡೆಸಿತು.

“ಹಾವೇರಿ ಜಿಲ್ಲೆಯ ನೆಲವಾಗಿಲು ಗ್ರಾಮಸ್ಥರನ್ನು ಅದೇ ಜಿಲ್ಲೆಯ ಕೊಡಿಯಾಲ ಗ್ರಾಮಕ್ಕೆ ಸ್ಥಳಾಂತರಿಸುವ ಸಂಬಂಧ ರಾಜ್ಯ ಸರ್ಕಾರ 1993ರಲ್ಲಿ ಆದೇಶ ಹೊರಡಿಸಿತ್ತು. ಆದರೆ, ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಪರಿಸ್ಥಿತಿಯ ಆತಂಕಕಾರಿ ಬೆಳವಣಿಗೆಯ ಕುರಿತು ನ್ಯಾಯಾಲಯವು 2020ರ ಅಕ್ಟೋಬರ್‌ 9ರಂದು ಹೊರಡಿಸಿರುವ ಆದೇಶದಲ್ಲಿ ಹೇಳಿತ್ತು. ಆನಂತರ ಹಲವು ಆದೇಶಗಳನ್ನು ಹೊರಡಿಸಿದ್ದರೂ ಯಾವುದೇ ಕ್ರಮವನ್ನು ರಾಜ್ಯ ಸರ್ಕಾರ ಕೈಗೊಂಡಿಲ್ಲ. ಈ ಮಧ್ಯೆ, ರಾಜ್ಯ ಸರ್ಕಾರದ ವಕೀಲರು ಸ್ಥಿತಿಗತಿ ವರದಿ ಸಲ್ಲಿಸಲು ಎರಡು ವಾರಗಳ ಕಾಲಾವಕಾಶ ಕೇಳಿದ್ದಾರೆ. ಅಂತಿಮ ಅವಕಾಶವಾಗಿ ಕೊನೆಯ ಬಾರಿಗೆ ಸರ್ಕಾರಕ್ಕೆ ಕಾಲಾವಕಾಶ ನೀಡಲಾಗುತ್ತಿದೆ. ಆಗಲೂ ನ್ಯಾಯಾಲಯದ ಆದೇಶದ ಪಾಲಿಸಲು ವಿಫಲವಾದರೆ ಮೊದಲ ಪ್ರತಿವಾದಿಯಾದ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸಂಬಂಧಪಟ್ಟ ದಾಖಲೆಗಳೊಂದಿಗೆ ನ್ಯಾಯಾಲಯದ ಮುಂದೆ ಖುದ್ದು ಹಾಜರಾಗಬೇಕು” ಎಂದು ನ್ಯಾಯಾಲಯ ಹೇಳಿದ್ದು, ವಿಚಾರಣೆಯನ್ನು ಜನವರಿ 18ಕ್ಕೆ ಮುಂದೂಡಿದೆ.

ಅರ್ಜಿದಾರರನ್ನು ಪ್ರತಿನಿಧಿಸಿದ್ದ ವಕೀಲ ಎನ್‌ ಪಿ ಅಮೃತೇಶ್‌ ಅವರು “ಇಷ್ಟು ವರ್ಷಗಳಾದರೂ ರಾಜ್ಯ ಸರ್ಕಾರ ಯಾವುದೇ ಕ್ರಮಕೈಗೊಂಡಿಲ್ಲ” ಎಂದು ಪೀಠದ ಗಮನಸೆಳೆದರು.