Shirur landslide 
ಸುದ್ದಿಗಳು

ಶಿರೂರು ಗುಡ್ಡ ಕುಸಿತ: ಮೃತದೇಹ ದೊರೆಯದ ಇಬ್ಬರ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರ ಪಾವತಿಸಲು ಹೈಕೋರ್ಟ್‌ ಗಡುವು

“11 ಮಂದಿಯ ಪೈಕಿ ಒಟ್ಟಾರೆ 9 ಮಂದಿ ಮೃತದೇಹ ಪತ್ತೆಯಾಗಿದ್ದು, ಪರಿಹಾರ ಕಾರ್ಯ ನಿಲ್ಲಿಸಲಾಗಿದೆ. ಇನ್ನಿಬ್ಬರ ಕುಟುಂಬದವರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ ₹5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ” ಎಂದು ಹೈಕೋರ್ಟ್‌ಗೆ ತಿಳಿಸಿದ ಸರ್ಕಾರ.

Bar & Bench

ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲ್ಲೂಕಿನ ಶಿರೂರು ಗ್ರಾಮ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ-66ರ ಅಂಚಿನಲ್ಲಿ ಉಂಟಾದ ಗುಡ್ಡ ಕುಸಿತ ಪ್ರಕರಣದಲ್ಲಿ ಲಾರಿ ಚಾಲಕ ಅರ್ಜುನ್‌ ಸೇರಿ 9 ಮಂದಿಯ ಮೃತದೇಹಗಳು ಪತ್ತೆಯಾಗಿವೆ. ಇಬ್ಬರ ಮೃತದೇಹಗಳು ಪತ್ತೆಯಾಗಿಲ್ಲವಾದ್ದರಿಂದ ಅವರ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರ ಪಾವತಿ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ಆದೇಶದಲ್ಲಿ ದಾಖಲಿಸಿರುವ ಕರ್ನಾಟಕ ಹೈಕೋರ್ಟ್‌ ಅರ್ಜಿ ವಿಲೇವಾರಿ ಮಾಡಿದೆ.

ವಕೀಲ ಶಿಜಿ ಮಲಯಾಳಿ ಹಾಗೂ ನವದೆಹಲಿಯ ಕೆ ಆರ್ ಸುಭಾಷ್‌ ಚಂದ್ರನ್‌ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್‌ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್‌ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಕೇಂದ್ರ ಸರ್ಕಾರದ ಪರವಾಗಿ ಹಾಜರಾಗಿದ್ದ ಸಹಾಯಕ ಸಾಲಿಸಿಟರ್‌ ಜನರಲ್‌ ಎಚ್‌ ಶಾಂತಿಭೂಷಣ್‌ ಅವರು “ಲಾರಿ ಮತ್ತು ಅದರ ಚಾಲಕ ಅರ್ಜುನ್‌ ಮೃತದೇಹ ಪತ್ತೆಯಾಗಿರುವುದರಿಂದ ಅರ್ಜಿಯ ಉದ್ದೇಶ ಈಡೇರಿದಂತಾಗಿದೆ. ಒಟ್ಟು 11 ಮಂದಿಯ ಪೈಕಿ ಒಟ್ಟಾರೆ 9 ಮಂದಿಯ ಮೃತದೇಹ ಪತ್ತೆಯಾದಂತಾಗಿದೆ. ಈ ಸಂಬಂಧ ಸೂಕ್ತವಾದ ಅಫಿಡವಿಟ್‌ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ" ಎಂದರು.

ರಾಜ್ಯ ಸರ್ಕಾರದ ಪರವಾಗಿ ಹಾಜರಾಗಿದ್ದ ವಕೀಲೆ ನಿಲೋಫರ್‌ ಅಕ್ಬರ್‌ ಅವರು “11 ಮಂದಿಯ ಪೈಕಿ ಒಟ್ಟಾರೆ 9 ಮಂದಿಯ ಮೃತದೇಹ ಪತ್ತೆಯಾಗಿದ್ದು, ಪರಿಹಾರ ಕಾರ್ಯವನ್ನು ನಿಲ್ಲಿಸಲಾಗಿದೆ. ಇನ್ನಿಬ್ಬರ ಕುಟುಂಬದವರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ ₹5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದ್ದು, ಅದನ್ನು ಬಿಡುಗಡೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ” ಎಂದರು.

ಅರ್ಜಿದಾರರ ಪರ ವಕೀಲರು ಲಾರಿ ಚಾಲಕ ಅರ್ಜುನ್‌ ಮೃತದೇಹ ಪತ್ತೆಯಾಗಿದೆ. ಈ ಸಂಬಂಧ ನ್ಯಾಯಾಲಯವು ಸೂಕ್ತ ಆದೇಶ ಮಾಡಬಹುದು ಎಂದರು. ಎಲ್ಲರ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ಎರಡು ತಿಂಗಳ ಒಳಗೆ ಪತ್ತೆಯಾಗದ ಇಬ್ಬರು ಸಂತ್ರಸ್ತರ ಕುಟುಂಬದವರಿಗೆ ತಲಾ ಐದು ಲಕ್ಷ ರೂಪಾಯಿ ಪರಿಹಾರವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಬೇಕು ಎಂದು ಆದೇಶಿಸಿ, ಅರ್ಜಿ ಇತ್ಯರ್ಥಪಡಿಸಿತು.