Karnataka High Court 
ಸುದ್ದಿಗಳು

ಸರ್ ಸೈಯದ್ ಅಹ್ಮದ್ ಖಾನ್ ಸಂಶೋಧನಾ ಕೇಂದ್ರದ ಕಾರ್ಯವೈಖರಿ: ಕ್ರಮಕೈಗೊಳ್ಳಲು ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಅಲ್ಪಸಂಖ್ಯಾತ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳು, ಕಲ್ಯಾಣ ಕಾರ್ಯಕ್ರಮಗಳ ಕುರಿತು ಸಂಶೋಧನಾ ಅಧ್ಯಯನ ನಡೆಸಿ ವರದಿ ಸಲ್ಲಿಸಲು 2015ರಲ್ಲಿ ಸರ್ ಸೈಯದ್ ಅಹ್ಮದ್ ಖಾನ್ ಸಂಶೋಧನಾ ಕೇಂದ್ರ ಸ್ಥಾಪಿಸಲಾಗಿದೆ.

Bar & Bench

ಡಾ. ಬಿ ಆರ್ ಅಂಬೇಡ್ಕರ್ ಸಮಾಜ ಕಲ್ಯಾಣ ಸಂಶೋಧನಾ ಸಂಸ್ಥೆಯ ಮಾದರಿಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಕಲ್ಯಾಣದ ಕುರಿತು ಸಂಶೋಧನೆ ಮತ್ತು ಚಟುವಟಿಕೆಗಳನ್ನು ಕೈಗೊಳ್ಳಲು ಅಲ್ಪಸಂಖ್ಯಾತ ಕಲ್ಯಾಣ ನಿರ್ದೇಶನಾಲಯದ ವತಿಯಿಂದ 2015ರಲ್ಲಿ ಸ್ಥಾಪಿಸಲಾಗಿರುವ ಸರ್ ಸೈಯದ್ ಅಹ್ಮದ್ ಖಾನ್ ಸಂಶೋಧನಾ ಕೇಂದ್ರದ ಕಾರ್ಯವೈಖರಿ ಕುರಿತು ಮಾಡಲಾಗಿರುವ ಆರೋಪಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಜರುಗಿಸುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಮಂಗಳವಾರ ನಿರ್ದೇಶನ ನೀಡಿದೆ.

ಬೆಂಗಳೂರಿನ ಸಾಮಾಜಿಕ ಕಾರ್ಯಕರ್ತ ಮೊಹಮ್ಮದ್ ವಜೀರ್ ಬೇಗ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ ಎಂ ಪೂಣಚ್ಚ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ವಕೀಲರು “ಡಾ. ಬಿ ಆರ್ ಅಂಬೇಡ್ಕರ್ ಸಮಾಜ ಕಲ್ಯಾಣ ಸಂಶೋಧನಾ ಸಂಸ್ಥೆ ಹಾಗೂ ದಿವಂಗತ ದೇವರಾಜ ಅರಸು ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಮಾದರಿಯಲ್ಲಿ ಅಲ್ಪಸಂಖ್ಯಾತ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳು, ಕಲ್ಯಾಣ ಕಾರ್ಯಕ್ರಮಗಳ ಕುರಿತು ಸಂಶೋಧನಾ ಅಧ್ಯಯನ ನಡೆಸಿ ವರದಿ ಸಲ್ಲಿಸಲು 2015ರಲ್ಲಿ ಸರ್ ಸೈಯದ್ ಅಹ್ಮದ್ ಖಾನ್ ಸಂಶೋಧನಾ ಕೇಂದ್ರ ಸ್ಥಾಪಿಸಲಾಗಿದೆ. ಈ ಸಂಸ್ಥೆಗೆ ವರ್ಷಕ್ಕೆ 4.5 ಕೋಟಿ ರೂಪಾಯಿ ಹಣ ನೀಡಲಾಗುತ್ತಿದೆ. ಆದರೆ, ಕಳೆದ 10 ವರ್ಷಗಳಲ್ಲಿ ಒಂದೇ ಒಂದು ಸಂಶೋಧನೆ ನಡೆಸಿದ ಉದಾಹರಣೆ ಇಲ್ಲ. ನಿರ್ದೇಶಕರ ವಿರುದ್ಧ ತನಿಖೆಗೆ ಆದೇಶಿಸಲಾಗಿದೆ. ಅದೇ ರೀತಿ ಸಂಶೋಧನಾ ಕೇಂದ್ರದ ಕಾರ್ಯವೈಖರಿ ಬಗ್ಗೆ ತನಿಖೆ ನಡೆಸಲು ಆದೇಶಿಸಬೇಕು” ಎಂದು ಕೋರಿದರು.

ವಾದ ಆಲಿಸಿದ ಪೀಠವು ಅರ್ಜಿಯಲ್ಲಿ ಸಂಶೋಧನಾ ಕೇಂದ್ರದ ಕಾರ್ಯವೈಖರಿ ಬಗ್ಗೆ ಮಾಡಲಾಗಿರುವ ಆರೋಪಗಳನ್ನು ಪರಿಶೀಲಿಸಿ ತಪ್ಪುಗಳು ಕಂಡು ಬಂದರೆ ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯಕ್ಕೆ ನಿರ್ದೇಶನ ನೀಡಿ ಅರ್ಜಿ ಇತ್ಯರ್ಥಪಡಿಸಿತು.