Veerendra Heggade and Karnataka HC
Veerendra Heggade and Karnataka HC X Corp
ಸುದ್ದಿಗಳು

ಸೌಜನ್ಯ ಪ್ರಕರಣ: ತಿಮ್ಮರೋಡಿ ಅಧೀನ ನ್ಯಾಯಾಲಯದ ಆದೇಶ ಉಲ್ಲಂಘಿಸದಂತೆ ನೋಡಿಕೊಳ್ಳಲು ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

Bar & Bench

ಸೌಜನ್ಯ ಕೊಲೆ ಪ್ರಕರಣ ಮುಂದಿಟ್ಟುಕೊಂಡು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಮತ್ತು ಕುಟುಂಬ ಸದಸ್ಯರ ವಿರುದ್ಧ ಹೇಳಿಕೆ ನೀಡದಂತೆ ಮಹೇಶ್ ಶೆಟ್ಟಿ ತಿಮ್ಮರೋಡಿ ಅವರಿಗೆ ಅಧೀನ ನ್ಯಾಯಾಲಯ ನೀಡಿರುವ ಪ್ರತಿಬಂಧಕಾದೇಶ ಉಲ್ಲಂಘನೆ ಆಗದ ರೀತಿ ನೋಡಿಕೊಳ್ಳುವಂತೆ ರಾಜ್ಯ ಸರ್ಕಾರ ಹಾಗೂ ಗೃಹ ಇಲಾಖೆಗೆ ಕರ್ನಾಟಕ ಹೈಕೋರ್ಟ್ ಗುರುವಾರ ನಿರ್ದೇಶನ ನೀಡಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಶೀನಪ್ಪ ಮತ್ತು ನಂದೀಶ್ ಕುಮಾರ್ ಜೈನ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನೇತೃತ್ವದ ಏಕಸದಸ್ಯ ಪೀಠವು ವಿಚಾರಣೆ ನಡೆಸಿತು.

ಅರ್ಜಿದಾರರ ಪರ ವಕೀಲ ಎಸ್ ರಾಜಶೇಖರ್ ವಾದ ಆಲಿಸಿದ ನ್ಯಾಯಾಲಯವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾನಿರ್ದೇಶಕರು, ಬೆಂಗಳೂರು ನಗರ ಪೊಲೀಸ್ ಆಯುಕ್ತರು, ದಕ್ಷಿಣ ಕನ್ನಡ ಎಸ್ಪಿ, ಬಂಟ್ವಾಳ ಡಿವೈಎಸ್ಪಿ, ಬೆಳ್ತಂಗಡಿ ಹಾಗೂ ಧರ್ಮಸ್ಥಳ ಪೊಲೀಸ್ ಠಾಣಾಧಿಕಾರಿಗಳು, ಮಹೇಶ್ ಶೆಟ್ಟಿ ತಿಮ್ಮರೋಡಿ ಅವರಿಗೆ ನೋಟಿಸ್ ಜಾರಿಗೊಳಿಸಿತು. ಅಲ್ಲದೇ ಅಧೀನ ನ್ಯಾಯಾಲಯದ ಪ್ರತಿಬಂಧಕಾದೇಶ ಉಲ್ಲಂಘನೆ ಆಗದಂತೆ ನೋಡಿಕೊಳ್ಳಲು ನಿರ್ದೇಶನ ನೀಡಿತು. ಇದೇ ವೇಳೆ ಮಹೇಶ್ ಶೆಟ್ಟಿ ಅವರು ಕೋರ್ಟ್ ಆದೇಶ ಉಲ್ಲಂಘಿಸಿ ಯಾವುದೇ ಹೇಳಿಕೆ ನೀಡಬಾರದು ಎಂದು ಮೌಖಿಕ ಎಚ್ಚರಿಕೆ ಸಹ ನೀಡಿದೆ.

ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ತನಿಖೆಯನ್ನಾದರೂ ನಡೆಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು. ನ್ಯಾಯಾಂಗ ಮತ್ತು ಧರ್ಮಸ್ಥಳದ ಮಂಜುನಾಥ ದೇವಾಲಯದ ವಿರುದ್ಧ ನಿಂದನಾತ್ಮಕ ಹೇಳಿಕೆ ನೀಡುತ್ತಿರುವ ಉಜಿರೆಯ ಮಹೇಶ್ ತಿಮ್ಮರೋಡಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ನಿರ್ದೇಶಿಸಬೇಕು ಎಂದು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.