Karnataka HC and CBI 
ಸುದ್ದಿಗಳು

ಸೌಜನ್ಯ ಕೊಲೆ ಪ್ರಕರಣ: ವಿಚಾರಣಾಧೀನ ನ್ಯಾಯಾಲಯದ ಆದೇಶ ಪ್ರಶ್ನಿಸಿ ಹೈಕೋರ್ಟ್‌ ಕದತಟ್ಟಿದ ಸಿಬಿಐ

ಸಿಬಿಐ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಸಿಬಿಐ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದು, ಅರ್ಜಿಯು ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ವಿಚಾರಣಾಧೀನ ನ್ಯಾಯಾಲಯ ತೀರ್ಪು ನೀಡಿದ ನಾಲ್ಕು ತಿಂಗಳ ಬಳಿಕ ಸಿಬಿಐ ಮೇಲ್ಮನವಿ ಸಲ್ಲಿಸಿದೆ.

Bar & Bench

ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಯನ್ನು ಖುಲಾಸೆಗೊಳಿಸಿ ಕೇಂದ್ರೀಯ ತನಿಖಾ ದಳದ (ಸಿಬಿಐ) ವಿಶೇಷ ನ್ಯಾಯಾಲಯ ನೀಡಿದ್ದ ತೀರ್ಪು ಪ್ರಶ್ನಿಸಿ ಇದೀಗ ಸಿಬಿಐ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದೆ.

ಸಿಬಿಐ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಸಿಬಿಐ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದು, ಅರ್ಜಿಯು ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ವಿಚಾರಣಾಧೀನ ನ್ಯಾಯಾಲಯ ತೀರ್ಪು ನೀಡಿದ ನಾಲ್ಕು ತಿಂಗಳ ಬಳಿಕ ಸಿಬಿಐ ಮೇಲ್ಮನವಿ ಸಲ್ಲಿಸಿದೆ.

2012ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಘಟನೆ ನಡೆದಿತ್ತು. ಪ್ರಕರಣವನ್ನು ಮೊದಲಿಗೆ ಬೆಳ್ತಂಗಡಿ ಠಾಣಾ ಪೊಲೀಸರು ತನಿಖೆ ನಡೆಸಿದ್ದರು. ಬಳಿಕ ತನಿಖೆಯನ್ನು ಸಿಐಡಿಗೆ ವಹಿಸಲಾಗಿತ್ತು. 2013ರ ನವೆಂಬರ್‌ 6ರಂದು ಸರ್ಕಾರವು ಸಿಬಿಐಗೆ ತನಿಖೆಗೆ ಆದೇಶಿಸಿತ್ತು. ತನಿಖಾಧಿಕಾರಿಗಳು ಕಾರ್ಕಳ ಮೂಲದ ಸಂತೋಷ್ ರಾವ್ ಎಂಬಾತನನ್ನು ಆರೋಪಿಯಾಗಿ ಗುರುತಿಸಿದ್ದರು.

ಆದರೆ, ಪ್ರಕರಣದ ವಿಚಾರಣೆಯ ನಂತರ ಸಿಬಿಐ ವಿಶೇಷ ನ್ಯಾಯಾಲಯವು 2023ರ ಜುಲೈ 16ರಂದು ಆರೋಪಿಯನ್ನು ಖುಲಾಸೆಗೊಳಿಸಿತ್ತು. ಇದರಿಂದ ವಿವಿಧ ಸಂಘಟನೆಗಳು ರಾಜಕೀಯ ಪಕ್ಷಗಳು ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದವು. ಹೀಗಾಗಿ, ಮರು ತನಿಖೆಗೆ ಆದೇಶಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಸಲಾಗಿತ್ತು.

ಇದಕ್ಕೆ ಪ್ರತಿಕ್ರಿಯಿಸಿದ್ದ ಪೀಠವು ಪ್ರಕರಣದಲ್ಲಿ ಸರ್ಕಾರ, ಮೂಲ ದೂರುದಾರರು ಅಥವಾ ಸಂತ್ರಸ್ತ ಕುಟುಂಬವು ಆರೋಪಿಯನ್ನು ದೋಷಮುಕ್ತಗೊಳಿಸಿದ ವಿಚಾರಣಾಧೀನ ನ್ಯಾಯಾಲಯದ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದಿತ್ತು.