Chandru Lamani 
ಸುದ್ದಿಗಳು

ಗುತ್ತಿಗೆದಾರನಿಂದ ₹5 ಲಕ್ಷ ಲಂಚ ಸ್ವೀಕಾರ: ಬಿಜೆಪಿ ಶಾಸಕ ಚಂದ್ರು ಲಮಾಣಿಗೆ ಜಾಮೀನು ಮಂಜೂರು ಮಾಡಿದ ವಿಶೇಷ ನ್ಯಾಯಾಲಯ

ಐದು ಲಕ್ಷ ರೂಪಾಯಿ ಮೌಲ್ಯದ ವೈಯಕ್ತಿಕ ಬಾಂಡ್‌, ಇಬ್ಬರ ಭದ್ರತೆ, ವಿಚಾರಣೆಗೆ ತಪ್ಪದೇ ಹಾಜರಾಗಬೇಕು. ಪ್ರಕರಣದ ಸಾಕ್ಷಿಗಳನ್ನು ನೇರ ಅಥವಾ ಪರೋಕ್ಷವಾಗಿ ಸಂಪರ್ಕಿಸಬಾರದು ಮತ್ತು ಪ್ರಭಾವ ಬೀರಬಾರದು ಎಂಬ ಷರತ್ತುಗಳನ್ನು ನ್ಯಾಯಾಲಯ ವಿಧಿಸಿದೆ.

Bar & Bench

ಗುತ್ತಿಗೆದಾರರಿಂದ ₹5 ಲಕ್ಷ ಲಂಚ ಪಡೆದ ಆರೋಪದಲ್ಲಿ ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಬಿಜೆಪಿಯ ಶಿರಹಟ್ಟಿ ಶಾಸಕ ಚಂದ್ರು ಲಮಾಣಿಯವರಿಗೆ ಜನಪ್ರತಿನಿಧಿಗಳ ವಿಶೇಷ  ನ್ಯಾಯಾಲಯವು ಬುಧವಾರ ಜಾಮೀನು ಮಂಜೂರು ಮಾಡಿದೆ.

ಬಿಜೆಪಿಯ ಚಂದ್ರು ಲಮಾಣಿ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್‌ ಗಜಾನನ ಭಟ್ ಅವರು ಪುರಸ್ಕರಿಸಿದ್ದಾರೆ.

ಐದು ಲಕ್ಷ ರೂಪಾಯಿ ಮೌಲ್ಯದ ವೈಯಕ್ತಿಕ ಬಾಂಡ್‌, ಇಬ್ಬರ ಭದ್ರತೆ, ವಿಚಾರಣೆಗೆ ತಪ್ಪದೇ ಹಾಜರಾಗಬೇಕು. ಪ್ರಕರಣದ ಸಾಕ್ಷಿಗಳನ್ನು ನೇರ ಅಥವಾ ಪರೋಕ್ಷವಾಗಿ ಸಂಪರ್ಕಿಸಬಾರದು ಮತ್ತು ಪ್ರಭಾವ ಬೀರಬಾರದು. ಸಾಕ್ಷ್ಯ ನಾಶಕ್ಕೆ ಪ್ರಯತ್ನಿಸಬಾರದು. ನ್ಯಾಯಾಲಯದಿಂದ ಲಿಖತ ಅನುಮತಿ ಪಡೆಯದೇ ದೇಶ ತೊರೆಯಬಾರದು, ತನಿಖೆ ಸಂದರ್ಭದಲ್ಲಿ ತನಿಖಾಧಿಕಾರಿಗಳಿಗೆ ಸಹಕರಿಸಬೇಕು ಎಂಬ ಷರತ್ತುಗಳನ್ನು ನ್ಯಾಯಾಲಯ ವಿಧಿಸಿದೆ. ವಿಸ್ತೃತ ಆದೇಶ ಇನ್ನಷ್ಟೇ ಬಿಡುಗಡೆಯಾಗಬೇಕು. ಫೆಬ್ರವರಿ 21ರಂದು ಲಂಚ ಪಡೆಯುವಾಗ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದರು.

ಪ್ರಕರಣ ಹಿನ್ನೆಲೆ: ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಸಂಕದಾಳ ಗ್ರಾಮ ವ್ಯಾಪ್ತಿಯಲ್ಲಿ ₹1 ಕೋಟಿ ವೆಚ್ಚದಲ್ಲಿ ಚೆಕ್‌ ಡ್ಯಾಂ ಮತ್ತು ತಡೆಗೋಡೆ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ. ಪ್ರಥಮ ದರ್ಜೆ ಗುತ್ತಿಗೆದಾರ ವಿಜಯ್ ಪೂಜಾರ್‌ ಈ ಗುತ್ತಿಗೆ ಪಡೆದುಕೊಂಡಿದ್ದರು. ಈ ಬಾಕಿ ಕಾಮಗಾರಿ ಮುಂದುವರೆಸಲು ಶಾಸಕ ಚಂದ್ರು ಲಮಾಣಿ ಅವರು ಗುತ್ತಿಗೆದಾರ ವಿಜಯ್‌ ಪೂಜಾರ್‌ಗೆ ₹11 ಲಕ್ಷ ಲಂಚಕ್ಕೆ ಬೇಡಿಕೆ ಇರಿಸಿದ್ದರು ಎನ್ನಲಾಗಿದೆ.

ಈ ಸಂಬಂಧ ಗುತ್ತಿಗೆದಾರ ವಿಜಯ್‌ ಪೂಜಾರ್‌ ಗದಗ ಲೋಕಾಯುಕ್ತ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಅದರಂತೆ ಫೆಬ್ರವರಿ 21ರಂದು ಲಕ್ಮೇಶ್ವರದ ಬಾಲಾಜಿ ಆಸ್ಪತ್ರೆಯಲ್ಲಿ ಗುತ್ತಿಗೆದಾರ ವಿಜಯ್‌ರಿಂದ ₹5 ಲಕ್ಷ ಲಂಚ ಸ್ವೀಕರಿಸುವಾಗ ಮೂವರು ಆರೋಪಿಗಳು ಲೋಕಾಯುಕ್ತ ಪೊಲೀಸರಿಗೆ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದರು. ಬಳಿಕ ಮೂವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು.

ಗುತ್ತಿಗೆದಾರ ಮತ್ತು ಶಾಸಕ ಚಂದ್ರು ಲಮಾಣಿ ನಡುವೆ ನಡೆದ ಸಂಭಾಷಣೆ ಆಡಿಯೊವನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಶಾಸಕರು ಕಮಿಷನ್‌ ಬಗ್ಗೆ ಮಾತನಾಡಿರುವುದು ಹಾಗೂ ಗುತ್ತಿಗೆದಾರನಿಗೆ ಬೆದರಿಕೆ ಹಾಕಿರುವುದು ಆಡಿಯೊದಲ್ಲಿದೆ ಎನ್ನಲಾಗಿದೆ. ಈ ಸಂಬಂಧ ಗದಗ ಲೋಕಾಯುಕ್ತ ಪೊಲೀಸ್‌ ಠಾಣೆಯಲ್ಲಿ ಭ್ರಷ್ಟಾಚಾರ ನಿಗ್ರಹ ಕಾಯಿದೆ ಅಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.