ಸುದ್ದಿಗಳು

ಮುಡಾ ಪ್ರಕರಣ: ಜಿ ಟಿ ದಿನೇಶ್‌ ಕುಮಾರ್‌ಗೆ ಜಾಮೀನು ಮಂಜೂರು ಮಾಡಿದ ವಿಶೇಷ ನ್ಯಾಯಾಲಯ

ಜಿ ಟಿ ದಿನೇಶ್‌ ಕುಮಾರ್‌ ಮುಡಾ ಆಯುಕ್ತರಾಗಿದ್ದ ಅವಧಿಯಲ್ಲಿ ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು ಅಕ್ರಮವಾಗಿ ಅನರ್ಹರಿಗೆ ನಿವೇಶನಗಳನ್ನು ಹಂಚಿಕೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ.

Bar & Bench

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆ ನಡೆಸುತ್ತಿರುವ ಪ್ರಕರಣದಲ್ಲಿ ಜಿ ಟಿ ದಿನೇಶ್‌ ಕುಮಾರ್ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸೋಮವಾರ ಷರತ್ತುಬದ್ಧ ಡಿಫಾಲ್ಟ್‌ ಜಾಮೀನು ಮಂಜೂರು ಮಾಡಿದೆ.

ದಿನೇಶ್‌ ಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ಜಾಮೀನು ಮಂಜೂರು ಮಾಡಿ ಸೋಮವಾರ ಆದೇಶಿಸಿದರು.

₹1 ಲಕ್ಷ ಮೊತ್ತದ ವೈಯಕ್ತಿಕ ಬಾಂಡ್‌ ಮತ್ತು ಇಷ್ಟೇ ಮೊತ್ತಕ್ಕೆ ಒಬ್ಬರ ಭದ್ರತೆ. ಆರೋಪಿಗಳು ಪ್ರಾಸಿಕ್ಯೂಷನ್‌ ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು. ಆರೋಪಿಗಳು ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಸಾಕ್ಷಿಗಳನ್ನು ಪ್ರಭಾವಿಸಬಾರದು. ತನಿಖಾಧಿಕಾರಿಗಳು ಸೂಚಿಸಿದಾಗ ಆರೋಪಿಗಳು ಅವರ ಮುಂದೆ ಹಾಜರಾಗಬೇಕು ಮತ್ತು ತನಿಖೆಗೆ ಸಹಕರಿಸಬೇಕು. ನ್ಯಾಯಾಲಯದ ಅನುಮತಿ ಇಲ್ಲದೇ ವಿದೇಶ ಪ್ರವಾಸ ಕೈಗೊಳ್ಳುವಂತಿಲ್ಲ ಎಂಬ ಷರತ್ತುಗಳನ್ನು ಪೀಠ ವಿಧಿಸಿದೆ.

ಜಿ ಟಿ ದಿನೇಶ್‌ ಕುಮಾರ್‌ ಮುಡಾ ಆಯುಕ್ತರಾಗಿದ್ದ ಅವಧಿಯಲ್ಲಿ ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು ಅಕ್ರಮವಾಗಿ ಅನರ್ಹರಿಗೆ ನಿವೇಶನಗಳನ್ನು ಹಂಚಿಕೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ.