ಸುದ್ದಿಗಳು

ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಾಸಕ ಸತೀಶ್ ಸೈಲ್‌ಗೆ ಏಳು ದಿನ ಮಧ್ಯಂತರ ಜಾಮೀನು ಮಂಜೂರು ಮಾಡಿದ ವಿಶೇಷ ನ್ಯಾಯಾಲಯ

ಬೇಲೆಕೇರಿ ಬಂದರಿನಿಂದ ಅಕ್ರಮ ಅದಿರು ಸಾಗಣೆ ಪ್ರಕರಣದಲ್ಲಿ ಸತೀಶ್‌ ಸೈಲ್‌ಗೆ ವಿಶೇಷ ನ್ಯಾಯಾಲಯವು ಏಳು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಇದಕ್ಕೆ ಹೈಕೋರ್ಟ್‌ ತಡೆ ನೀಡಿದೆ. ಇದೇ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಸೈಲ್‌ರನ್ನು ಬಂಧಿಸಿದೆ.

Bar & Bench

ಅಕ್ರಮ ಅದಿರು ಸಾಗಣೆ ಪ್ರಕರಣ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಆರೋಪದಡಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿರುವ ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಏಳು ದಿನಗಳ ವೈದ್ಯಕೀಯ ಮಧ್ಯಂತರ ಜಾಮೀನು ಮಂಜೂರು ಮಾಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಗುರುವಾರ ಆದೇಶಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಬಂಧನಕ್ಕೊಳಗಾಗಿದ್ದ ಸತೀಶ್ ಸೈಲ್ ಅವರನ್ನು ಎರಡು ದಿನಗಳ ಅವಧಿಗೆ ಇ ಡಿ ಕಸ್ಟಡಿಗೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಬುಧವಾರವಷ್ಟೇ ಆದೇಶಿಸಿದ್ದರು.

ಆದರೆ, ಇಡಿ ಕಸ್ಟಡಿಯಲ್ಲಿದ್ದಾಗಲೇ ಅನಾರೋಗ್ಯವಾದ ಹಿನ್ನೆಲೆಯಲ್ಲಿ ಸತೀಶ್ ಸೈಲ್ ಅವರನ್ನು ಅಧಿಕಾರಿಗಳು ಗುರುವಾರವೇ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.

ಸತೀಶ್ ಸೈಲ್ ಪರ ವಕೀಲರು, ಉಸಿರಾಟದ ಸಮಸ್ಯೆ, ಲಿವರ್ ಸಿರೋಸಿಸ್‌ ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ಸತೀಶ್ ಸೈಲ್‌ಗೆ ಚಿಕಿತ್ಸೆಯ ಅಗತ್ಯವಿದೆ. ಆದ್ದರಿಂದ, ಮಧ್ಯಂತರ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿದರು. ಮನವಿ ಪರಿಗಣಿಸಿದ ನ್ಯಾಯಾಲಯವು ಏಳು ದಿನಗಳ ಅವಧಿಗೆ ವೈದ್ಯಕೀಯ ಮಧ್ಯಂತರ ಜಾಮೀನು ಮಂಜೂರು ಮಾಡಿತು.

ಬೇಲೆಕೇರಿ ಬಂದರಿನಿಂದ ಅಕ್ರಮ ಅದಿರು ಸಾಗಣೆ ಪ್ರಕರಣದಲ್ಲಿ ಸತೀಶ್‌ ಸೈಲ್‌ಗೆ ವಿಶೇಷ ನ್ಯಾಯಾಲಯವು ಏಳು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಇದಕ್ಕೆ ಹೈಕೋರ್ಟ್‌ ತಡೆ ನೀಡಿದೆ. ಇದೇ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಸೈಲ್‌ ಅವರನ್ನು ಬಂಧಿಸಿದೆ.