ಸುಪ್ರೀಂ ಕೋರ್ಟ್, ಚುನಾವಣಾ ಆಯೋಗ 
ಸುದ್ದಿಗಳು

ಚುನಾವಣಾ ಆಯುಕ್ತರ ನೇಮಕಕ್ಕೆ ಸಂಬಂಧಿಸಿದ ಹೊಸ ಕಾಯಿದೆಗೆ ತಡೆ ನೀಡಲು ಮತ್ತೆ ನಿರಾಕರಿಸಿದ ಸುಪ್ರೀಂ ಕೋರ್ಟ್‌

ಈ ರೀತಿ ಮಧ್ಯಂತರ ತಡೆಯಾಜ್ಞೆ ನೀಡಲು ಸಾಧ್ಯವಿಲ್ಲ; ಸಾಂವಿಧಾನಿಕ ಸಿಂಧುತ್ವದ ವಿಷಯಗಳು ಎಂದಿಗೂ ನಿಷ್ಪ್ರಯೋಜಕವಲ್ಲ ಎಂದು ನ್ಯಾಯಾಲಯ ಹೇಳಿದೆ.

Bar & Bench

ಚುನಾವಣಾ ಆಯುಕ್ತರ ನೇಮಕಾತಿಯನ್ನು ನಿಯಂತ್ರಿಸುವ ಹೊಸ ಕಾಯಿದೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ [ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತ ಒಕ್ಕೂಟ ನಡುವಣ ಪ್ರಕರಣ]. ಇದರೊಂದಿಗೆ ಇತ್ತೀಚಿನ ದಿನಗಳಲ್ಲಿ ಈ ಕಾಯಿದೆಗೆ ತಡೆ ನೀಡಲು ಸುಪ್ರೀಂ ಕೋರ್ಟ್‌ ಎರಡನೆಯ ಬಾರಿಗೆ ನಿರಾಕರಿಸಿದಂತಾಗಿದೆ.

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರಿದ್ದ ಪೀಠ ಈ ಹಂತದಲ್ಲಿ ಮಧ್ಯಂತರ ತಡೆಯಾಜ್ಞೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ.

ಇದೇ ವೇಳೆ ಚುನಾವಣಾ ಆಯುಕ್ತರನ್ನು ನೇಮಕ ಮಾಡುವಾಗ ಕಾರ್ಯಾಂಗಕ್ಕೆ ಹೆಚ್ಚಿನ ಆದ್ಯತೆ ನೀಡುವ ಹೊಸ ಕಾಯಿದೆ ಪ್ರಶ್ನಿಸಿ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ (ಪಿಐಎಲ್) ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಅದು ನೋಟಿಸ್ ನೀಡಿತು.

ಚುನಾವಣಾ ಆಯುಕ್ತರಲ್ಲಿ ಒಬ್ಬರು ಶೀಘ್ರದಲ್ಲೇ ನಿವೃತ್ತರಾಗುತ್ತಿರುವುದರಿಂದ ಮತ್ತು ಮುಂಬರುವ ಲೋಕಸಭಾ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ತಡೆಯಾಜ್ಞೆ ವಿಧಿಸುವ ಅಗತ್ಯವಿದೆ. ಹೊಸ ಕಾಯಿದೆಗೆ ತಡೆ ನೀಡಲು ನ್ಯಾಯಾಲಯ ನಿರಾಕರಿಸಿದರೆ ಪ್ರಕರಣ ನಿಷ್ಪ್ರಯೋಜನಕಾರಿಯಾಗಲಿದೆ ಎಂದು ಎಂದು ಎಡಿಆರ್ ಪರ ವಕೀಲ ಪ್ರಶಾಂತ್ ಭೂಷಣ್ ಅವರು ಮನವಿ ಮಾಡಿದರು.

ಆದರೆ, ನ್ಯಾಯಮೂರ್ತಿ ಖನ್ನಾ ಅವರು "ನಾವು ಈ ರೀತಿ ಮಧ್ಯಂತರ ತಡೆಯಾಜ್ಞೆ ನೀಡಲು ಸಾಧ್ಯವಿಲ್ಲ. ಸಾಂವಿಧಾನಿಕ ಸಿಂಧುತ್ವದ ವಿಷಯಗಳು ಎಂದಿಗೂ ನಿಷ್ಪ್ರಯೋಜಕವಲ್ಲ" ಎಂದರು.

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ. ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್.

ಇತ್ತೀಚೆಗೆ ಜಾರಿಗೆ ಬಂದ ಕಾಯಿದೆ ಪ್ರಶ್ನಿಸಿ ಕಾಂಗ್ರೆಸ್ ನಾಯಕಿ ಡಾ. ಜಯಾ ಠಾಕೂರ್ ಅವರು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಾಲಯ ಕಳೆದ ತಿಂಗಳು ಕೇಂದ್ರ ಸರ್ಕಾರ ಮತ್ತು ಭಾರತದ ಚುನಾವಣಾ ಆಯೋಗಕ್ಕೆ (ಇಸಿಐ) ನೋಟಿಸ್ ನೀಡಿತ್ತು. ಆಗಲೂ ಪ್ರಕರಣ ಕುರಿತಂತೆ ತಡೆ ನೀಡಲು ಅದು ನಿರಾಕರಿಸಿತ್ತು.

ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ (ನೇಮಕಾತಿ, ಸೇವಾ ಷರತ್ತುಗಳು ಮತ್ತು ಅಧಿಕಾರಾವಧಿ) ಕಾಯಿದೆ - 2023, ಸಿಇಸಿ ಮತ್ತು ಚುನಾವಣಾ ಆಯುಕ್ತರ ಹುದ್ದೆಗಳನ್ನು ಪ್ರಧಾನಿ, ಕೇಂದ್ರ ಸಂಪುಟ ಸಚಿವರು ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ಆಯ್ಕೆ ಸಮಿತಿಯ ನೇಮಕ ಮಾಡಲು ಅವಕಾಶ ನೀಡುತ್ತದೆ.

ಚುನಾವಣಾ ಆಯೋಗದ ಸದಸ್ಯರ ನೇಮಕಾತಿಗೆ "ಸ್ವತಂತ್ರ ಕಾರ್ಯವಿಧಾನವನ್ನು" ಒದಗಿಸದ ಕಾರಣ ಕಾಯಿದೆಯ ನಿಬಂಧನೆಗಳು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯ ತತ್ವವನ್ನು ಉಲ್ಲಂಘಿಸುತ್ತವೆ ಎಂದು ಅರ್ಜಿದಾರರು ವಾದಿಸಿದ್ದರು.

ಭಾರತದ ಚುನಾವಣಾ ಆಯೋಗದ ಸದಸ್ಯರ ನೇಮಕಾತಿ ಪ್ರಕ್ರಿಯೆಯಿಂದ ಭಾರತದ ಮುಖ್ಯ ನ್ಯಾಯಮೂರ್ತಿ ಅವರನ್ನು (ಸಿಜೆಐ) ಹೊರಗಿಡುವುದರಿಂದ ಈ ಕಾಯಿದೆ ಅನೂಪ್ ಬರನ್ವಾಲ್ ಮತ್ತು ಭಾರತ ಒಕ್ಕೂಟ ನಡುವಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪನ್ನು ಉಲ್ಲಂಘಿಸಿದೆ ಎಂದು ದೂರಲಾಗಿತ್ತು.

ಎಡಿಆರ್‌ ಸಲ್ಲಿಸಿರುವ ಅರ್ಜಿಯನ್ನು ಜಯಾ ಠಾಕೂರ್‌ ಅವರ ಅರ್ಜಿಯೊಂದಿಗೆ ಮಂಗಳವಾರ ಸೇರಿಸಿದ ನ್ಯಾಯಾಲಯ ಪ್ರಕರಣದ ವಿಚಾರಣೆಯನ್ನು ಏಪ್ರಿಲ್‌ಗೆ ಮುಂದೂಡಿತು.