ದೇಶದ್ರೋಹವನ್ನು ಅಪರಾಧೀಕರಿಸುವ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124ಎ ಅನ್ನು ವಜಾ ಮಾಡುವ ಅರ್ಜಿಯನ್ನು ಪರಿಶೀಲಿಸುವಂತೆ ಭಾರತದ ಅಟಾರ್ನಿ ಜನರಲ್ ಕೆ ಕೆ ವೇಣುಗೋಪಾಲ್ ಅವರಿಗೆ ಸುಪ್ರೀಂ ಕೋರ್ಟ್ ಬುಧವಾರ ಆದೇಶಿಸಿದೆ.
ತಮ್ಮ ಮನವಿಯ ಒಂದು ಪ್ರತಿಯನ್ನು ಅಟಾರ್ನಿ ಜನರಲ್ ಅವರಿಗೆ ತಲುಪಿಸುವಂತೆ ಅರ್ಜಿದಾರರಾದ ನಿವೃತ್ತ ಮೇಜರ್ ಜನರಲ್ ಎಸ್ ಜಿ ಒಂಬತ್ತುಕೆರೆ ಅವರಿಗೆ ಸಿಜೆಐ ಎನ್ ವಿ ರಮಣ ನೇತೃತ್ವದ ಪೀಠವು ಆದೇಶಿಸಿದ್ದು, ಗುರುವಾರಕ್ಕೆ ವಿಚಾರಣೆ ಮುಂದೂಡಿದೆ.
“ಅಟಾರ್ನಿ ಜನರಲ್ ಅವರ ಕಚೇರಿಗೆ ಮನವಿಯ ಒಂದು ಪ್ರತಿಯನ್ನು ಕಳುಹಿಸಿಕೊಡಿ. ನಾಳೆ ನಾವು ಪ್ರಕರಣದ ವಿಚಾರಣೆ ನಡೆಸುತ್ತೇವೆ” ಎಂದು ನ್ಯಾಯಾಲಯ ಹೇಳಿತು. ಸೆಕ್ಷನ್ 124ಎ ಸಿಂಧುತ್ವ ಪ್ರಶ್ನಿಸಿರುವ ಮನವಿಯೊಂದನ್ನು ಈಗಾಗಲೇ ಸುಪ್ರೀಂ ಕೋರ್ಟ್ ತನ್ನ ವಶಕ್ಕೆ ಪಡೆದುಕೊಂಡಿದೆ.
ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಉಲ್ಲಂಘಿಸುವ ಸೆಕ್ಷನ್ 124ಎ ನಿಬಂಧನೆಯ ಸಿಂಧುತ್ವವನ್ನು ಪ್ರಶ್ನಿಸಿ ಮಣಿಪುರದ ಪತ್ರಕರ್ತ ಕಿಶೋರ್‌ಚಂದ್ರ ವಾಂಗ್‌ಕೆಮ್ಚಾ ಮತ್ತು ಛತ್ತೀಸ್‌ಗಢದ ಪತ್ರಕರ್ತ ಕನ್ಹಯ್ಯಾ ಲಾಲ್ ಶುಕ್ಲಾ ಅವರು ಸಲ್ಲಿಸಿದ್ದ ಮನವಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿಗಳಾದ ಯು ಯು ಲಲಿತ್, ಇಂದಿರಾ ಬ್ಯಾನರ್ಜಿ ಮತ್ತು ಕೆ ಎಂ ಜೋಸೆಫ್ ನೇತೃತ್ವದ ತ್ರಿಸದಸ್ಯ ಪೀಠವು ಕಳೆದ ವರ್ಷದ ಏಪ್ರಿಲ್‌ನಲ್ಲಿ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿತ್ತು.