ಮುಂದಿನ ತಿಂಗಳು ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ತಮಿಳುನಾಡು ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೆರಿಯಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೂ ಮುನ್ನ ಚುನಾವಣಾ ಬಾಂಡ್ ಮಾರಾಟಕ್ಕೆ ನಿಷೇಧ ಹೇರುವಂತೆ ಕೋರಿ ಸಲ್ಲಿಸಲಾಗಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ (ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ವರ್ಸಸ್ ಭಾರತ ಸರ್ಕಾರ).
ಸರ್ಕಾರೇತರ ಸಂಸ್ಥೆಯಾದ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಸಲ್ಲಿಸಿದ್ದ ಮನವಿಯನ್ನು ಆಧರಿಸಿ ಮುಖ್ಯ ನ್ಯಾಯಮೂರ್ತಿ ಎಸ್‌ಎ ಬೊಬ್ಡೆ, ನ್ಯಾಯಮೂರ್ತಿಗಳಾದ ಎ ಎಸ್ ಬೋಪಣ್ಣ ಮತ್ತು ವಿ ರಾಮಸುಬ್ರಮಣಿಯನ್ ಅವರಿದ್ದ ಪೀಠ ಆದೇಶ ಹೊರಡಿಸಿದೆ.
“… 2018ರಲ್ಲಿ ಯೋಜನೆ ಜಾರಿಗೊಳಿಸಿದ ಬಳಿಕ ಯಾವುದೇ ವಿರೋಧವಿಲ್ಲದೇ 2018, 2019 ಮತ್ತು 2020ರಲ್ಲಿ ಬಾಂಡ್‌ಗಳನ್ನು ವಿತರಿಸಲಾಗಿದೆ. ಈ ಹಂತದಲ್ಲಿ ಚುನಾವಣಾ ಬಾಂಡ್ ನೀಡುವುದಕ್ಕೆ ತಡೆ ನೀಡಲಾಗದು” ಎಂದು ತೀರ್ಪು ನೀಡುವ ಸಂದರ್ಭದಲ್ಲಿ ಸಿಜೆಐ ಬೊಬ್ಡೆ ಹೇಳಿದ್ದಾರೆ.
ಪಂಚರಾಜ್ಯಗಳಲ್ಲಿ ಶೀಘ್ರದಲ್ಲೇ ನಡೆಯಲಿರುವ ವಿಧಾನಸಭಾ ಚುನಾವಣೆಗಳಿಗೆ ಮುಂಚಿತವಾಗಿ ಚುನಾವಣಾ ಬಾಂಡ್‌ಗಳನ್ನು ಮಾರಾಟ ಮಾಡುವುದಕ್ಕೆ ಅವಕಾಶ ಮಾಡಿಕೊಡುವುದರಿಂದ ಶೆಲ್ ಕಂಪನಿಗಳ ಮೂಲಕ ರಾಜಕೀಯ ಪಕ್ಷಗಳಿಗೆ ಅಕ್ರಮ, ಅನೈತಿಕ ಹಣ ವರ್ಗಾವಣೆ ಹೆಚ್ಚಲಿದೆ ಎಂದು ಮನವಿಯಲ್ಲಿ ಗಂಭೀರ ಆತಂಕ ವ್ಯಕ್ತಪಡಿಸಲಾಗಿತ್ತು.
“ರಿಟ್ ಮನವಿ ವಿಚಾರಣೆಗೆ ಬಾಕಿ ಇರುವಾಗ ಚುನಾವಣಾ ಬಾಂಡ್‌ಗಳ ಮಾರಾಟಕ್ಕೆ ಅವಕಾಶ ಮಾಡಿಕೊಡಬಾರದು ಎಂದು ಅರ್ಜಿದಾರರು ಕೋರಿದ್ದಾರೆ” ಎಂದು ಮನವಿಯಲ್ಲಿ ತಿಳಿಸಲಾಗಿತ್ತು.
ಕಳೆದ ವರ್ಷದ ಜನವರಿಯಲ್ಲಿ ಪ್ರಕರಣದ ವಿಚಾರಣೆ ನಡೆದಿದ್ದು, ಆ ಬಳಿಕ ಡಿಸೆಂಬರ್ 27ರಲ್ಲಿ ಇದೇ ತೆರನಾದ ಮನವಿ ಸಲ್ಲಿಸುವ ಮೂಲಕ ತುರ್ತು ವಿಚಾರಣೆ ಕೋರಿದ್ದರೂ ಪ್ರಕರಣವನ್ನು ವಿಚಾರಣೆಗೆ ನಿಗದಿಗೊಳಿಸಲಾಗಿಲ್ಲ.
ಚುನಾವಣಾ ಬಾಂಡ್‌ಗಳ ಮೂಲಕ ಸ್ವೀಕರಿಸಲಾದ ನಿಧಿಯು ಕಾನೂನುಬದ್ಧವಾದ ಹಣವಾಗಿದ್ದು, ಅದನ್ನು ಚೆಕ್ ಅಥವಾ ಡಿಮ್ಯಾಂಡ್ ಡ್ರಾಫ್ಟ್ ಮೂಲಕ ನೀಡಲಾಗುತ್ತದೆ. ಇದಕ್ಕಾಗಿ 'ನಿಮ್ಮ ಗ್ರಾಹಕರ ಬಗ್ಗೆ ತಿಳಿದುಕೊಳ್ಳಿ' (ಕೆವೈಸಿ) ನಿಯಮಾವಳಿಗಳನ್ನು ಅನುಸರಿಸಲಾಗುತ್ತದೆ ಎಂದು ಅಟಾರ್ನಿ ಜನರಲ್ ಕೆ ಕೆ ವೇಣುಗೋಪಾಲ್ ಮತ್ತು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ನ್ಯಾಯಾಲಯಕ್ಕೆ ವಿಚಾರಣೆ ವೇಳೆ ಭರವಸೆ ನೀಡಿದ್ದರು.