ಸುದ್ದಿಗಳು

ಹತ್ಯೆ ಪ್ರಕರಣ: ಮಮತಾ ಬ್ಯಾನರ್ಜಿ ಬೆಂಬಲಿಗ ಸೂಪಿಯಾನ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

Bar & Bench

ಸಿಬಿಐ ತನಿಖೆ ನಡೆಸುತ್ತಿರುವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಅವರ ಚುನಾವಣಾ ಪ್ರತಿನಿಧಿ ಎಸ್‌ ಕೆ ಸೂಪಿಯಾನ್‌ಗೆ ಸುಪ್ರೀಂಕೋರ್ಟ್‌ ಬುಧವಾರ ನಿರೀಕ್ಷಣಾ ಜಾಮೀನು ನೀಡಿದೆ.

ಜಾಮೀನು ಅರ್ಜಿ ತಿರಸ್ಕರಿಸಿದ್ದ ಕಲ್ಕತ್ತಾ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸೂಪಿಯಾನ್‌ ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಮೇಲ್ಮನವಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿಗಳಾದ ಎಲ್ ನಾಗೇಶ್ವರ ರಾವ್ ಮತ್ತು ಅಭಯ್ ಎಸ್ ಓಕಾ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಜಾಮೀನು ನೀಡುವ ವೇಳೆ ವಿವಿಧ ಷರತ್ತುಗಳನ್ನು ನ್ಯಾಯಾಲಯ ವಿಧಿಸಿದೆ. ಜನವರಿ 20ರಂದು ಸುಪ್ರೀಂ ಕೋರ್ಟ್ ಸೂಪಿಯಾನ್‌ಗೆ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿತ್ತು.

ಪಶ್ಚಿಮ ಬಂಗಾಳದಲ್ಲಿ 2021ರ ಮೇನಲ್ಲಿ ನಡೆದ ವಿಧಾನಸಭಾ ಚುನಾವಣೆ ವೇಳೆ ಮಮತಾ ಬ್ಯಾನರ್ಜಿ ನೇತೃತ್ವದ ಅಖಿಲ ಭಾರತ ತೃಣಮೂಲ ಕಾಂಗ್ರೆಸ್‌ ಗೆಲುವು ಸಾಧಿಸಿತ್ತು. ನಂದಿಗ್ರಾಮದಲ್ಲಿ ಮಮತಾ ಸೋತರಾದರೂ ಅವರ ಪಕ್ಷ ರಾಜ್ಯದೆಲ್ಲೆಡೆ ಭರ್ಜರಿ ಗೆಲುವು ಸಾಧಿಸಿತ್ತು. ಆ ಬಳಿಕ ರಾಜ್ಯದಲ್ಲಿ ನಡೆದ ಚುನಾವಣೋತ್ತರ ಹಿಂಸಾಚಾರದ ಸಂದರ್ಭದಲ್ಲಿ ನಂದಿಗ್ರಾಮ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬನ ಹತ್ಯೆ ನಡೆದಿತ್ತು. ರಾಜ್ಯದಲ್ಲಿ ಆಡಳಿತ ಪಕ್ಷದ ಇಚ್ಛೆಯ ಮೇರೆಗೆ ನಡೆದಿದೆ ಎನ್ನಲಾದ ಹತ್ಯೆಗಳು ಮತ್ತು ಲೈಂಗಿಕ ದೌರ್ಜನ್ಯದ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಲ್ಕತ್ತಾ ಹೈಕೋರ್ಟ್‌ ಸಿಬಿಐ ತನಿಖೆಗೆ ಆದೇಶಿಸಿತ್ತು.ಅಡ್ವೊಕೇಟ್‌ ಆನ್‌ ರೆಕಾರ್ಡ್‌ ನೂಪುರ್‌ ಕುಮಾರ್‌ ಅವರ ಮೂಲಕ ಸೂಪಿಯಾನ್‌ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.