ಅಬಕಾರಿ ನೀತಿ ಪ್ರಕರಣದ ಭಾಗವಾಗಿ ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿ ತಿಹಾರ್ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜೂನ್ 1ರವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತ ನೇತೃತ್ವದ ವಿಭಾಗೀಯ ಪೀಠವು ಇಂದು ಆದೇಶ ಪ್ರಕಟಿಸಿತು.
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಚಾರ ಮಾಡಲು ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ಮಂಜೂರು ಮಾಡುವ ಕುರಿತು ಸುಪ್ರೀಂ ಕೋರ್ಟ್ ನೀಡಿದ್ದ ಸಲಹೆಗೆ ಜಾರಿ ನಿರ್ದೇಶನಾಲಯವು ಗುರುವಾರ ತೀವ್ರವಾಗಿ ವಿರೋಧಿಸಿತ್ತು.
ಕೇಜ್ರಿವಾಲ್ ಮಾರ್ಚ್ 21ರಂದು ಬಂಧಿತರಾಗಿದ್ದು, ತಿಹಾರ್ ಜೈಲಿನಲ್ಲಿದ್ದಾರೆ. ಜಾರಿ ನಿರ್ದೇನಾಲಯದ ಬಂಧನ ಪ್ರಶ್ನಿಸಿ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದ್ದು, ಇದರ ಭಾಗವಾಗಿ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿದೆ.
ಈಚೆಗೆ ದೆಹಲಿ ಹೈಕೋರ್ಟ್ ಕೇಜ್ರಿವಾಲ್ ಅರ್ಜಿ ವಜಾ ಮಾಡಿದ ಹಿನ್ನೆಲೆಯಲ್ಲಿ ಅವರು ಸರ್ವೋಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ.
ಮೇ 7ರ ವಿಚಾರಣೆಯಂದು ಸುಪ್ರೀಂ ಕೋರ್ಟ್ ಲೋಕಸಭಾ ಚುನಾವಣೆಯಲ್ಲಿ ಪ್ರಚಾರ ಮಾಡಲು ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ಮಂಜೂರು ಮಾಡುವ ಸುಳಿವು ನೀಡಿತ್ತು. ಮಧ್ಯಂತರ ಜಾಮೀನು ನೀಡಿದ್ದರೂ ಮುಖ್ಯಮಂತ್ರಿಯಾಗಿ ಯಾವುದೇ ಅಧಿಕೃತ ಕರ್ತವ್ಯ ನಿರ್ವಹಿಸಲು ಅನುಮತಿಸುವುದಿಲ್ಲ ಎಂದಿತ್ತು.
ಹಿಂದಿನ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್ ಸಾರ್ವತ್ರಿಕ ಚುನಾವಣೆಯ ಸಂದರ್ಭದಲ್ಲಿ ಕೇಜ್ರಿವಾಲ್ ಬಂಧನ ಮಾಡಿರುವ ಕುರಿತು ಜಾರಿ ನಿರ್ದೇಶನಾಲಯವನ್ನು ಪ್ರಶ್ನಿಸಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.