PM Narendra Modi and Supreme Court  
ಸುದ್ದಿಗಳು

ನರೇಂದ್ರ ಮೋದಿ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಬಂಧ ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಧರ್ಮದ ಹೆಸರಿನಲ್ಲಿ ಮತ ಕೇಳುವ ಮೂಲಕ ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಮೋದಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಗಿತ್ತು.

Bar & Bench

ಲೋಕಸಭಾ ಚುನಾವಣೆ ಪ್ರಚಾರದ ವೇಳೆ ದೇವರು ಮತ್ತು ಪೂಜಾ ಸ್ಥಳದ ಹೆಸರಿನಲ್ಲಿ ಮತ ಯಾಚಿಸುವ ಮೂಲಕ ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆರು ವರ್ಷಗಳ ಕಾಲ ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿರ್ಬಂಧಿಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಮಂಗಳವಾರ ತಿರಸ್ಕರಿಸಿದೆ [ಫಾತಿಮಾ ಮತ್ತು ಭಾರತೀಯ ಚುನಾವಣಾ ಆಯೋಗ ಇನ್ನಿತರರ ನಡುವಣ ಪ್ರಕರಣ].

ದೂರನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ನೀಡುವಂತೆ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸತೀಶ್ ಚಂದ್ರ ಶರ್ಮಾ ಅವರಿದ್ದ ಪೀಠ ಸೂಚಿಸಿತು.

“ನೀವು ಸಕ್ಷಮ ಪ್ರಾಧಿಕಾರಿಗಳನ್ನು ಸಂಪರ್ಕಿಸಿದ್ದೀರಾ. ರಿಟ್‌ ಮ್ಯಾಂಡಮಸ್‌ ಅರ್ಜಿ ಸಲ್ಲಿಸುವ ಮುನ್ನ ನೀವು ಸಕ್ಷಮ ಪ್ರಾಧಿಕಾರಿಗಳನ್ನು ಸಂಪರ್ಕಿಸಬೇಕು" ಎಂದು ನ್ಯಾಯಾಲಯ ನುಡಿಯಿತು.

ಬಳಿಕ ಅರ್ಜಿದಾರರು ಮನವಿ ಹಿಂಪಡೆಯಲು ನಿರ್ಧರಿಸಿದರು.

“ಅರ್ಜಿ ಹಿಂಪಡೆಯಲು ಅನುವಾಗುವಂತೆ ವಜಾಗೊಳಿಸಲಾಗಿದೆ. ಅಧಿಕಾರಿಗಳನ್ನು ಸಂಪರ್ಕಿಸಲು ಸ್ವಾತಂತ್ರ್ಯ, ಮುಂತಾದವನ್ನು ನಾವು ಅನುಮತಿಸುವುದಿಲ್ಲ. ಅದು (ಸಂಪರ್ಕಿಸುವುದು) ನಿಮ್ಮ ಕೆಲಸ” ಎಂದು ನ್ಯಾಯಾಲಯ ಹೇಳಿತು.

ಧರ್ಮದ ಹೆಸರಿನಲ್ಲಿ ಮತ ಕೇಳುವ ಮೂಲಕ ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಮೋದಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಫಾತಿಮಾ ಎಂಬಾಕೆ ಮನವಿ ಮಾಡಿದ್ದರು.

"ಹಿಂದೂ ದೇವತೆಗಳು ಮತ್ತು ಹಿಂದೂ ಪೂಜಾ ಸ್ಥಳ" ಹೆಸರಿನಲ್ಲಿ ಬಿಜೆಪಿಗೆ ಮತ ನೀಡುವಂತೆ ಪ್ರಧಾನಿ ಮೋದಿ ಮತದಾರರಲ್ಲಿ ಮನವಿ ಮಾಡಿದ್ದರು ಎಂದು ಮನವಿಯಲ್ಲಿ ತಿಳಿಸಲಾಗಿತ್ತು.

ವಕೀಲ ಆನಂದ್ ಎಸ್ ಜೊಂಧಲೆ ಅವರು ಸಲ್ಲಿಸಿದ್ದ ಇದೇ ಬಗೆಯ ಮನವಿಯನ್ನು ದೆಹಲಿ ಹೈಕೋರ್ಟ್‌ ಕೂಡ ಈಚೆಗೆ ತಿರಸ್ಕರಿಸಿತ್ತು.