DK Shivakumar, CBI and SC 
ಸುದ್ದಿಗಳು

ಡಿಕೆಶಿ ವಿರುದ್ಧದ ತನಿಖೆ ಪುನರಾರಂಭ ಕೋರಿದ್ದ ಸಿಬಿಐ: ರಾಜ್ಯ ಸರ್ಕಾರದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ ಡಿಸಿಎಂ ಡಿ ಕೆ ಶಿವಕುಮಾರ್ ವಿರುದ್ಧ ತನಿಖೆ ನಡೆಸಲು ಈ ಹಿಂದಿನ ಸರ್ಕಾರ ನೀಡಿದ್ದ ಅನುಮತಿ ಹಿಂಪಡೆದ ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಸಿಬಿಐ ಪ್ರಶ್ನಿಸಿತ್ತು.

Bar & Bench

ಆದಾಯ ಮೀರಿದ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧ ತನಿಖೆ ಪುನರಾರಂಭಿಸುವಂತೆ ಕೋರಿದ್ದ ಸಿಬಿಐ ಮನವಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಕರ್ನಾಟಕ ಸರ್ಕಾರ ಮತ್ತು ಶಿವಕುಮಾರ್‌ ಅವರ ಪ್ರತಿಕ್ರಿಯೆ ಕೇಳಿದೆ [ಸಿಬಿಐ ಮತ್ತು ಕರ್ನಾಟಕ ಸರ್ಕಾರ ಇನ್ನಿತರರ ನಡುವಣ ಪ್ರಕರಣ].

ಶಿವಕುಮಾರ್ ವಿರುದ್ಧ ಈ ಹಿಂದಿನ ಬಿಜೆಪಿ ಸರ್ಕಾರ ತನಿಖೆಗೆ ನೀಡಿದ್ದ ಅನುಮತಿಯನ್ನು ಹಾಲಿ ಕಾಂಗ್ರೆಸ್‌ ಸರ್ಕಾರ ಹಿಂಪಡೆದಿತ್ತು. ಸರ್ಕಾರದ ನಿರ್ಧಾರವನ್ನು ಸಿಬಿಐ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿತ್ತು. ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠ ಇಂದು ಈ ಸಂಬಂಧ ನೋಟಿಸ್ ಜಾರಿ ಮಾಡಿದೆ.

ವಿಶೇಷವೆಂದರೆ, ಸಿಬಿಐ ತನಿಖೆ ಪುನರಾರಂಭ ಮಾಡುವಂತೆ ಕೋರಿದ್ದ ತಮ್ಮ ಅರ್ಜಿಯನ್ನು ತಿರಸ್ಕರಿಸಿದ ಹೈಕೋರ್ಟ್ ತೀರ್ಪನ್ನು ಬಿಜೆಪಿ ಶಾಸಕ ಬಸನಗೌಡ ಆರ್ ಪಾಟೀಲ್ ಯತ್ನಾಳ್ ಕೂಡ ಪ್ರಶ್ನಿಸಿದ್ದಾರೆ.

ಕೇಂದ್ರ ಸಂಸ್ಥೆಯೊಂದು ಭಾಗಿಯಾಗಿರುವ ಕಾರಣ ಪ್ರಕರಣ ಕೇಂದ್ರ- ರಾಜ್ಯಕ್ಕೆ ಸಂಬಂಧಿಸಿದ ವ್ಯಾಜ್ಯವಾಗಿದ್ದು ಮನವಿ ನಿರ್ವಹಿಸಲು ಸಾಧ್ಯವಿಲ್ಲ ಎಂದು ತಿಳಿಸಿ ಹೈಕೋರ್ಟ್‌ ಈ ಹಿಂದೆ ಅರ್ಜಿ ತಿರಸ್ಕರಿಸಿತ್ತು. ತೀರ್ಪಿನ ವಿರುದ್ಧ ಯತ್ನಾಳ್‌ ಅವರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಆಗ ಪ್ರತಿವಾದಿಗಳಿಗೆ ನೋಟಿಸ್‌ ನೀಡಿದ್ದ ಸುಪ್ರೀಂ ಕೋರ್ಟ್‌ ಹೈಕೋರ್ಟ್‌ ತೀರ್ಪಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿತ್ತು. ಇದೀಗ ಹೈಕೋರ್ಟ್‌ ತೀರ್ಪನ್ನು ಸಿಬಿಐ ಕೂಡ ಪ್ರಶ್ನಿಸಿದೆ.

ಹಿನ್ನೆಲೆ

ಗುಜರಾತ್‌ ರಾಜ್ಯಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅಲ್ಲಿನ ಕಾಂಗ್ರೆಸ್‌ ಶಾಸಕರಿಗೆ ಡಿ ಕೆ ಶಿವಕುಮಾರ್‌ ಅವರು 2017ರ ಆಗಸ್ಟ್‌ 2ರಂದು ಬಿಡದಿಯ ಈಗಲ್‌ಟನ್‌ ರೆಸಾರ್ಟ್‌ನಲ್ಲಿ ಆಶ್ರಯ ಒದಗಿಸಿದ್ದರು. ಈ ಸಂದರ್ಭದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶಿವಕುಮಾರ್‌ ಅವರ ದೆಹಲಿ ನಿವಾಸ ಸೇರಿದಂತೆ ಹಲವು ಕಡೆ ಏಕಕಾಲಕ್ಕೆ ದಾಳಿ ನಡೆಸಿದ್ದರು. ದಾಳಿಯಲ್ಲಿ ಒಟ್ಟಾರೆ 8,59,69,100 ರೂಪಾಯಿ ಪತ್ತೆಯಾಗಿದ್ದು, ಶಿವಕುಮಾರ್‌ ಅವರಿಗೆ ಸೇರಿದ ಸ್ಥಳದಲ್ಲಿ 41 ಲಕ್ಷ ರೂಪಾಯಿ ಪತ್ತೆಯಾಗಿತ್ತು. ಇದರ ಆಧಾರದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಆದಾಯ ತೆರಿಗೆ ಕಾಯಿದೆ 1961ರ ವಿವಿಧ ಸೆಕ್ಷನ್‌ಗಳ ಅಡಿ ಶಿವಕುಮಾರ್‌ ಇತರರ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಇದರ ಬೆನ್ನಿಗೇ ಜಾರಿ ನಿರ್ದೇಶನಾಲಯ ದಾಳಿ ನಡೆಸಿ, ಪ್ರಕರಣ ದಾಖಲಿಸಿಕೊಂಡಿತ್ತು. 2019ರ ಸೆಪ್ಟೆಂಬರ್‌ 3ರಂದು ಶಿವಕುಮಾರ್‌ ಅವರನ್ನು ಬಂಧಿಸಲಾಗಿತ್ತು. ಆನಂತರ 2019ರ ಸೆಪ್ಟೆಂಬರ್‌ 9ರಂದು ಅಕ್ರಮ ಹಣ ವರ್ಗಾವಣೆ ಕಾಯಿದೆ ಸೆಕ್ಷನ್‌ 66(2) ಅಡಿ ಜಾರಿ ನಿರ್ದೇಶನಾಲಯದ ವಿಶೇಷ ನಿರ್ದೇಶಕರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದರು. ಇದನ್ನು ಆಧರಿಸಿ ಭ್ರಷ್ಟಾಚಾರ ನಿಷೇಧ ಕಾಯಿದೆಯ ವಿವಿಧ ಸೆಕ್ಷನ್‌ಗಳ ಅಡಿ ತನಿಖೆ ನಡೆಸಲು 2019ರ ಸೆಪ್ಟೆಂಬರ್‌ 25ರಂದು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಸಿಬಿಐಗೆ ಸಮ್ಮತಿ ನೀಡಿತ್ತು. ಈ ಅನುಮತಿಯನ್ನು ನಂತರ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಹಿಂಪಡೆದಿತ್ತು.