Supreme Court
Supreme Court 
ಸುದ್ದಿಗಳು

ಎಂಬತ್ತು ವಯೋಮಾನ ಮೀರಿದ ಕೈದಿಗಳ ಅವಧಿಪೂರ್ವ ಬಿಡುಗಡೆ: ಉತ್ತರ ಪ್ರದೇಶ ಸರ್ಕಾರದ ಪ್ರತಿಕ್ರಿಯೆ ಬಯಸಿದ ಸುಪ್ರೀಂ ಕೋರ್ಟ್

Bar & Bench

ಸುದೀರ್ಘ ವಿಚಾರಣೆಯ ಬಳಿಕ ಅಪರಾಧಿ ಎಂದು ಘೋಷಿತವಾಗಿರುವ 80 ವರ್ಷ ಅಥವಾ 80 ವಯೋಮಾನ ಮೀರಿದ ಕೈದಿಗಳ ಅವಧಿಪೂರ್ವ ಬಿಡುಗಡೆ ಪರಿಗಣಿಸುವ ಸಂಬಂಧ ಉತ್ತರ ಪ್ರದೇಶ ಸರ್ಕಾರವು ಯಾವುದಾದರೂ ನೀತಿ ರೂಪಿಸಿದೆಯೇ ಎಂಬುದರ ಕುರಿತು ಪ್ರತಿಕ್ರಿಯೆ ಸಲ್ಲಿಸುವಂತೆ ಈಚೆಗೆ ಸುಪ್ರೀಂ ಕೋರ್ಟ್‌ ಆದೇಶಿಸಿದೆ.

ಸೆಷನ್ಸ್‌ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿದಿದ್ದ ಅಲಾಹಾಬಾದ್‌ ಹೈಕೋರ್ಟ್‌ ತೀರ್ಪನ್ನು ಪ್ರಶ್ನಿಸಿ ಕೇದಾರ್ ಯಾದವ್‌ ಎಂಬಾತ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್‌ ವಿ ರಮಣ ಮತ್ತು ನ್ಯಾಯಮೂರ್ತಿಗಳಾದ ಸೂರ್ಯಕಾಂತ್‌ ಮತ್ತು ಹಿಮಾ ಕೊಹ್ಲಿ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.

ಅರ್ಜಿದಾರರನ್ನು ಪ್ರತಿನಿಧಿಸಿದ್ದ ಅಡ್ವೊಕೇಟ್‌ ಆನ್‌ ರೆಕಾರ್ಡ್‌ನ ಪಿ ವಿ ಯೋಗೇಶ್ವರನ್‌ ಅವರು “ಮೇಲ್ಮನವಿದಾರರಿಗೆ 80 ವಯೋಮಾನ ಮೀರಿದೆ” ಎಂದರು.

1985ರಲ್ಲಿ ಘಟನೆ ನಡೆದಿದ್ದು, ಅಲಾಹಾಬಾದ್‌ ಹೈಕೋರ್ಟ್‌ 2019ರಲ್ಲಿ ಅಂತಿಮ ಆದೇಶ ಹೊರಡಿಸಿದೆ ಎಂಬುದನ್ನು ಪೀಠವು ಗಮನಕ್ಕೆ ತೆಗೆದುಕೊಂಡಿತು. “ಸುದೀರ್ಘ ವಿಚಾರಣೆಯ ಬಳಿಕ ಅಪರಾಧಿ ಎಂದು ಘೋಷಿತವಾಗಿರುವ 80 ವಯೋಮಾನ ಮೀರಿದ ಕೈದಿಗಳ ಅವಧಿಪೂರ್ವ ಬಿಡುಗಡೆ ಪರಿಗಣಿಸುವ ಸಂಬಂಧ ಯಾವುದಾದರೂ ನೀತಿ ರೂಪಿಸಲಾಗಿದೆಯೇ ಎಂಬುದನ್ನು ತಿಳಿಯಲು ಉತ್ತರ ಪ್ರದೇಶ ಸರ್ಕಾರಕ್ಕೆ ಸೀಮಿತ ನೋಟಿಸ್‌ ಜಾರಿ ಮಾಡಲಾಗಿದೆ” ಎಂದು ಪೀಠವು ಆದೇಶದಲ್ಲಿ ಹೇಳಿತು.