Arvind Kejriwal and Atishi  
ಸುದ್ದಿಗಳು

ಕೇಜ್ರಿವಾಲ್, ದೆಹಲಿ ಸಿಎಂ ಆತಿಶಿ ವಿರುದ್ಧದ ಮಾನನಷ್ಟ ಮೊಕದ್ದಮೆಗೆ ಸುಪ್ರೀಂ ಕೋರ್ಟ್ ತಡೆ

ಆಪ್ ನಾಯಕರಾದ ಕೇಜ್ರಿವಾಲ್, ಆತಿಶಿ, ಸುಶೀಲ್ ಕುಮಾರ್ ಗುಪ್ತಾ ಹಾಗೂ ಮನೋಜ್ ಕುಮಾರ್ ವಿರುದ್ಧ ಬಿಜೆಪಿ ಮುಖಂಡ ರಾಜೀವ್ ಬಬ್ಬರ್ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

Bar & Bench

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತದಾರರ ಪಟ್ಟಿಯಿಂದ ಮತದಾರರ ಹೆಸರನ್ನು ತೆಗೆದುಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಆತಿಶಿ ಮತ್ತು ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ನೀಡಿದ್ದ ಹೇಳಿಕೆಗಳಿಗೆ ಆಕ್ಷೇಪಿಸಿ ಅವರ ವಿರುದ್ಧ ಹೂಡಲಾಗಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ  ಸುಪ್ರೀಂ ಕೋರ್ಟ್ ಸೋಮವಾರ ಮಧ್ಯಂತರ ತಡೆ ನೀಡಿದೆ [ಅರವಿಂದ್‌ ಕೇಜ್ರಿವಾಲ್‌ ಮತ್ತಿತರರು ಹಾಗೂ ದೆಹಲಿ ಸರ್ಕಾರ ಇನ್ನಿತರರ ನಡುವಣ ಪ್ರಕರಣ].

ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮತ್ತು ಬಿಜೆಪಿ ನಾಯಕ ರಾಜೀವ್ ಬಬ್ಬರ್ ಅವರ ಪ್ರತಿಕ್ರಿಯೆಯನ್ನು ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಮತ್ತು ಎಸ್‌ವಿಎನ್ ಭಟ್ಟಿ ಅವರಿದ್ದ ಪೀಠ ಕೇಳಿದೆ.

ಆಪ್ ನಾಯಕರಾದ ಕೇಜ್ರಿವಾಲ್, ಆತಿಶಿ, ಸುಶೀಲ್ ಕುಮಾರ್ ಗುಪ್ತಾ ಹಾಗೂ ಮನೋಜ್ ಕುಮಾರ್ ವಿರುದ್ಧ ಬಿಜೆಪಿ ಮುಖಂಡ ರಾಜೀವ್ ಬಬ್ಬರ್ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಪ್ರಕರಣ  ರದ್ದುಗೊಳಿಸುವಂತೆ ಕೋರಿ ಎಎಪಿ ನಾಯಕರು ಸಲ್ಲಿಸಿದ್ದ ಮನವಿಯನ್ನು ದೆಹಲಿ ಹೈಕೋರ್ಟ್ ಇತ್ತೀಚೆಗೆ ತಿರಸ್ಕರಿಸಿತ್ತು. ಹೀಗಾಗಿ ಕೇಜ್ರಿವಾಲ್ ಮತ್ತು ಆತಿಶಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ಬಿಜೆಪಿಯ ನಿರ್ದೇಶನದ ಮೇರೆಗೆ ಬನಿಯಾ , ಪೂರ್ವಾಂಚಲಿ ಮತ್ತು ಮುಸ್ಲಿಂ ಸಮುದಾಯಕ್ಕೆ ಸೇರಿದ ಸುಮಾರು 30 ಲಕ್ಷ ಮತದಾರರ ಹೆಸರನ್ನು ಚುನಾವಣಾ ಆಯೋಗ  ದೆಹಲಿಯ ಮತದಾರರ ಪಟ್ಟಿಯಿಂದ ತೆಗೆದು ಹಾಕಿದೆ ಎಂದು 2018ರ ಡಿಸೆಂಬರ್‌ನಲ್ಲಿ ಎಎಪಿ ನಾಯಕರು ಪತ್ರಿಕಾಗೋಷ್ಠಿ ನಡೆಸಿ ಆರೋಪಿಸಿದ್ದರು. ಈ ಹೇಳಿಕೆಯಿಂದ ಬಿಜೆಪಿ ಪ್ರತಿಷ್ಠೆಗೆ ಧಕ್ಕೆಯಾಗಿದೆ ಎಂದು ಬಬ್ಬರ್ ನ್ಯಾಯಾಲಯದ ಮೊರೆ ಹೋಗಿದ್ದರು.