ರೈತರನ್ನೂ ಒಳಗೊಂಡಂತೆ ಎಂಟು ಜನರ ಮೇಲೆ ವಾಹನ ಹರಿಸಿ ಹತ್ಯೆ ಮಾಡಿದ ಲಖಿಮ್‌ಪುರ್ ಖೇರಿ ಹಿಂಸಾಚಾರ ಘಟನೆಗೆ ಸಂಬಂಧಿಸಿದಂತೆ ಬುಧವಾರ ಸ್ವಯಂಪ್ರೇರಿತವಾಗಿ ಪ್ರಕರಣವನ್ನು ದಾಖಲಿಸಿಕೊಂಡಿರುವ ಸುಪ್ರೀಂಕೋರ್ಟ್ ಅ.7ರಂದು, ಗುರುವಾರ ವಿಚಾರಣೆ ನಡೆಸಲಿದೆ.
ಸಿಜೆಐ ಎನ್‌ವಿ ರಮಣ ಮತ್ತು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಹಿಮಾ ಕೊಹ್ಲಿ ಅವರಿರುವ ಪೀಠ ಪ್ರಕರಣದ ವಿಚಾರಣೆ ಕೈಗೆತ್ತಿಕೊಳ್ಳಲಿದೆ. ಹಿಂಸಾಚಾರದ ಹಿನ್ನೆಲೆಯಲ್ಲಿ, ಉತ್ತರ ಪ್ರದೇಶದ ಇಬ್ಬರು ವಕೀಲರು ಸಿಜೆಐ ಎನ್ ವಿ ರಮಣ ಅವರಿಗೆ ಪತ್ರ ಬರೆದು ಸಿಬಿಐ ಪ್ರಕರಣದ ವಿಚಾರಣೆ ನಡೆಸಬೇಕು ಎಂದು ಕೋರಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸುವಂತೆ ಮತ್ತು ಘಟನೆಯಲ್ಲಿ ಭಾಗಿಯಾದ ತಪ್ಪಿತಸ್ಥರಿಗೆ ಶಿಕ್ಷೆ ನೀಡಲು ಕೇಂದ್ರ ಗೃಹ ಸಚಿವಾಲಯಕ್ಕೆ ನಿರ್ದೇಶನ ನೀಡಬೇಕು ಎಂದು ತಮ್ಮ ಪತ್ರದಲ್ಲಿ, ವಕೀಲರಾದ ಶಿವಕುಮಾರ ತ್ರಿಪಾಠಿ ಮತ್ತು ಸಿಎಸ್ ಪಾಂಡ ತಿಳಿಸಿದ್ದರು.
ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಮತ್ತಿತರರ ವಿರುದ್ಧ ಈಗಾಗಲೇ ಎಫ್‌ಐಆರ್ ದಾಖಲಿಸಲಾಗಿದೆ. ರೈತರ ಪ್ರತಿಭಟನೆಯಲ್ಲಿ ಭಾನುವಾರ ಎಂಟು ಜನರು ಸಾವನ್ನಪ್ಪಿದ್ದು ಅವರಲ್ಲಿ ನಾಲ್ವರು ಬಿಜೆಪಿಗೆ ಕಾರ್ಯಕರ್ತರೆನ್ನಲಾಗಿದ್ದು ಉಳಿದ ನಾಲ್ವರು ರೈತರಾಗಿದ್ದಾರೆ. ಪ್ರತಿಭಟನಾಕಾರರ ಮೇಲೆ ಹರಿದ ವಾಹನದಲ್ಲಿ ಸಚಿವರ ಪುತ್ರ ಆಶಿಶ್ ಮಿಶ್ರಾ ಇದ್ದರು ಎಂದು ರೈತ ಮುಖಂಡರು ಹೇಳಿದ್ದಾರೆ.