ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್‌ಮುಖ್ ಅವರಿಗೆ ಜಾಮೀನು ನೀಡಿದ್ದ ಬಾಂಬೆ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್ ಮಂಗಳವಾರ ಎತ್ತಿಹಿಡಿದಿದೆ [ಜಾರಿ ನಿರ್ದೇಶನಾಲಯ (ಇ ಡಿ) ಮತ್ತು ಅನಿಲ್ ದೇಶ್‌ಮುಖ್ ನಡುವಣ ಪ್ರಕರಣ].
ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್ ಮತ್ತು ಹಿಮಾ ಕೊಹ್ಲಿ ಅವರಿದ್ದ ಪೀಠ ಪ್ರಕರಣದ ವಿಚಾರಣೆ ವೇಳೆ ಹೇಳಿತು.
ಆದರೆ ದೇಶ್‌ಮುಖ್ ಜಾಮೀನು ಪಡೆಯಲು ಅರ್ಹರೇ, ಅಲ್ಲವೇ ಎಂಬುದನ್ನು ನಿರ್ಧರಿಸಲು ಮಾತ್ರವೇ ಹೈಕೋರ್ಟ್ ಅವಲೋಕನ ಮಾಡಿದ್ದು ಅದು ವಿಚಾರಣೆ ಅಥವಾ ಇತರ ಯಾವುದೇ ಪ್ರಕ್ರಿಯೆಗಳ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.
ಇ ಡಿ ತನಿಖೆ ನಡೆಸುತ್ತಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಅಕ್ಟೋಬರ್ 4 ರಂದು ದೇಶ್‌ಮುಖ್‌ಗೆ ಜಾಮೀನು ನೀಡಿತ್ತು. ಹೈಕೋರ್ಟ್ ಆದೇಶದ ವಿರುದ್ಧ ಜಾರಿ ನಿರ್ದೇಶನಾಲಯ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು. ಜಾರಿ ನಿರ್ದೇಶನಾಲಯದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ದೇಶ್‌ಮುಖ್ ಪರವಾಗಿ ಹಿರಿಯ ನ್ಯಾಯವಾದಿ ಕಪಿಲ್ ಸಿಬಲ್ ವಾದ ಮಂಡಿಸಿದರು.