ನ್ಯಾಯಾಲಯದ ಕಲಾಪಗಳ ನಕಲು/ಲಿಪ್ಯಂತರ, ನ್ಯಾಯಾಂಗ ದಾಖಲೆ ಮತ್ತು ಇತರೆ ಮಾಹಿತಿಯನ್ನು ಅನುವಾದ ಮಾಡಲು ಕೃತಕ ಬುದ್ಧಿಮತ್ತೆ (ಆರ್ಟಿಫಿಶಿಯಲ್ ಇಂಟೆಲಿಜೆನ್ಸ್) ನೆರವಿನಿಂದ ₹2 ಕೋಟಿ ವೆಚ್ಚದಲ್ಲಿ ಸ್ಮಾರ್ಟ್ ವ್ಯವಸ್ಥೆ ರೂಪಿಸಲಾಗುವುದು ಎಂದು ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಬಜೆಟ್‌ನಲ್ಲಿ ಘೋಷಿಸಿದ್ದಾರೆ.
ರಾಜ್ಯ ಹೈಕೋರ್ಟ್ ಮತ್ತು ಜಿಲ್ಲಾ ನ್ಯಾಯಾಲಯಗಳಲ್ಲಿನ ಗ್ರಂಥಾಲಯಗಳನ್ನು ಮೇಲ್ದರ್ಜೆಗೇರಿಸಲು ಮತ್ತು ಡಿಜಿಟಲ್ ಗ್ರಂಥಾಲಯಗಳನ್ನು ಪ್ರಾರಂಭಿಸಲು ಪ್ರಸಕ್ತ ಆರ್ಥಿಕ ವರ್ಷದಲ್ಲಿ ₹2 ಕೋಟಿ ರೂಪಾಯಿ ಹಂಚಿಕೆ ಮಾಡಲಾಗಿದೆ ಎಂದು 2025-26ನೇ ಸಾಲಿನ ಬಜೆಟ್ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಕೀಲರ ಪರಿಷತ್ ಸದಸ್ಯರಿಗೆ ಚಂದಾದಾರಿಕೆಯೊಂದಿಗೆ ಕಾಯಿದೆ/ನಿಯಮಗಳು/ಕಾನೂನು ಪುಸ್ತಕಗಳು ಸುಲಭವಾಗಿ ದೊರಕುವಂತೆ ಮಾಡಲು ಅಡ್ವೊಕೇಟ್ ಜನರಲ್ ಕಚೇರಿ ಸಹಯೋಗದೊಂದಿಗೆ ಆನ್‌ಲೈನ್ ಗ್ರಂಥಾಲಯವನ್ನು ₹50 ಲಕ್ಷ ವೆಚ್ಚದಲ್ಲಿ ಸ್ಥಾಪಿಸಲಾಗುವುದು ಎಂದು ತಿಳಿಸಲಾಗಿದೆ.
ಕೃಷ್ಣಾ ಮೇಲ್ದಂಡೆ ಯೋಜನೆಯಡಿ ಭೂಸ್ವಾಧಿನ ಕುರಿತು ನ್ಯಾಯಾಲಯಗಳಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಭೂಸ್ವಾಧೀನ ಪ್ರಕರಣಗಳ ವಿಶೇಷ ತ್ವರಿತಗತಿ ನ್ಯಾಯಾಲಯವನ್ನು ಬಾಗಲಕೋಟೆಯಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಲಾಗಿದೆ.
ಕೊಪ್ಪಳ ಜಿಲ್ಲೆಯಲ್ಲಿ ನೂತನ ನ್ಯಾಯಾಲಯ ಸಂಕೀರ್ಣ ನಿರ್ಮಾಣಕ್ಕಾಗಿ ₹50 ಕೋಟಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಕುಕನೂರು ಮತ್ತು ಕಾರಟಗಿ ತಾಲ್ಲೂಕಿನಲ್ಲಿ ಜೆಎಂಎಫ್‌ಸಿ ನ್ಯಾಯಾಲಯಗಳನ್ನು ತಲಾ ₹9 ಕೋಟಿ ವೆಚ್ಚದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಸ್ಥಾಪಿಸಲಾಗುವುದು ಎಂದು ಬಜೆಟ್‌ನಲ್ಲಿ ಘೋಷಿಸಲಾಗಿದೆ.