Mahatma Gandhi statue and Karnataka HC 
ಸುದ್ದಿಗಳು

ʼಗಾಂಧಿ ಹತ್ಯೆಯ ಸತ್ಯ’ ನಾಟಕ ಪ್ರದರ್ಶನಕ್ಕೆ ಸೂಕ್ತ ಭದ್ರತೆ ಒದಗಿಸಿ: ಗೃಹ ಇಲಾಖೆಗೆ ನಿರ್ದೇಶನ

ನಾಟಕದ ಪ್ರದರ್ಶನಕ್ಕೆ ವಿರೋಧ ವ್ಯಕ್ತಪಡಿಸಿ ಅಡ್ಡಂಡ ಕಾರ್ಯಪ್ಪ ಅವರಿಗೆ ಮಸಿ ಬಳಿದ ಹಿನ್ನೆಲೆಯಲ್ಲಿ, ಮುಂದಿನ ಪ್ರದರ್ಶನಗಳ ವೇಳೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ.

Bar & Bench

ಕೊಡಗಿನ ರಂಗಭೂಮಿ ಟ್ರಸ್ಟ್‌ ಅಧ್ಯಕ್ಷ ಅಡ್ಡಂಡ ಕಾರ್ಯಪ್ಪ ಅವರು ರಚಿಸಿ, ವಿನ್ಯಾಸಗೊಳಿಸಿ ನಿರ್ದೇಶಿಸಿರುವ ‘ಗಾಂಧಿ ಹತ್ಯೆಯ ಸತ್ಯ’ ನಾಟಕದ ಪ್ರದರ್ಶನ ಆಯೋಜಿಸಲು ಉದ್ದೇಶಿಸಿರುವ ಸ್ಥಳಗಳಲ್ಲಿ ಸೂಕ್ತ ಭದ್ರತೆ ಒದಗಿಸುವಂತೆ ಕರ್ನಾಟಕ ಹೈಕೋರ್ಟ್‌ ರಾಜ್ಯ ಗೃಹ ಇಲಾಖೆಗೆ ನಿರ್ದೇಶಿಸಿದೆ.

ತಮ್ಮ ಜೀವ, ಆಸ್ತಿ ಮತ್ತು ಸ್ವಾತಂತ್ರ್ಯಕ್ಕೆ ರಕ್ಷಣೆ ಒದಗಿಸುವುದರ ಜೊತೆಗೆ, ನಾಟಕದ ಪ್ರದರ್ಶನ ನಡೆಯುವ ಸ್ಥಳಗಳಲ್ಲಿ ಸೂಕ್ತ ಪೊಲೀಸ್ ಭದ್ರತೆ ಕಲ್ಪಿಸಲು ಗೃಹ ಇಲಾಖೆಗೆ ನಿರ್ದೇಶನ ನೀಡುವಂತೆ ಕೋರಿ ಅಡ್ಡಂಡ ಕಾರ್ಯಪ್ಪ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸಿ ಎಂ ಪೂಣಚ್ಚ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

Justice CM Poonacha

ಅರ್ಜಿದಾರರ ಪರ ಹಿರಿಯ ವಕೀಲ ಎಂ ಅರುಣ್ ಶ್ಯಾಮ್ ಅವರ ವಾದವನ್ನು ಆಲಿಸಿದ ನ್ಯಾಯಾಲಯ, ಮುಂದಿನ ಪ್ರದರ್ಶನಗಳ ವಿವರಗಳನ್ನು ಹಾಗೂ ಕಾರ್ಯಕ್ರಮಗಳ ಸುಗಮ ನಿರ್ವಹಣೆಗೆ ಸಂಬಂಧಿಸಿದಂತೆ ತಮಗಿರುವ ಆತಂಕಗಳನ್ನು ಆಯಾ ಸ್ಥಳಗಳ ಸ್ಥಳೀಯ ಪೊಲೀಸ್ ಅಧಿಕಾರಿಗಳು ಮತ್ತು ಜಿಲ್ಲಾಡಳಿತಕ್ಕೆ ಮುಂಚಿತವಾಗಿ ತಿಳಿಸುವಂತೆ ಕಾರ್ಯಪ್ಪ ಅವರಿಗೆ ಸೂಚಿಸಿತು.

“ಅರ್ಜಿದಾರರಿಂದ ಮಾಹಿತಿ ಸ್ವೀಕರಿಸಿದ ನಂತರ, ಸಂಬಂಧಪಟ್ಟ ಅಧಿಕಾರಿಗಳು ಪ್ರದರ್ಶನ ನಡೆಯುವ ಸ್ಥಳದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು” ಎಂದು ನ್ಯಾಯಾಲಯ ನಿರ್ದೇಶಿಸಿತು.

ಭದ್ರತಾ ವ್ಯವಸ್ಥೆ ಕಲ್ಪಿಸಲು ತಗಲುವ ವೆಚ್ಚವನ್ನು ಯಾರು ಭರಿಸಬೇಕು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ, ಎರಡೂ ಪಕ್ಷಗಳು ಸೂಕ್ತ ದಾಖಲೆಗಳು ಅಥವಾ ಮಾಹಿತಿಯನ್ನು ಸಲ್ಲಿಸಿದ ನಂತರ ನಿರ್ಧಾರ ಕೈಗೊಳ್ಳಲಾಗುವುದು ಎಂದು ನ್ಯಾಯಾಲಯ ಸ್ಪಷ್ಟಪಡಿಸಿತು.

ಅಂತಿಮವಾಗಿ, ಪ್ರಕರಣದ ಮುಂದಿನ ವಿಚಾರಣೆಯನ್ನು 2027ರ ಜನವರಿ 5ಕ್ಕೆ ಮುಂದೂಡಿತು.

ಪ್ರಕರಣದ ಹಿನ್ನೆಲೆ: ಬೆಂಗಳೂರಿನ ಬನಶಂಕರಿಯ ಸುಚಿತ್ರಾ ಫಿಲಂ ಅಕಾಡೆಮಿ ರಂಗಮಂದಿರದಲ್ಲಿ ಕಳೆದ ಅಕ್ಟೋಬರ್ 31ರಂದು ‘ಗಾಂಧಿ ಹತ್ಯೆಯ ಸತ್ಯ’ ನಾಟಕ ಪ್ರದರ್ಶನ ಆಯೋಜಿಸಲಾಗಿತ್ತು.

ಈ ವೇಳೆ ನಾಟಕದ ಪ್ರದರ್ಶನಕ್ಕೆ ವಿರೋಧ ವ್ಯಕ್ತಪಡಿಸಿದ ಕೆಲವರು ಅಡ್ಡಂಡ ಕಾರ್ಯಪ್ಪ ಅವರಿಗೆ ಮಸಿ ಬಳಿದಿದ್ದರು. ಇದರಿಂದಾಗಿ ನಾಟಕದ ಪ್ರದರ್ಶನ ರದ್ದುಗೊಂಡಿತ್ತು. ಘಟನೆಯ ಬೆನ್ನಲ್ಲೇ ರಾಜ್ಯದ ವಿವಿಧೆಡೆ ಆಯೋಜಿಸಲು ಉದ್ದೇಶಿಸಿದ್ದ ನಾಟಕದ ಮುಂದಿನ ಪ್ರದರ್ಶನಗಳೂ ರದ್ದಾಗಿದ್ದವು.

ಇದರಿಂದ ತಮ್ಮ ಜೀವ, ಆಸ್ತಿ ಮತ್ತು ಸ್ವಾತಂತ್ರ್ಯಕ್ಕೆ ಅಪಾಯವಿರುವುದಾಗಿ ಪ್ರತಿಪಾದಿಸಿದ್ದ ಕಾರ್ಯಪ್ಪ, ಮುಂದಿನ ನಾಟಕ ಪ್ರದರ್ಶನಗಳಿಗೆ ಪೊಲೀಸ್ ಭದ್ರತೆ ಕೋರಿ ಹೈಕೋರ್ಟ್‌ ಮೊರೆ ಹೋಗಿದ್ದರು.