ವ್ಯಕ್ತಿಗತವಾಗಿ ಖಾತೆಗಳನ್ನು ನಿಷೇಧಿಸುವಂತೆ ಕೇಂದ್ರ ಸರ್ಕಾರ ಹೊರಡಿಸಿರುವ ನಿರ್ಬಂಧಕ ಆದೇಶಗಳನ್ನು ಪ್ರಶ್ನಿಸಿ ಟ್ವಿಟರ್ ಸಲ್ಲಿಸಿರುವ ಮನವಿಯ ವಿಚಾರಣೆಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದ ಕೇಂದ್ರ ಸರ್ಕಾರದ ಮನವಿ ಪುರಸ್ಕರಿಸಿದ ಕರ್ನಾಟಕ ಹೈಕೋರ್ಟ್ ಗುರುವಾರ ವಿಚಾರಣೆಯನ್ನು ಸೆಪ್ಟೆಂಬರ್ 8ಕ್ಕೆ ಮುಂದೂಡಿತು.
ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆ ಜಾರಿ ಮಾಡಿರುವ ನಿರ್ಬಂಧ ಆದೇಶಗಳನ್ನು ಪ್ರಶ್ನಿಸಿ ಟ್ವಿಟರ್ ಸಲ್ಲಿಸಿರುವ ರಿಟ್ ಮನವಿಯ ವಿಚಾರಣೆಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನೇತೃತ್ವದ ಏಕಸದಸ್ಯ ಪೀಠವು ನಡೆಸಿತು.
ವಿಚಾರಣೆ ಆರಂಭವಾಗುತ್ತಿದ್ದಂತೆ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು “ಆಕ್ಷೇಪಣೆ ಸಿದ್ಧವಾಗಿದೆ. ಕೆಲವೊಂದು ಮಾರ್ಪಾಡುಗಳನ್ನು ಮಾಡಬೇಕಿದ್ದು, ಶನಿವಾರ ಅಥವಾ ಭಾನುವಾರ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು. ಆ ಬಳಿಕ ಪೀಠವು ಎಂದಾದರೂ ವಿಚಾರಣೆ ಕೈಗೆತ್ತಿಕೊಳ್ಳಬಹುದು” ಎಂದರು.
ಇದಕ್ಕೆ ಅರ್ಜಿದಾರರ ಪರ ವಕೀಲರು “ಕೇಂದ್ರ ಸರ್ಕಾರದ ಆಕ್ಷೇಪಣೆಗೆ ಪ್ರತ್ಯುತ್ತರ ಸಲ್ಲಿಸಲಾಗುವುದು. ಈ ತಿಂಗಳಾಂತ್ಯದಲ್ಲಿ ಪ್ರಕರಣದ ವಿಚಾರಣೆ ನಡೆಸಬೇಕು” ಎಂದು ಕೋರಿದರು. ಈ ಮಧ್ಯೆ, ಏಕಾಏಕಿ ಸೆಪ್ಟೆಂಬರ್‌ನಲ್ಲಿ ವಿಚಾರಣೆ ನಡೆಸುವಂತೆ ಅರ್ಜಿದಾರರ ಪರ ವಕೀಲರು ಕೋರಿದರು.
ಇದಕ್ಕೆ ಪೀಠವು “ಅರ್ಜಿಯನ್ನು ನಾನು ಓದಿಯಾಗಿದೆ. ಪದೇ ಪದೇ ನಾನು ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಓದಲಾಗದು” ಎಂದರು.
ಅಂತಿಮವಾಗಿ ಪೀಠವು “ಸಾಲಿಸಿಟರ್ ಜನರಲ್ ಅವರು ಮೂರು ದಿನಗಳಲ್ಲಿ ಆಕ್ಷೇಪಣೆ ಸಲ್ಲಿಸುತ್ತಾರೆ. ಅರ್ಜಿದಾರರು ಬಯಸಿದರೆ ಆನಂತರ ಒಂದು ವಾರದಲ್ಲಿ ಪ್ರತ್ಯುತ್ತರ ದಾಖಲಿಸಬಹುದಾಗಿದೆ. ಸೆಪ್ಟೆಂಬರ್ 8ಕ್ಕೆ ವಿಚಾರಣೆ ಮುಂದೂಡಲಾಗಿದೆ” ಎಂದು ಆದೇಶದಲ್ಲಿ ಉಲ್ಲೇಖಿಸಿ, ವಿಚಾರಣೆ ಮುಂದೂಡಿತು.