ಉಮರ್ ಖಾಲಿದ್, ಸುಪ್ರೀಂ ಕೋರ್ಟ್ 
ಸುದ್ದಿಗಳು

ದೆಹಲಿ ಗಲಭೆ ಪ್ರಕರಣ: ಸುಪ್ರೀಂ ಕೋರ್ಟ್‌ನಿಂದ ಜಾಮೀನು ಅರ್ಜಿ ಹಿಂಪಡೆದ ಉಮರ್ ಖಾಲಿದ್

Bar & Bench

ದೆಹಲಿ ಗಲಭೆ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 2020ರಿಂದ ಜೈಲಿನಲ್ಲಿರುವ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ನಾಯಕ, ಹೋರಾಟಗಾರ ಉಮರ್ ಖಾಲಿದ್, ಪರಿಸ್ಥಿತಿಯಲ್ಲಿ ಉಂಟಾಗಿರುವ ಬದಲಾವಣೆಯನ್ನು ಉಲ್ಲೇಖಿಸಿ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಅರ್ಜಿ ಹಿಂಪಡೆದಿದ್ದಾರೆ.

ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಪಂಕಜ್ ಮಿತ್ತಲ್‌ ಅವರಿದ್ದ ಪೀಠ ಇಂದು ಪ್ರಕರಣ ಆಲಿಸಬೇಕಿತ್ತು. ಖಾಲಿದ್ ಅವರನ್ನು ಪ್ರತಿನಿಧಿಸುತ್ತಿರುವ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಸನ್ನಿವೇಶಗಳಲ್ಲಿ ಉಂಟಾಗಿರುವ ಬದಲಾವಣೆಯಿಂದಾಗಿ ಅರ್ಜಿ ಹಿಂಪಡೆಯುತ್ತಿದ್ದು ಸೂಕ್ತ ಪರಿಹಾರಕ್ಕಾಗಿ ವಿಚಾರಣಾ ನ್ಯಾಯಾಲಯಕ್ಕೆ ತೆರಳಲು ಬಯಸುತ್ತೇವೆ ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.

ನಂತರ ನ್ಯಾಯಾಲಯ ಜಾಮೀನು ಅರ್ಜಿ ಹಿಂಪಡೆಯಲು ಅನುಮತಿ ನೀಡಿತು.

ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ಮತ್ತು ನ್ಯಾಯಮೂರ್ತಿ ಪಂಕಜ್ ಮಿಥಾಲ್

ಸೆಪ್ಟೆಂಬರ್ 2020ರಲ್ಲಿ ಉಮರ್‌ ಖಾಲಿದ್‌ರನ್ನು ಬಂಧಿಸಿದ್ದ ದೆಹಲಿ ಪೊಲೀಸರು ಕ್ರಿಮಿನಲ್ ಪಿತೂರಿ, ಗಲಭೆ, ಕಾನೂನುಬಾಹಿರ ಸಭೆ ಮತ್ತು ಯುಎಪಿಎ ಕಾಯಿದೆ ಅಡಿಯಲ್ಲಿ ವಿವಿಧ ಆರೋಪ ದಾಖಲಿಸಿಕೊಂಡಿದ್ದರು. ಅಂದಿನಿಂದ ಖಾಲಿದ್‌ ಸೆರೆವಾಸ ಅನುಭವಿಸುತ್ತಿದ್ದಾರೆ.

ಖಾಲಿದ್‌ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು 14 ಬಾರಿ ಮುಂದೂಡಲಾಗಿತ್ತು.