Basangouda Patil Yatnal, Ramesh Jarkiholi, Arvind Limbavali & Kumar Bangarappa, Karnataka HC 
ಸುದ್ದಿಗಳು

ವಾಲ್ಮೀಕಿ ನಿಗಮದ ಹಣ ದುರ್ಬಳಕೆ: ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್‌ಗೆ ತನಿಖಾ ವರದಿ ಸಲ್ಲಿಸಿದ ಸಿಬಿಐ

ಈವರೆಗೆ 31 ಸಾಕ್ಷಿಗಳ ವಿಚಾರಣೆ ನಡೆಸಲಾಗಿದೆ. ತನಿಖೆ ಚುರುಕಿನಿಂದ ನಡೆಯುತ್ತಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ ಸಿಬಿಐ ವಕೀಲರು.

Bar & Bench

ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಣ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದ ತನಿಖಾ ವರದಿಯನ್ನು ಕೇಂದ್ರೀಯ ತನಿಖಾ ದಳವು ಗುರುವಾರ ಕರ್ನಾಟಕ ಹೈಕೋರ್ಟ್‌ಗೆ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿದೆ.

ಬಿಜೆಪಿಯ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ರಮೇಶ ಜಾರಕಿಹೊಳಿ, ಮಾಜಿ ಶಾಸಕರಾದ ಅರವಿಂದ ಲಿಂಬಾವಳಿ ಮತ್ತು ಕುಮಾರ್‌ ಬಂಗಾರಪ್ಪ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸಿಬಿಐ ವಿಶೇಷ ಸರ್ಕಾರಿ ಅಭಿಯೋಜಕರಾದ ಪಿ ಪ್ರಸನ್ನಕುಮಾರ್ ಅವರು ಹೈಕೋರ್ಟ್‌ ಈ ಹಿಂದೆ ನೀಡಿದ್ದ ಆದೇಶದ ಅನುಸಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗಿನ ತನಿಖಾ ಪ್ರಗತಿಯನ್ನು ಮುಚ್ಚಿದ ಲಕೋಟೆಯಲ್ಲಿ ಪೀಠಕ್ಕೆ ಸಲ್ಲಿಸಿದರು. “ಈವರೆಗೆ 31 ಸಾಕ್ಷಿಗಳ ವಿಚಾರಣೆ ನಡೆಸಲಾಗಿದೆ. ತನಿಖೆ ಚುರುಕಿನಿಂದ ನಡೆಯುತ್ತಿದೆ” ಎಂದು ತಿಳಿಸಿದರು. ಇದನ್ನು ದಾಖಲಿಸಿಕೊಂಡ ಪೀಠವು ವಿಚಾರಣೆ ಮುಂದೂಡಿತು. ಅರ್ಜಿದಾರರ ಪರ ವಕೀಲ ವೆಂಕಟೇಶ್‌ ದಳವಾಯಿ ಹಾಜರಿದ್ದರು.

ವಾಲ್ಮೀಕಿ ಪ್ರಕರಣಕ್ಕೆ ಸಂಬಂಧಿಸಿದ ಸಿಬಿಐ ತನಿಖೆಯನ್ನು ಹೈಕೋರ್ಟ್‌ ನಿಗಾದಲ್ಲಿಯೇ ನಡೆಸಬೇಕು. ಸಿಬಿಐ ಪ್ರತಿ ಹದಿನೈದು ದಿನಗಳಿಗೊಮ್ಮೆ ಪ್ರಗತಿ ವರದಿಯನ್ನು ಹೈಕೋರ್ಟ್‌ಗೆ ಸಲ್ಲಿಸಬೇಕು ಮತ್ತು ವಿಚಾರಣೆಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.