Karnataka Maharshi Valmiki Scheduled Tribes Development Corporation Limited 
ಸುದ್ದಿಗಳು

ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಪ್ರಕರಣ: ಸತ್ಯನಾರಾಯಣ ವರ್ಮಾಗೆ ವಿಶೇಷ ನ್ಯಾಯಾಲಯದಿಂದ ಜಾಮೀನು ಮಂಜೂರು

ಅರ್ಜಿದಾರರು ₹2 ಲಕ್ಷ ಮೊತ್ತದ ಬಾಂಡ್‌ ಮತ್ತು ಇಷ್ಟೇ ಮೊತ್ತಕ್ಕೆ ಇಬ್ಬರ ವೈಯಕ್ತಿಕ ಭದ್ರತೆ ಒದಗಿಸಬೇಕು. ತಮ್ಮ ಪಾಸ್‌ಪೋರ್ಟ್‌ ಅನ್ನು ನ್ಯಾಯಾಲಯಕ್ಕೆ ಒಪ್ಪಿಸಬೇಕು. ಸಾಕ್ಷ್ಯ ನಾಶಕ್ಕೆ ಯತ್ನಿಸಬಾರದು ಎಂಬ ಷರತ್ತುಗಳನ್ನು ನ್ಯಾಯಾಲಯ ವಿಧಿಸಿದೆ.

Bar & Bench

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬ್ಯಾಂಕ್ ಖಾತೆಯಿಂದ ₹95 ಕೋಟಿ ಮೊತ್ತವನ್ನು ಅಕ್ರಮವಾಗಿ ವರ್ಗಾವಣೆ ಮಾಡಲಾಗಿದೆ ಎಂಬ ಆರೋಪದ ಪ್ರಕರಣದಲ್ಲಿ ಎರಡನೇ ಆರೋಪಿ ಹೈದರಾಬಾದ್‌ನ ಸತ್ಯನಾರಾಯಣ ವರ್ಮಾ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಸತ್ಯನಾರಾಯಣ ವರ್ಮಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ಅವರು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ.

ಅರ್ಜಿದಾರರು ₹2 ಲಕ್ಷ ಮೊತ್ತದ ಬಾಂಡ್‌ ಮತ್ತು ಇಷ್ಟೇ ಮೊತ್ತಕ್ಕೆ ಇಬ್ಬರ ವೈಯಕ್ತಿಕ ಭದ್ರತೆ ಒದಗಿಸಬೇಕು. ತಮ್ಮ ಪಾಸ್‌ಪೋರ್ಟ್‌ ಅನ್ನು ನ್ಯಾಯಾಲಯಕ್ಕೆ ಒಪ್ಪಿಸಬೇಕು. ಸಾಕ್ಷ್ಯ ನಾಶಕ್ಕೆ ಯತ್ನಿಸಬಾರದು ಎಂಬ ಷರತ್ತುಗಳನ್ನು ವಿಧಿಸಲಾಗಿದೆ. ಜಾರಿ ನಿರ್ದೇಶನಾಲಯ ದಾಖಲಿಸಿಕೊಂಡಿರುವ ಈ ಪ್ರಕರಣದಲ್ಲಿ ಅರ್ಜಿದಾರರ ಪರ ಹೈಕೋರ್ಟ್‌ ವಕೀಲ ಕೆ ಬಿ ಮೋನೇಶ್‌ ಕುಮಾರ್ ವಾದ ಮಂಡಿಸಿದ್ದರು.

ಸತ್ಯನಾರಾಯಣ ವರ್ಮಾ 18 ನಕಲಿ ಬ್ಯಾಂಕ್ ಖಾತೆ ತೆರೆದು ಹಣ ಡ್ರಾ ಮಾಡಿಕೊಂಡಿದ್ದಾರೆ. ಈ ಪ್ರಕರಣದ ಹಿಂದೆ ಬಹುದೊಡ್ಡ ಪಿತೂರಿ ಇದ್ದು ಅದನ್ನು ಪತ್ತೆ ಮಾಡುವ ಸಲುವಾಗಿ ವರ್ಮಾನ ಇ ಡಿ ಕಸ್ಟಡಿ ವಿಚಾರಣೆಯ ಅಗತ್ಯವಿದೆ ಎಂಬ ವಾದ ಮನ್ನಿಸಿ ಹೈಕೋರ್ಟ್‌ 2024ರ ಆಗಸ್ಟ್‌ 13ರಂದು ಎಂಟು ದಿನ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ನೀಡಿತ್ತು.