Farmer Minister B Nagendra Facebook
ಸುದ್ದಿಗಳು

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಆರು ದಿನ ಜಾರಿ ನಿರ್ದೇಶನಾಲಯದ ಕಸ್ಟಡಿಗೆ

ನಿಗಮದ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ ಹಗರಣದ ಕುರಿತು ರಾಜ್ಯ ಸರ್ಕಾರ ರಚಿಸಿರುವ ಎಸ್‌ಐಟಿ ಮತ್ತು ಸಿಬಿಐ ಪ್ರತ್ಯೇಕವಾಗಿ ತನಿಖೆ ನಡೆಸುತ್ತಿವೆ. ಪಿಎಂಎಲ್‌ಎ ಅಡಿ ಪ್ರಕರಣ ದಾಖಲಿಸಿರುವ ಇ ಡಿ ಪ್ರತ್ಯೇಕವಾಗಿ ತನಿಖೆ ನಡೆಸುತ್ತಿದೆ.

Bar & Bench

ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ಯಾಂಕ್‌ ಖಾತೆಯಿಂದ 95 ಕೋಟಿ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ ಹಗರಣದಲ್ಲಿನ ಆರೋಪಿ ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಸತ್ರ ನ್ಯಾಯಾಲಯವು ಜುಲೈ 18ರವರೆಗೆ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ನೀಡಿದೆ.

ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಳ್ಳಾರಿ ಗ್ರಾಮೀಣ ಶಾಸಕ ನಾಗೇಂದ್ರ ಅವರನ್ನು ಶನಿವಾರ ಬೆಳಗಿನ ಸಮಯದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ಸತ್ರ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್‌ ಗಜಾನನ ಭಟ್‌ ಅವರ ಮುಂದೆ ಹಾಜರುಪಡಿಸಿದರು.

ಘಟನೆಯ ಮಾಹಿತಿ ಪಡೆದ ನ್ಯಾಯಾಧೀಶರು ನಾಗೇಂದ್ರ ಅವರನ್ನು ಆರು ದಿನಗಳ ಕಾಲ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ನೀಡಿ ಆದೇಶಿಸಿದರು.

ನಿಗಮದ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ ಹಗರಣದ ಕುರಿತು ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ದಳ ಮತ್ತು ಸಿಬಿಐ ಪ್ರತ್ಯೇಕವಾಗಿ ತನಿಖೆ ನಡೆಸುತ್ತಿವೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಿರುವ ಜಾರಿ ನಿರ್ದೇಶನಾಲಯವು ಪ್ರತ್ಯೇಕವಾಗಿ ತನಿಖೆ ನಡೆಸುತ್ತಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಿಂದಿನ ವ್ಯವಸ್ಥಾಪಕ ನಿರ್ದೇಶಕ ಜೆ ಬಿ ಪದ್ಮನಾಭ ಮತ್ತು ಹಿಂದಿನ ಲೆಕ್ಕಾಧಿಕಾರಿ ಪರಶರಾಮ ದುರ್ಗಣ್ಣವರ ಅವರು ಎಸ್‌ಐಟಿ ಕಸ್ಟಡಿಯಲ್ಲಿದ್ದಾರೆ. ಬೆಂಗಳೂರಿನ ಹೈಗ್ರೌಂಡ್ಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದ್ದು, ಅದರ ತನಿಖೆಯನ್ನು ಎಸ್‌ಐಟಿ ನಡೆಸುತ್ತಿದೆ.