ED and Bengaluru city civil court 
ಸುದ್ದಿಗಳು

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ನಿರೀಕ್ಷಣಾ ಜಾಮೀನು ಕೋರಿ ವಿಶೇಷ ನ್ಯಾಯಾಲಯದ ಕದತಟ್ಟಿದ ಅಧಿಕಾರಿ ಕಲ್ಲೇಶ್‌

ಕಲ್ಲೇಶ್‌ ನೀಡಿದ ದೂರಿನ ಅನ್ವಯ ಜಾರಿ ನಿರ್ದೇಶನಾಲಯದ ಅಧಿಕಾರಿಗಳಾದ ಮನೋಜ್‌ ಮಿತ್ತಲ್‌ ಮತ್ತು ಮುರಳಿ ಕಣ್ಣನ್‌ ವಿರುದ್ಧ ವಿಲ್ಸನ್‌ ಗಾರ್ಡನ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಇದಕ್ಕೆ ಹೈಕೋರ್ಟ್‌ ತಡೆ .

Bar & Bench

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (ಕೆಎಂವಿಎಸ್‌ಟಿಡಿಸಿಎಲ್‌) ಹಣ ದುರ್ಬಳಕೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ಇ ಡಿ) ಬಂಧನ ಭೀತಿಗೆ ಒಳಗಾಗಿರುವ ಹಾಗೂ ಇ ಡಿ ಅಧಿಕಾರಿಗಳ ವಿರುದ್ಧ ದೂರು ನೀಡಿದ್ದ ರಾಜ್ಯ ಸಮಾಜ ಕಲ್ಯಾಣ ಇಲಾಖೆಯ ಹಿಂದಿನ ಹೆಚ್ಚುವರಿ ನಿರ್ದೇಶಕ ಬಿ ಕಲ್ಲೇಶ್‌ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಸತ್ರ ನ್ಯಾಯಾಲಯಕ್ಕೆ ಈಚೆಗೆ ಅರ್ಜಿ ಸಲ್ಲಿಸಿದ್ದಾರೆ.

ಬಿ ಕಲ್ಲೇಶ್‌ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್‌ ಗಜಾನನ ಭಟ್‌ ಅವರು ನಡೆಸಿದರು.

“ಅರ್ಜಿದಾರರ ಪರ ವಕೀಲ ರೋಹನ್‌ ತಿಗಾಡಿ ಅವರು ಜಾರಿ ನಿರ್ದೇಶನಾಲಯ ನ್ಯಾಯಾಲಯಕ್ಕೆ ಸಲ್ಲಿಸಿರುವ ಅಂತಿಮ ವರದಿ/ದೂರನ್ನು ಇನ್ನಷ್ಟೇ ಸ್ವೀಕರಿಸಬೇಕಿದೆ. ಇದಕ್ಕಾಗಿ ಕಾಲಾವಕಾಶ ನೀಡಬೇಕು ಎಂದು ಕೋರಿದ್ದಾರೆ.  ಹೀಗಾಗಿ ವಿಚಾರಣೆಯನ್ನು ಸೆಪ್ಟೆಂಬರ್‌ 17ಕ್ಕೆ ಮುಂದೂಡಲಾಗಿದೆ” ಎಂದು ನ್ಯಾಯಾಲಯ ಆದೇಶದಲ್ಲಿ ಹೇಳಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣದ ವಿಚಾರಣೆಗಾಗಿ ಕಲ್ಲೇಶ್‌ಗೆ ಜಾರಿ ನಿರ್ದೇಶನಾಲಯ ಈಚೆಗೆ ಸಮನ್ಸ್‌ ಜಾರಿ ಮಾಡಿತ್ತು. ಈ ವಿಚಾರಣೆಯಲ್ಲಿ ಭಾಗಿಯಾದ ನಂತರ ಕಲ್ಲೇಶ್‌ ಅವರು ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಪ್ರಮುಖ ನಾಯಕರ ಹೆಸರು ಹೇಳುವಂತೆ ಬೆಂಗಳೂರಿನ ಜಾರಿ ನಿರ್ದೇಶನಾಲಯದ ಅಧಿಕಾರಿಗಳಾದ ಮನೋಜ್‌ ಮಿತ್ತಲ್‌ ಮತ್ತು ಮುರಳಿ ಕಣ್ಣನ್‌ ಅವರು ಬೆದರಿಕೆ ಹಾಗೂ ಒತ್ತಡ ಹಾಕಿದ್ದಾರೆ ಎಂದು ಬೆಂಗಳೂರಿನ ವಿಲ್ಸನ್‌ ಗಾರ್ಡನ್‌ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಇ ಡಿ ಅಧಿಕಾರಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್‌ಗಳಾದ 3(5), 351(2) ಮತ್ತು 352 ಅಡಿ ಪ್ರಕರಣ ದಾಖಲಿಸಲಾಗಿದೆ. ಈ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.

ಕೆಎಂವಿಎಸ್‌ಟಿಡಿಸಿಎಲ್‌ ಹಗರಣಕ್ಕೆ ಸಂಬಂಧಿಸಿದಂತೆ ಕಳೆದ ವಾರ ಜಾರಿ ನಿರ್ದೇಶನಾಲಯವು 4,970 ಪುಟಗಳ ಆರೋಪ ಪಟ್ಟಿ ಹಾಗೂ 144 ಪುಟಗಳ ದೂರನ್ನು ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದೆ.