MLA Rizwan Arshad and Karnataka HC
MLA Rizwan Arshad and Karnataka HC 
ಸುದ್ದಿಗಳು

ನೀತಿ ಸಂಹಿತೆ ಉಲ್ಲಂಘನೆ: ಶಾಸಕ ರಿಜ್ವಾನ್‌ ಅರ್ಷದ್‌ ವಿರುದ್ಧದ ಪ್ರಕರಣ ಬದಿಗೆ ಸರಿಸಿದ ಹೈಕೋರ್ಟ್‌

Bar & Bench

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದ ಆರೋಪದ ಕುರಿತು ಲಘು ಧೋರಣೆಯಿಂದ ತನಿಖೆ ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಕರ್ನಾಟಕ ಹೈಕೋರ್ಟ್‌, ಕಳೆದ ಲೋಕಸಭಾ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಸಂಬಂಧ ಕಾಂಗ್ರೆಸ್‌ ಶಾಸಕ ರಿಜ್ವಾನ್ ಅರ್ಷದ್ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಮಂಗಳವಾರ ಬದಿಗೆ ಸರಿಸಿತು.

ವಿಚಾರಣಾಧೀನ ನ್ಯಾಯಾಲಯದಲ್ಲಿ ಬಾಕಿ ಇರುವ ತಮ್ಮ ವಿರುದ್ಧದ ಪ್ರಕರಣದ ಸಿಂಧುತ್ವ ಪ್ರಶ್ನಿಸಿ ಶಾಸಕ ರಿಜ್ವಾನ್ ಅರ್ಷದ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್‌ ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ಪೀಠವು ಈ ಆದೇಶ ಮಾಡಿತು.

“ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಆರೋಪಿಯ ವಿರುದ್ಧ ನಿರ್ದಿಷ್ಟ ಅಪರಾಧ ಪ್ರಕರಣದ ದಾಖಲಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡದೇ, ಗಾಂಭೀರ್ಯರಹಿತವಾಗಿ, ಹಗುರ ಧೋರಣೆಯಿಂದ ತನಿಖೆ ಮಾಡಲಾಗಿದೆ. ಈ ರೀತಿ ತನಿಖೆ ಮಾಡಿದರೆ ಚುನಾವಣಾ ನೀತಿ ಸಂಹಿತೆಗೆ ಯಾವುದೇ ಬೆಲೆ ಇರುವುದಿಲ್ಲ. ಅಲ್ಲದೇ, ಸಿಆರ್‌ಪಿಸಿ ಸೆಕ್ಷನ್ 155ರ ಅಡಿ ಪ್ರಕ್ರಿಯೆಯನ್ನು ಪಾಲಿಸಲಾಗಿಲ್ಲ. ಹೀಗಾಗಿ, ಇಡೀ ಪ್ರಕರಣವನ್ನು ಬದಿಗೆ ಸರಿಸಲಾಗಿದೆ” ಎಂದು ಪೀಠ ಆದೇಶದಲ್ಲಿ ಹೇಳಿದೆ.

“ಕಳೆದ ಲೋಕಸಭಾ ಚುನಾವಣೆಯ ವೇಳೆ ಅರ್ಜಿದಾರರು ನೀತಿ ಸಂಹಿತೆ ಉಲ್ಲಂಘಿಸಿ, ಪ್ರಚಾರ ಮಾಡಿದ್ದಾರೆ. ಇದಕ್ಕಾಗಿ ಯಾವುದೇ ಅನುಮತಿ ಪಡೆದಿಲ್ಲ ಎಂದು ಆರೋಪಿಸಲಾಗಿದೆ. ಆದರೆ, ಅರ್ಜಿದಾರರು ಮತದಾರರ ಮೇಲೆ ಪ್ರಭಾವ ಬೀರಿದ್ದಾರೆ ಎಂಬುದರ ಕುರಿತು ಆರೋಪ ಪಟ್ಟಿಯಲ್ಲಿ ಉಲ್ಲೇಖವಾಗಿಲ್ಲ” ಎಂದು ಪೀಠ ಹೇಳಿದೆ.

ಪ್ರಕರಣದ ಹಿನ್ನೆಲೆ: 2019ರ ಲೋಕಸಭಾ ಚುನಾವಣೆ ವೇಳೆ ಏಪ್ರಿಲ್‌ 13ರಂದು ದೊಡ್ಡನೆಕ್ಕುಂದಿ ಗ್ರಾಮದಲ್ಲಿ ಶ್ರೀರಾಮನವಮಿ ಪ್ರಯುಕ್ತ ಜಾತ್ರೆ ಮತ್ತು ಪಲ್ಲಕ್ಕಿ ನಡೆಯುತ್ತಿತ್ತು. ಆಗ ರಿಜ್ವಾನ್ ಅರ್ಷದ್‌ ಅವರು ಚುನಾವಣಾ ಪ್ರಚಾರ ನಡೆಸುತ್ತಿದ್ದರು. ಅವರನ್ನು ಪ್ರಚಾರಕ್ಕೆ ಅನುಮತಿ ಇದೆಯೆ ಎಂದು ಕೇಳಿದ್ದಕ್ಕೆ ಅವರು, ಹೌದು ಅನುಮತಿ ಪಡೆಯಲಾಗಿದೆ ಎಂದು ಹೇಳಿದ್ದರು. ವಾಸ್ತವದಲ್ಲಿ ಅವರು ಪ್ರಚಾರ ನಡೆಸಲು ಅನುಮತಿ ಪಡೆದಿರಲಿಲ್ಲ. ಆದ್ದರಿಂದ ಅರ್ಷದ್‌ ವಿರುದ್ಧ ಐಪಿಸಿ ಸೆಕ್ಷನ್ 171ಸಿ, 171ಐ ಮತ್ತು ಜನಪ್ರತಿನಿಧಿಗಳ ಕಾಯಿದೆ ಸೆಕ್ಷನ್ 144ರನ್ವಯ ಕ್ರಮ ಕೈಗೊಳ್ಳಬೇಕು ಎಂದು ಸಹಾಯಕ ಚುನಾವಣಾಧಿಕಾರಿ ಸಿ ವೆಂಕಟೇಶ್ ಅವರು ಎಚ್‌ಎಎಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅದನ್ನು ಆಧರಿಸಿ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದರು. ಇದನ್ನು ಹೈಕೋರ್ಟ್‌ಗೆ ಬದಿಗೆ ಸರಿಸಿದೆ.