Justices G Narendra and P N Desai
Justices G Narendra and P N Desai 
ಸುದ್ದಿಗಳು

ಮತದಾರರ ಮಾಹಿತಿ ಕಳವು ಪ್ರಕರಣ: ಶ್ರೀನಿವಾಸ್ ಅಮಾನತು ತಡೆಗೆ ನಕಾರ; ಹೈಕೋರ್ಟ್‌ ಕದ ತಟ್ಟಿದ ಮತ್ತೊಬ್ಬ ಐಎಎಸ್‌ ಅಧಿಕಾರಿ

Bar & Bench

ಚಿಲುಮೆ ಸಂಸ್ಥೆಯಿಂದ ಮತದಾರರ ಮಾಹಿತಿ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ ಶ್ರೀನಿವಾಸ್ ಅವರ ಅಮಾನತು ಆದೇಶಕ್ಕೆ ತಡೆ ನೀಡಲು ಕರ್ನಾಟಕ ಹೈಕೋರ್ಟ್‌ ಗುರುವಾರವೂ ನಿರಾಕರಿಸಿದೆ. ಅಲ್ಲದೇ, ರಾಜ್ಯ ಸರ್ಕಾರ ಮತ್ತು ಕೇಂದ್ರ ಚುನಾವಣಾ ಆಯೋಗಕ್ಕೆ ಆಕ್ಷೇಪಣೆ ಸಲ್ಲಿಸಲು ಆದೇಶಿಸಿದೆ.

ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ತಮ್ಮನ್ನು ಸೇವೆಯಿಂದ ಅಮಾನತುಪಡಿಸಿ ರಾಜ್ಯ ಸರ್ಕಾರ ಹೊರಡಿಸಿದ ಆದೇಶ ರದ್ದುಪಡಿಸಲು ಕೋರಿ ಜಿಲ್ಲಾಧಿಕಾರಿ ಕೆ ಶ್ರೀನಿವಾಸ್ ಸಲ್ಲಿಸಿರುವ ಅರ್ಜಿಯ ಗೌಪ್ಯ ವಿಚಾರಣೆಯನ್ನು  ನ್ಯಾಯಮೂರ್ತಿಗಳಾದ ಜಿ ನರೇಂದರ್ ಮತ್ತು ಪಿ ಎನ್‌ ದೇಸಾಯಿ ಅವರ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.

ಈ ವೇಳೆ ಮತದಾರರ ಮಾಹಿತಿ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದ ತನಿಖಾ ವರದಿಯನ್ನು ತನಿಖಾಧಿಕಾರಿಯು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಇದನ್ನು ಪರಿಶೀಲಿಸಿದ ಪೀಠವು ಶ್ರೀನಿವಾಸ್‌ ಅಮಾನತು ಆದೇಶಕ್ಕೆ ತಡೆ ನೀಡಲು ನಿರಾಕರಿಸಿದೆ. ರಾಜ್ಯ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ಆಕ್ಷೇಪಣೆ ಸಲ್ಲಿಸಿಲು ಸೂಚಿಸಿ, ವಿಚಾರಣೆಯನ್ನು ಡಿಸೆಂಬರ್‌ 16ಕ್ಕೆ ಮುಂದೂಡಲಾಗಿದೆ.

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವಿಶೇಷ ಆಯುಕ್ತ ಹಾಗೂ ಐಎಎಸ್‌ ಅಧಿಕಾರಿ ಎಸ್‌ ರಂಗಪ್ಪ ಅವರು ತಮ್ಮನ್ನು ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಅಮಾನತುಗೊಳಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಮಾಡಿರುವ ಆದೇಶ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಈ ಪ್ರಕರಣದ ವಿಚಾರಣೆ ನಡೆಸಿದ ಪೀಠವು ಶ್ರೀನಿವಾಸ್‌ ಅವರ ಅರ್ಜಿಯ ಗೋಪ್ಯ ವಿಚಾರಣೆಯನ್ನು ಮಧ್ಯಾಹ್ನ ನಡೆಸಲಾಗುತ್ತಿದೆ ಎಂದು ಹೇಳಿ ಶುಕ್ರವಾರಕ್ಕೆ ಮುಂದೂಡಿತು.

ಶ್ರೀನಿವಾಸ್‌ ಅವರು ಮಹದೇವಪುರ ವಿಧಾನಸಭಾ ಕ್ಷೇತ್ರದ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿದ್ದರೆ, ಎಸ್‌ ರಂಗಪ್ಪ ಅವರು ಶಿವಾಜಿನಗರ ಮತ್ತು ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರಗಳ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಯಾಗಿದ್ದರು. ಈ ಇಬ್ಬರನ್ನೂ ಸೇವೆಯಿಂದ ಅಮಾನತು ಮಾಡಿ, ಇಲಾಖಾ ವಿಚಾರಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಚುನಾವಣಾ ಆಯೋಗವು ನಿರ್ದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರವು ಇಬ್ಬರೂ ಅಧಿಕಾರಿಗಳನ್ನು ಅಮಾನತು ಮಾಡಿದ್ದು, ಲಿಖಿತ ಅನುಮತಿ ಇಲ್ಲದೆ ಕೇಂದ್ರಸ್ಥಾನ ತೊರೆಯದಂತೆ ನಿರ್ಬಂಧ ವಿಧಿಸಿದೆ.

ಶಿವಾಜಿನಗರ, ಚಿಕ್ಕಪೇಟೆ ಮತ್ತು ಮಹದೇವಪುರ ವಿಧಾನಸಭಾ ಕ್ಷೇತ್ರಗಳಲ್ಲಿ ಖಾಸಗಿ ವ್ಯಕ್ತಿಗಳಿಗೆ ಮತಗಟ್ಟೆ ಹಂತದ ಅಧಿಕಾರಿಗಳು (ಬಿಎಲ್‌ಒ/ಬಿಎಲ್‌ಸಿ) ಎಂದು ಗುರುತಿನ ಚೀಟಿ ವಿತರಿಸಿರುವುದು ಪೊಲೀಸ್‌ ತನಿಖೆಯಲ್ಲಿ ಪತ್ತೆಯಾಗಿದೆ. ಈ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಡೆದಿರುವ ಎಲ್ಲಾ ಪ್ರಕ್ರಿಯೆಗಳನ್ನು ಸಮಗ್ರವಾಗಿ ಪರಿಶೀಲನೆ ನಡೆಸಬೇಕು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದ್ದ ಕೇಂದ್ರ ಚುನಾವಣಾ ಆಯೋಗವು ಲೋಪ ತಡೆಯುವಲ್ಲಿ ವಿಫಲರಾದ ಆರೋಪದಲ್ಲಿ ಶ್ರೀನಿವಾಸ್‌ ಮತ್ತು ರಂಗಪ್ಪ ಅವರ ಅಮಾನತಿಗೆ ಸೂಚಿಸಿತ್ತು.