JP Nadda and Karnataka HC 
ಸುದ್ದಿಗಳು

ಮತದಾರರಿಗೆ ಆಮಿಷ ಪ್ರಕರಣ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ವಿರುದ್ಧದ ತನಿಖೆಗೆ ಹೈಕೋರ್ಟ್‌ ತಡೆಯಾಜ್ಞೆ

Bar & Bench

ಕಳೆದ ವಿಧಾನಸಭೆ ಚುನಾವಣೆ ವೇಳೆ “ಬಿಜೆಪಿಗೆ ಮತ ನೀಡಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಆಶೀರ್ವಾದಿಂದ ಕರ್ನಾಟಕವು ವಂಚಿತವಾಗದಂತೆ ನೋಡಿಕೊಳ್ಳಿ” ಎಂದು ಸಾರ್ವಜನಿಕ ಹೇಳಿಕೆ ನೀಡುವ ಮೂಲಕ ಮತದಾರರ ಮೇಲೆ ಪ್ರಭಾವ ಬೀರಿದ ಆರೋಪ ಸಂಬಂಧ ಹಾವೇರಿ ಜಿಲ್ಲೆಯ ಶಿಗ್ಗಾವಿ ಪೊಲೀಸ್ ಠಾಣೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ವಿರುದ್ಧ ದಾಖಲಾಗಿದ್ದ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ತಮ್ಮ ವಿರುದ್ಧದ ಎಫ್‌ಐಆರ್‌ ಮತ್ತು ಹಾವೇರಿ ಪ್ರಧಾನ ಸಿವಿಲ್‌ ನ್ಯಾಯಾಲಯದ ಮುಂದಿರುವ ವಿಚಾರಣೆ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಸಲ್ಲಿಸಿದ್ದ ಅರ್ಜಿಯನ್ನು ವರ್ಚುವಲ್‌ ವಿಧಾನದ ಮೂಲಕ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ನಡ್ಡಾ ಅವರನ್ನು ಪ್ರತಿನಿಧಿಸಿದ್ದ ವಕೀಲ ವಿನೋದ್ ಕುಮಾರ್ ಅವರು, ಅರ್ಜಿದಾರರ ವಿರುದ್ಧ ದಾಖಲಿಸಿರುವುದು ಸಂಜ್ಞೇಯವಲ್ಲದ (ಗಂಭೀರ ಸ್ವರೂಪವಲ್ಲದ) ಪ್ರಕರಣವಾಗಿದೆ. ಇಂತ ಪ್ರಕರಣ ದಾಖಲಿಸುವಾಗ ದೂರುದಾರರೇ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ದೂರು ಸಲ್ಲಿಸಿ, ಎಫ್‌ಐಆರ್‌ ದಾಖಲಿಸಲು ಅನುಮತಿ ಪಡೆಯಬೇಕು. ಆದರೆ, ಈ ಪ್ರಕರಣದಲ್ಲಿ ಪೊಲೀಸರೇ ಮ್ಯಾಜಿಸ್ಟ್ರೇಟ್‌ ಮುಂದೆ ದೂರು ದಾಖಲಿಸಿ, ಅನುಮತಿ ಪಡೆದು ಎಫ್‌ಐಆರ್‌ ದಾಖಲಿಸಿದ್ದಾರೆ. ಇದು ಕಾನೂನು ಬಾಹಿರ ಕ್ರಮ ಎಂದು ನ್ಯಾಯಾಲಯದ ಗಮನಕ್ಕೆ ತಂದರು.

ಅರ್ಜಿದಾರರ ವಿರುದ್ಧ ಅನುಚಿತ ಪ್ರಭಾವ ಬೀರಿದ ಆರೋಪ ಮಾಡಲಾಗಿದೆ. ಚುನಾವಣೆಗೆ ಸ್ಪರ್ಧಿಸಲು ಅಭ್ಯರ್ಥಿಗೆ ಚುನಾವಣಾ ಆಯೋಗವೇ ಅನುಮತಿ ನೀಡಿದೆ. ಮತ ಪ್ರಚಾರ ಮಾಡುವುದು ಅಭ್ಯರ್ಥಿಯ ಹಕ್ಕಾಗಿದೆ. ಅದರಂತೆ ಪ್ರಕರಣದಲ್ಲಿ ಬಿಜೆಪಿ ಅಭ್ಯರ್ಥಿ ಪರ ಅರ್ಜಿದಾರರು ಪ್ರಚಾರ ಮಾಡಿದ್ದಾರೆ. ಇಂತಹ ಸಂದರ್ಭದಲ್ಲಿ ಮತದಾರರ ಮೇಲೆ ಅನುಚಿತ ಪ್ರಭಾವ ಬೀರುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಆದ್ದರಿಂದ, ಅರ್ಜಿದಾರರ ವಿರುದ್ಧ ಎಫ್‌ಐಆರ್‌ ರದ್ದುಪಡಿಸಬೇಕು ಎಂದು ಕೋರಿದ್ದರು.

ಪ್ರಕರಣದ ಹಿನ್ನೆಲೆ: ಕಳೆದ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ 2023ರ ಏಪ್ರಿಲ್‌ 19ರಂದು ಮಧ್ಯಾಹ್ನ 1.15ರಿಂದ 1.50ರ ಅವಧಿಯಲ್ಲಿ ಶಿಗ್ಗಾವಿ ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಜೆ ಪಿ ನಡ್ಡಾ ಮಾತನಾಡಿದ್ದರು. “ಕರ್ನಾಟಕದ ಜನತೆ ಬಿಜೆಪಿಗೆ ಮತ ನೀಡಿ, ಪ್ರಧಾನಿ ನರೇಂದ್ರ ಮೋದಿಯವರ ಒಲವು ಗಳಿಸಿರಿ. ಕರ್ನಾಟಕವು ಮೋದಿಯವರ ಆಶೀರ್ವಾದ ಹೊಂದಿದೆ. ಅದರಿಂದ ವಂಚಿತವಾಗದಂತೆ ನೋಡಿಕೊಳ್ಳಿ” ಎಂದು ಹೇಳಿಕೆ ನೀಡಿದ್ದರು ಎಂದು ಚುನಾವಣಾಧಿಕಾರಿಯಾಗಿದ್ದ ಲಕ್ಷ್ಮಣ್‌ ನಂದಿ ಅವರು ಶಿಗ್ಗಾವಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಜೆ ಪಿ ನಡ್ಡಾ ಅವರು ಮತದಾರರ ಮೇಲೆ ಅನುಚಿತ ಪ್ರಭಾವ ಬೀರುವ ಮೂಲಕ ಶಿಕ್ಷಾರ್ಹ ಅಪರಾಧ ಎಸಗಿದ್ದಾರೆ ಎಂದು ಆರೋಪಿಸಿದ್ದರು.

ದೂರು ಸ್ವೀಕರಿಸಿದ್ದ ಪೊಲೀಸರು, ನಡ್ಡಾ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 171(ಸಿ), 171(ಎಫ್) ಮತ್ತು ಜನಪ್ರತಿನಿಧಿಗಳ ಕಾಯಿದೆಯ ಸೆಕ್ಷನ್‌ 123(2) ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಿದ್ದರು. ಈ ಪ್ರಕರಣ ರದ್ದು ಕೋರಿ ನಡ್ಡಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.