CM Basavaraja Bommai 
ಸುದ್ದಿಗಳು

[ಜಲ ವಿವಾದ] ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸರ್ವ ಪ್ರಯತ್ನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮೇಕೆದಾಟು ಯೋಜನೆ ಕುರಿತಾಗಿ ರಾಜ್ಯ ಸರ್ಕಾರ ಸ್ಪಷ್ಟ ನಿಲುವು ಹೊಂದಿದೆ. ಸದರಿ ಪ್ರಕರಣವನ್ನು ನ್ಯಾಯಾಲಯದಲ್ಲಿ ನಡೆಸಲು ಎಲ್ಲಾ ರೀತಿಯ ಸಿದ್ಧತೆಗೆ ಕಾನೂನು ತಜ್ಞರ ಜೊತೆ ಸಮಾಲೋಚನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿಯವರು ಹೇಳಿದ್ದಾರೆ.

Bar & Bench

ಸುಪ್ರೀಂ ಕೋರ್ಟ್‌ನಲ್ಲಿ ಸುದೀರ್ಘ ಕಾಲದಿಂದ ಬಾಕಿ ಉಳಿದಿರುವ ಜಲ ವಿವಾದಗಳಿಗೆ ಸಂಬಂಧಿಸಿದ ಪ್ರಕರಣಗಳ ಇತ್ಯರ್ಥಕ್ಕೆ ರಾಜ್ಯ ಸರ್ಕಾರ ಸರ್ವ ರೀತಿಯ ಪ್ರಯತ್ನ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ನಾವದಗಿ ಒಳಗೊಂಡಂತೆ ಕಾನೂನು ತಜ್ಞರು ಹಾಗೂ ನೀರಾವರಿ ತಜ್ಞರ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ನವದೆಹಲಿಯಲ್ಲಿ ಸಭೆ ನಡೆಸಿದ್ದರು. ಸಭೆಯಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಆರೋಗ್ಯ ಸಚಿವ ಡಾ. ಕೆ ಸುಧಾಕರ್, ಸಂಸದ ಶಿವಕುಮಾರ್ ಉದಾಸಿ ಉಪಸ್ಥಿತರಿದ್ದರು. ಸಭೆಯ ಕುರಿತಾದ ವಿವರಗಳನ್ನು ಇಂದು ಮುಖ್ಯಮಂತ್ರಿಯವರು ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದಾರೆ.

ರಾಜ್ಯದ ನೀರಾವರಿ ಯೋಜನೆಗಳ ಕುರಿತು ಕಾನೂನು ಮತ್ತು ತಾಂತ್ರಿಕ ತಜ್ಞರೊಂದಿಗೆ ಸುದೀರ್ಘವಾಗಿ ಚರ್ಚಿಸಲಾಗಿದೆ. ಕೃಷ್ಣಾ ಮೇಲ್ದಂಡೆ ಯೋಜನೆ ಹಾಗೂ ತಮಿಳುನಾಡು ಸರ್ಕಾರ ಕೈಗೆತ್ತಿಕೊಂಡಿರುವ ಯೋಜನೆಗಳ ಕುರಿತು ಸರ್ವೋಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ವಿಶೇಷ ಮನವಿಗೆ ಸಂಬಂಧಿಸಿದಂತೆ ಎದುರಾಗಿರುವ ಸಮಸ್ಯೆಗಳ ಇತ್ಯರ್ಥಕ್ಕೆ ಪ್ರಯತ್ನಿಸಲಾಗುತ್ತಿದೆ. ನೆರೆಯ ತಮಿಳುನಾಡು ರಾಜ್ಯದ ನದಿ ಜೋಡಣೆ ಯೋಜನೆಗಳು ಕಾನೂನು ಬಾಹಿರವಾಗಿದ್ದು, ಆ ಬಗ್ಗೆ ಕಾನೂನು ಮತ್ತು ನೀರಾವರಿ ತಜ್ಞರ ಜೊತೆ ಚರ್ಚೆ ನಡೆಸಲಾಗಿದೆ ಎಂದರು.

ಮೇಕೆದಾಟು ಯೋಜನೆ ಕುರಿತಾಗಿ ರಾಜ್ಯ ಸರ್ಕಾರ ಸ್ಪಷ್ಟ ನಿಲುವು ಹೊಂದಿದೆ. ಸದರಿ ಪ್ರಕರಣವನ್ನು ನ್ಯಾಯಾಲಯದಲ್ಲಿ ನಡೆಸಲು ಎಲ್ಲಾ ರೀತಿಯ ಸಿದ್ಧತೆಗೆ ಕಾನೂನು ತಜ್ಞರ ಜೊತೆ ಸಮಾಲೋಚನೆ ನಡೆಸಲಾಗಿದೆ. ಮೇಕೆದಾಟು ಯೋಜನೆಯ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕಾಗಿ ತಮಿಳುನಾಡಿನ ಮಧುರೈನಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ಕೈಬಿಡುವ ಸಂಬಂಧ ಕ್ರಮ ವಹಿಸಲಾಗುವುದು ಎಂದರು.