Karnataka HC and BDA
Karnataka HC and BDA 
ಸುದ್ದಿಗಳು

ಬಿಡಿಎ ಬಡಾವಣೆಗಳ ಮಾಹಿತಿ ವೆಬ್‌ಸೈಟ್‌ನಲ್ಲಿ ಪ್ರಕಟ: ರಾಜ್ಯ ಸರ್ಕಾರ, ಬಿಡಿಎಗೆ ನೋಟಿಸ್‌ ಜಾರಿ ಮಾಡಿದ ಹೈಕೋರ್ಟ್‌

Bar & Bench

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಕಾರ್ಯನಿರ್ವಹಣೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಬೇಕು ಹಾಗೂ ಪ್ರಾಧಿಕಾರ ರಚಿಸಿರುವ ಎಲ್ಲ ಬಡಾವಣೆಗಳ ಸಂಪೂರ್ಣ ಮಾಹಿತಿಯನ್ನು ವೆಬ್‌ಸೈಟ್‌ನಲ್ಲಿ ಹಂತ ಹಂತವಾಗಿ ಪ್ರಕಟಿಸಬೇಕು ಎನ್ನುವ ತನ್ನ ನಿರ್ದೇಶನಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಬಿಡಿಎಗೆ ಕರ್ನಾಟಕ ಹೈಕೋರ್ಟ್ ಬುಧವಾರ ನೋಟಿಸ್ ಜಾರಿ ಮಾಡಿದೆ.

ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರು ದಾಖಲಿಸಿರುವ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಅರಾಧೆ ಮತ್ತು ನ್ಯಾಯಮೂರ್ತಿ ಎಸ್‌ ವಿಶ್ವಜಿತ್‌ ಶೆಟ್ಟಿ ಅವರ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.

ಪ್ರತಿವಾದಿಗಳಾದ ಬಿಡಿಎ ಆಯುಕ್ತರು ಮತ್ತು ರಾಜ್ಯ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ನ್ಯಾಯಾಲಯವು ನೋಟಿಸ್ ಜಾರಿ ಮಾಡಿತು.

“ಅರ್ಜಿ ಕುರಿತು ರಾಜ್ಯ ಸರ್ಕಾರದಿಂದ ಮಾಹಿತಿ ಪಡೆಯಲು ಮತ್ತು ಉತ್ತರ ಸಲ್ಲಿಸಲು ಮೂರು ವಾರ ಕಾಲಾವಕಾಶ ನೀಡಬೇಕು” ಎಂದು ಸರ್ಕಾರಿ ವಕೀಲೆ ಪ್ರತಿಮಾ ಹೊನ್ನಾಪುರ ಕೋರಿದರು. ಇದನ್ನು ಪರಿಗಣಿಸಿದ ಪೀಠವು ವಿಚಾರಣೆ ಮುಂದೂಡಿತು.

ಅರ್ಕಾವತಿ ಬಡಾವಣೆಯಲ್ಲಿ ನಿವೇಶನ ಹಂಚಿಕೆಯಾಗಿರುವ ಮೂವರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ್ದ ಏಕಸದಸ್ಯ ಪೀಠವು ಬಡಾವಣೆ ವಿವರ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡುವಂತೆ ನಿರ್ದೇಶಿಸಿತ್ತು. ಇದನ್ನು ಪ್ರಶ್ನಿಸಿ ಬಿಡಿಎ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ್ದ ವಿಭಾಗೀಯ ಪೀಠವು ಮಾಹಿತಿ ಹಕ್ಕು ಕಾಯಿದೆ ವ್ಯಾಪ್ತಿಗೆ ಬಿಡಿಎ ಬರುತ್ತದೆ. ಆದ್ದರಿಂದ, ಬಿಡಿಎ ತನ್ನ ಕಾರ್ಯ ಚಟುವಟಿಕೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವ ಅಗತ್ಯವಿದೆ. ಅದರಂತೆ ಪ್ರಾಧಿಕಾರ ರಚಿಸಿರುವ ಬಡಾವಣೆಗಳ ಎಲ್ಲ ವಿವರಗಳನ್ನು ಹಂತ ಹಂತವಾಗಿ ವೆಬ್‌ಸೈಟ್‌ನಲ್ಲಿ ಅಪ್ಲೋಡ್ ಮಾಡಬೇಕು. ಪ್ರಕರಣದಲ್ಲಿ ಸಾರ್ವಜನಿಕ ಪ್ರಾಮುಖ್ಯತೆ ಹೆಚ್ಚಿರುವುದರಿಂದ ಪ್ರಕರಣವನ್ನು ಸ್ವಯಂ ಪ್ರೇರಿತವಾಗಿ ದಾಖಲಿಸಬೇಕು ಎಂದು ರಿಜಿಸ್ಟ್ರಾರ್ ಜನರಲ್‌ಗೆ ನಿರ್ದೇಶಿಸಿ, 2022ರ ಸೆಪ್ಟೆಂಬರ್‌ 5ರಂದು ಮೇಲ್ಮನವಿ ಇತ್ಯರ್ಥಪಡಿಸಿತ್ತು. ಆ ಆದೇಶದ ಅನ್ವಯ ಈಗ ಸ್ವಯಂಪ್ರೇರಿತ ಪಿಐಎಲ್ ದಾಖಲಿಸಲಾಗಿದೆ.