ಪಶ್ಚಿಮ ಬಂಗಾಳದಲ್ಲಿ 2021ರ ರಾಜ್ಯ ವಿಧಾನಸಭೆ ಚುನಾವಣೆ ನಂತರ ನಡೆದ ಹಿಂಸಾಚಾರ ಘಟನೆಗಳಿಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ವಿವಿಧ ವಿಚಾರಣಾ ನ್ಯಾಯಾಲಯಗಳಲ್ಲಿ ನಡೆಯುತ್ತಿರುವ ವಿಚಾರಣೆಗೆ ಸುಪ್ರೀಂ ಕೋರ್ಟ್ ಬುಧವಾರ ತಡೆ ನೀಡಿದೆ .
ಪಶ್ಚಿಮ ಬಂಗಾಳದ ಹೊರಗೆ ಪ್ರಕರಣಗಳ ವಿಚಾರಣೆ ನಡೆಸಬೇಕೆಂದು ಕೋರಿ ಸಿಬಿಐ ಸಲ್ಲಿಸಿದ್ದ ವರ್ಗಾವಣೆ ಅರ್ಜಿ ಹಿನ್ನೆಲೆಯಲ್ಲಿ ಈ ಆದೇಶ ನೀಡಲಾಗಿದೆ.
ಸಾಕ್ಷಿಗಳು ಮತ್ತು ವಕೀಲರಿಗೆ ಬೆದರಿಕೆ ಹಾಕಲಾಗುತ್ತಿದೆ ಎಂದು ಸಿಬಿಐ ಆರೋಪಿಸಿದೆ. ದೂರುಗಳ ಹೊರತಾಗಿಯೂ ರಾಜ್ಯ ಸರ್ಕಾರದ ಅಧಿಕಾರಿಗಳ ನಿಷ್ಕ್ರಿಯತೆ ನ್ಯಾಯದ ಹಾದಿಗೆ ಅಡ್ಡಿಯಾಗಿದೆ ಎಂದು ಅದು ಅರೋಪಿಸಿದೆ.
ಮೂಲ ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾ. ಸಂಜಯ್ ಕರೋಲ್ ಅವರು ಪಶ್ಚಿಮ ಬಂಗಾಳ ಸರ್ಕಾರ ಮತ್ತು ಪಕ್ಷಕಾರರ ಪ್ರತಿಕ್ರಿಯೆಗಳನ್ನು ಕೇಳಿದರು.
ತನ್ನ ಅನುಮತಿ ಪಡೆಯದೆ ಸಿಬಿಐ ತನಿಖೆ ಮುಂದುವರೆಸುತ್ತಿದ್ದು ಎಫ್‌ಐಆರ್ ದಾಖಲಿಸುತ್ತಿದೆ ಎಂದು ಆರೋಪಿಸಿ ಪಶ್ಚಿಮ ಬಂಗಾಳ ಸರ್ಕಾರ ಸಲ್ಲಿಸಿದ್ದ ಮನವಿಯ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ.
ಪಶ್ಚಿಮ ಬಂಗಾಳದಲ್ಲಿ ಸೆಪ್ಟೆಂಬರ್ 2021ರಲ್ಲಿ, ಮತದಾನೋತ್ತರ ಹಿಂಸಾಚಾರದ ಬಳಿಕ ನಡೆದಿದೆ ಎನ್ನಲಾದ ಕೊಲೆ ಮತ್ತು ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಿದ್ದ ಕಲ್ಕತ್ತಾ ಹೈಕೋರ್ಟ್ ನಿರ್ಧಾರವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರ ಮನವಿ ಸಲ್ಲಿಸಿತ್ತು. ಈ ಸಂಬಂಧ ನ್ಯಾಯಾಲಯ ಕೇಂದ್ರ ಸರ್ಕಾರದ ಪ್ರತಿಕ್ರಿಯೆ ಕೇಳಿತ್ತು.
ಮತದಾನದ ನಂತರದ ಹಿಂಸಾಚಾರದ ದೂರುಗಳ ಬಗ್ಗೆ ತನಿಖೆ ನಡೆಸಲು ರಚಿಸಲಾದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಏಳು ಸದಸ್ಯರ ಸಮಿತಿಯ ವರದಿಯನ್ನು ಪರಿಶೀಲಿಸಿದ ನಂತರ ಹೈಕೋರ್ಟ್ ಈ ಆದೇಶ ನೀಡಿತ್ತು.
[ಆದೇಶದ ಪ್ರತಿಗಾಗಿ ಇಲ್ಲಿ ಕ್ಲಿಕ್ಕಿಸಿ]