Karnataka High Court
Karnataka High Court 
ಸುದ್ದಿಗಳು

ಶಾಸಕರು, ಸಂಸದರ ವಿರುದ್ದದ ಕ್ರಿಮಿನಲ್‌ ಪ್ರಕರಣ ಹಿಂತೆಗೆತ: ಸರ್ಕಾರಕ್ಕೆ ಒಂದು ವಾರ ಕಾಲಾವಕಾಶ ನೀಡಿದ ಹೈಕೋರ್ಟ್‌

Bar & Bench

ರಾಜ್ಯದ ಮಾಜಿ, ಹಾಲಿ ಸಂಸದರು ಮತ್ತು ಶಾಸಕರ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯುವ ಸಂಬಂಧ ಹೊರಡಿಸಿರುವ ಆದೇಶಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೋಮವಾರ ಆದೇಶಿಸಿದೆ.

ಶಾಸಕರು ಮತ್ತು ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ಮೇಲ್ವಿಚಾರಣೆ ನಡೆಸುವಂತೆ ಸುಪ್ರೀಂಕೋರ್ಟ್ ನೀಡಿರುವ ನಿರ್ದೇಶನದ ಮೇರೆಗೆ ದಾಖಲಿಸಿಕೊಂಡಿರುವ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಮನವಿಯ ವಿಚಾರಣೆಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸಚಿನ್‌ ಶಂಕರ್‌ ಮಗದುಮ್‌ ಅವರ ನೇತೃತ್ವದ ವಿಭಾಗೀಯ ಪೀಠ ಇತ್ತೀಚೆಗೆ ವಿಚಾರಣೆ ನಡೆಸಿತು.

ಪ್ರಕರಣದಲ್ಲಿ ಅಮಿಕಸ್ ಕ್ಯೂರಿಯಾಗಿರುವ ಹಿರಿಯ ವಕೀಲ ಆದಿತ್ಯ ಸೋಂಧಿ ಅವರು ”ಹೈಕೋರ್ಟ್ ಅನುಮತಿ ಪಡೆಯದೇ ಶಾಸಕರು ಮತ್ತು ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ಸರ್ಕಾರ ಹಿಂಪಡೆಯುವಂತಿಲ್ಲ. ಈ ಕುರಿತು ಹೈಕೋರ್ಟ್ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ಮೇಲ್ವಿಚಾರಣೆ ನಡೆಸಬಹುದು. ಹಿಂಪಡೆದ ಪ್ರಕರಣಗಳನ್ನು ಪರೀಕ್ಷಿಸಬಹುದು. ಅದಕ್ಕಾಗಿ ಹಿಂಪಡೆದ ಪ್ರಕರಣಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಹೈಕೋರ್ಟ್ ರಾಜ್ಯ ಸರ್ಕಾರದಿಂದ ಪಡೆದುಕೊಳ್ಳಬಹುದು ಎಂದು ಸುಪ್ರೀಂ ಕೊರ್ಟ್ ೨೦೨೧ರ ಆಗಸ್ಟ್‌ ೧೦ರಂದು ಆದೇಶ ಮಾಡಿದೆ. ಅದರಂತೆ ಶಾಕಸರು ಮತ್ತು ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ಆದೇಶಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸುವಂತೆ ಸರ್ಕಾರಕ್ಕೆ ನ್ಯಾಯಾಲಯ ನಿರ್ದೇಶಿಸಬಹುದು” ಎಂದರು.

ಆಗ ಸರ್ಕಾರಿ ವಕೀಲರು ಶಾಸಕರು ಮತ್ತು ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳನ್ನು ಹಿಂಪಡೆದಿರುವುದಕ್ಕೆ ಸಂಬಂಧಿಸಿದ ವಿವರ ಹಾಗೂ ದಾಖಲೆಗಳನ್ನು ಸಲ್ಲಿಸಲು ಒಂದು ವಾರ ಕಾಲಾವಕಾಶ ನೀಡಬೇಕು ಎಂದು ನ್ಯಾಯಪೀಠವನ್ನು ಕೋರಿದರು. ಇದಕ್ಕೆ ಒಪ್ಪಿದ ಪೀಠವು ರಾಜ್ಯ ಸರ್ಕಾರಕ್ಕೆ ಒಂದು ವಾರ ಕಾಲಾವಕಾಶ ನೀಡಿದ್ದು, ಸೆಪ್ಟೆಂಬರ್‌ 13ಕ್ಕೆ ವಿಚಾರಣೆ ಮುಂದೂಡಿದೆ.

ಕಳೆದ ವಿಚಾರಣೆಯ ಸಂದರ್ಭದಲ್ಲಿ ಪೀಠವು “ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಶಾಸಕರು ಮತ್ತು ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳನ್ನು ಹಿಂಪಡೆಯುವುದಕ್ಕೆ ಸಂಬಂಧಿಸಿದಂತೆ ಕಳೆದ ವರ್ಷದ ಸೆಪ್ಟೆಂಬರ್‌ 16ರಿಂದ ಈಚೆಗಿನ ಪ್ರಕರಣಗಳಲ್ಲಿ ರಾಜ್ಯ ಸರ್ಕಾರದ ನಿಲುವಿನ ಕಾನೂನು ಸಿಂಧುತ್ವವನ್ನು ಪರಿಗಣಿಸಲಾಗುವುದು. ಪ್ರಕರಣಗಳನ್ನು ಹಿಂಪಡೆಯುವಾಗ ಸುಪ್ರೀಂ ಕೋರ್ಟ್‌ ನಿರ್ದೇಶನಗಳನ್ನು ಪಾಲಿಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಶಾಸಕರು ಮತ್ತು ಸಂಸದರ ವಿರುದ್ಧದ ಪ್ರಕರಣಗಳ ಕುರಿತಾದ ಮಾಹಿತಿಯನ್ನು ಅಧಿಕೃತವಾಗಿ ಸಲ್ಲಿಸಬೇಕು” ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿತ್ತು.