ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್‌ಗೌಡ ಕೊಲೆ ಪ್ರಕರಣದ ಒಂಭತ್ತನೇ ಆರೋಪಿ ಅಶ್ವತ್ಥ್‌ಗೆ ಮಂಜೂರು ಮಾಡಿದ್ದ ಜಾಮೀನನ್ನು ತಾತ್ಕಾಲಿಕವಾಗಿ ಕರ್ನಾಟಕ ಹೈಕೋರ್ಟ್ ಸೋಮವಾರ ರದ್ದುಪಡಿಸಿದೆ.
ಜಾಮೀನು ರದ್ದತಿ ಕೋರಿ ಕೇಂದ್ರೀಯ ತನಿಖಾ ದಳ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ಐ ಅರುಣ್ ಅವರ ಏಕಸದಸ್ಯ ಪೀಠವು ಪುರಸ್ಕರಿಸಿದೆ.
ಪ್ರಾಸಿಕ್ಯೂಷನ್ ಸಾಕ್ಷಿಗಳಾದ 10, 30, 40 ವಿಚಾರಣೆ ಮುಗಿಯುವವರೆಗೆ ಜೈಲಿನಲ್ಲಿರಬೇಕು. ಉಲ್ಲೇಖಿತ ಸಾಕ್ಷಿಗಳ ವಿಚಾರಣೆ ಮುಗಿದ ಬಳಿಕ ಅಶ್ವತ್ಥ್ ಜಾಮೀನು ಅರ್ಜಿ ಸಲ್ಲಿಸಬಹುದು ಎಂದು ನ್ಯಾಯಾಲಯ ಆದೇಶಿಸಿದೆ.
ವಿಶೇಷ ಸರ್ಕಾರಿ ಅಭಿಯೋಜಕ ಪಿ ಪ್ರಸನ್ನಕುಮಾರ್ ಅವರು “ಪ್ರಾಸಿಕ್ಯೂಷನ್ ಸಾಕ್ಷಿಯಾಗಿರುವ ಬಸವರಾಜ ಮುತ್ತಗಿಗೆ ಅಶ್ವತ್ಥ್ ಜೀವ ಬೆದರಿಕೆ ಹಾಕಿದ್ದಾನೆ. ಮತ್ತೊಬ್ಬ ಸಾಕ್ಷಿಗೂ ಕೋರ್ಟ್ ಆವರಣದಲ್ಲೇ ಅಶ್ವತ್ಥ್ ಬೆದರಿಕೆ ಹಾಕಿದ್ದಾನೆ. ಸಿವಿಲ್ ನ್ಯಾಯಾಲಯದ ಸಿಸಿಟಿವಿಯಲ್ಲಿ ಅಶ್ವತ್ಥ್ ಬೆದರಿಕೆ ಹಾಕಿರುವ ದೃಶ್ಯ ಸೆರೆಯಾಗಿದೆ” ಎಂದು ವಾದಿಸಿದ್ದರು.
ಈಚೆಗೆ ಧಾರವಾಡದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿತ್ತು.
ಪ್ರಕರಣದ ಹಿನ್ನೆಲೆ: ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2016ರ ಜೂನ್ 15ರಂದು ಯೋಗೀಶ್‌ಗೌಡ ಕೊಲೆ ನಡೆದಿತ್ತು. ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಿದ್ದು, ವಿಶೇಷ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದೆ. ಪ್ರಕರಣ ವಿಚಾರಣಾ ಹಂತದಲ್ಲಿದೆ.