ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಧಾರವಾಡದ 3ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಒಂದು ದಿನದ ಮಟ್ಟಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಗುರುವಾರ ಸಿಬಿಐ ಅಧಿಕಾರಿಗಳು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಪ್ರಸ್ತುತ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ವಿನಯ್ ಕುಲಕರ್ಣಿ ಅವರನ್ನು ಇರಿಸಲಾಗುವುದು ಎಂದು ಮೂಲಗಳಿಂದ ತಿಳಿದುಬಂದಿದೆ. ಶುಕ್ರವಾರ ವೀಡಿಯೊ ಕಲಾಪದ ಮೂಲಕ ನ್ಯಾಯಾಧೀಶೆ ಎಚ್. ಪಂಚಾಕ್ಷರಿ ಅವರು ವಿಚಾರಣೆ ನಡೆಸಲಿದ್ದಾರೆ.
ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್ ಗೌಡ ಅವರನ್ನು 2016ರ ಜೂನ್ 15ರಂದು ದುಷ್ಕರ್ಮಿಗಳು ಭೀಕರವಾಗಿ ಕೊಚ್ಚಿ ಕೊಲೆ ಮಾಡಿದ್ದರು. ಜಿಮ್‌ನಲ್ಲಿ ಪತ್ರಿಕೆ ಓದುತ್ತಿದ್ದ ಸಂದರ್ಭದಲ್ಲಿ ಅವರ ಮೇಲೆ ದಾಳಿ ನಡೆದಿತ್ತು. ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಹೆಸರು ಕೂಡ ಕೇಳಿ ಬಂದಿತ್ತು. ಕುಲಕರ್ಣಿ ಸೇರಿದಂತೆ ಆರು ಮಂದಿ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿಕೊಂಡಿದೆ.