K Raghurama Krishnam Raju, Supreme Court  
ಸುದ್ದಿಗಳು

ದೇಶದ್ರೋಹ ಪ್ರಕರಣದಲ್ಲಿ ಜಾಮೀನು ಕೋರಿ ಸುಪ್ರೀಂಕೋರ್ಟ್ ಮೊರೆ ಹೋದ ವೈಎಸ್ಆರ್ ಕಾಂಗ್ರೆಸ್ ಸಂಸದ ಕೃಷ್ಣಂ ರಾಜು

ಈ ಪ್ರಕರಣ ತಮ್ಮ ವಿರುದ್ಧ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ ಕೈಗೊಂಡಿರುವ ವೈಯಕ್ತಿಕ ಹಗೆಯಲ್ಲದೆ ಮತ್ತೇನೂ ಅಲ್ಲ ಎಂದು ರಾಜು ಅರ್ಜಿಯಲ್ಲಿ ತಿಳಿಸಿದ್ದಾರೆ.

Bar & Bench

ತಮ್ಮ ವಿರುದ್ಧ ಆಂಧ್ರಪ್ರದೇಶ ಸಿಐಡಿ ಹೂಡಿರುವ ದೇಶದ್ರೋಹ ಪ್ರಕರಣದಲ್ಲಿ ಜಾಮೀನು ನೀಡುವಂತೆ ಕೋರಿ ವೈಎಸ್‌ಆರ್‌ ಕಾಂಗ್ರೆಸ್‌ ಸಂಸದ ಕನಮುರಿ ರಘುರಾಮ ಕೃಷ್ಣಂರಾಜು ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದಾರೆ. ಅವರಿಗೆ ಜಾಮೀನು ನೀಡಲು ಆಂಧ್ರಪ್ರದೇಶ ಹೈಕೋರ್ಟ್‌ ಇತ್ತೀಚೆಗೆ ನಿರಾಕರಿಸಿತ್ತು.

ಪ್ರಸ್ತುತ ಪ್ರಕರಣ ತಮ್ಮ ವಿರುದ್ಧ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್‌ಮೋಹನ್‌ ರೆಡ್ಡಿ ಕೈಗೊಂಡಿರುವ ವೈಯಕ್ತಿಕ ಹಗೆಯಲ್ಲದೆ ಮತ್ತೇನೂ ಅಲ್ಲ ಎಂದು ರಾಜು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಕೃಷ್ಣಂ ರಾಜು ಅವರು ಡಿಜಿಟಲ್‌ ವೇದಿಕೆಗಳಲ್ಲಿ ಕೆಲ ಸಮುದಾಯಗಳ ವಿರುದ್ಧ ದ್ವೇಷ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಸಿಐಡಿ ಪೊಲೀಸರು ಅವರನ್ನು ಬಂಧಿಸಿದ್ದರು. ಈ ಘಟನೆಗೂ ಕೆಲ ವಾರಗಳ ಹಿಂದೆ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮ್ಮ ಪಕ್ಷದ ನೇತಾರ ಹಾಗೂ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್‌ ಜಾಮೀನು ಪಡೆದಿದ್ದು ಅವರ ಜಾಮೀನನ್ನು ರದ್ದುಗೊಳಿಸಬೇಕೆಂದು ಕೃಷ್ಣಂ ರಾಜು ಸಿಬಿಐ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು.

ತಮ್ಮ ರಾಜಕೀಯ ವಿರೋಧಿಗಳನ್ನು ಹತ್ತಿಕ್ಕಲು ಮತ್ತು ಜೈಲಿನಲ್ಲಿ ಇರಿಸಲು ಮುಖ್ಯಮಂತ್ರಿ ಅವರು ಪೊಲೀಸರನ್ನು ʼದುರುಪಯೋಗಪಡಿಸಿಕೊಳ್ಳುತ್ತಿದ್ದಾರೆʼ ಎಂದು ರಾಜು ಸುಪ್ರೀಂ ಕೋರ್ಟ್‌ನಲ್ಲಿ ವಾದಿಸಿದ್ದಾರೆ, ಇದರಿಂದಾಗಿ ಸೆರೆಯಲ್ಲಿರುವ ತಮ್ಮನ್ನು ವಿಚಾರಣಾಧೀನ ಕೈದಿ ಎಂದು ಆರೋಪಿಸಲಾಗದು ಎಂದಿದ್ದಾರೆ.

ಪ್ರಕರಣದ ಸಂಗತಿಗಳು ಮತ್ತು ಸನ್ನಿವೇಶಗಳನ್ನು ಗಮನಿಸದೆ ಹೈಕೋರ್ಟ್‌ ಜಾಮೀನಿಗಾಗಿ ಸೆಷನ್ಸ್‌ ನ್ಯಾಯಾಲಯವನ್ನು ಸಂಪರ್ಕಿಸುವಂತೆ ನಿರ್ದೇಶಿಸಿದೆ ಎಂದು ಮೇಲ್ಮನವಿಯಲ್ಲಿ ತಿಳಿಸಿರುವ ಅವರು ತಮ್ಮ ವಿರುದ್ಧ ಹೂಡಲಾಗಿರುವ ಮೊಕದ್ದಮೆ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಉಲ್ಲಂಘಿಸಿದೆ ಎಂದು ಹೇಳಿದ್ದಾರೆ.

ತಾವು ಇತ್ತೀಚೆಗೆ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು ಕೂಡಲೇ ಜಾಮೀನು ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಬೇಕು ಎಂದು ಕೋರಿ ಅವರು ಮತ್ತೊಂದು ಅರ್ಜಿಯನ್ನು ಕೂಡ ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ್ದಾರೆ.

ವೈದ್ಯಕೀಯ ಪರೀಕ್ಷೆ ಕುರಿತ ಪ್ರಕರಣ

ಹೈಕೋರ್ಟ್‌ ಜಾಮೀನು ನಿರಾಕರಿಸಿದ ಬಳಿಕ ರಾಜು ಅವರನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಲಾಗಿತ್ತು. ಅಲ್ಲಿ ಅವರು ಸಿಐಡಿ ಅಧಿಕಾರಿಗಳು ತಮ್ಮ ಮೇಲೆ ವಿವೇಚನೆ ಇಲ್ಲದೆ ತಮ್ಮ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಅಳಲು ತೋಡಿಕೊಂಡಿದ್ದರು.

ಘಟನೆ ಕುರಿತು ವೈದ್ಯಕೀಯ ಪರೀಕ್ಷೆ ನಡೆಸುವಂತೆ ಹೈಕೋರ್ಟ್‌ ಗುಂಟೂರು ಆಸ್ಪತ್ರೆ ಮುಖ್ಯಸ್ಥರಿಗೆ ಸೂಚಿಸಿತ್ತು. ವೈದ್ಯಕೀಯ ತಪಾಸಣೆಯ ವೀಡಿಯೊವನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸುವಂತೆ ನಿರ್ದೇಶಿಸಲಾಗಿತ್ತು. ವೈದ್ಯಕೀಯ ಪರೀಕ್ಷೆ ಕುರಿತ ಪ್ರಕರಣವನ್ನು ಹೈಕೋರ್ಟ್‌ ಭಾನುವಾರ ಮಧ್ಯಾಹ್ನ ವಿಚಾರಣೆಗೆ ಕೈಗೆತ್ತಿಕೊಂಡಿದೆ.