5 ಮತ್ತು 8ನೇ ತರಗತಿ ಪರೀಕ್ಷೆ: ಪಠ್ಯಕ್ರಮಕ್ಕೆ ಹೊರತಾದ ಪ್ರಶ್ನೆಗಳಿಲ್ಲ ಎಂದು ತಿಳಿಸಲು ಅಫಿಡವಿಟ್‌ ಸಲ್ಲಿಕೆಗೆ ಸೂಚನೆ

ಕಲಿಕಾ ಚೇತರಿಕೆ ಕೇವಲ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಮಾತ್ರವೇ ಅನ್ವಯ ಆಗುತ್ತದೆ. ಇದು ಪಠ್ಯಕ್ರಮದ ಭಾಗವಲ್ಲ. ಇದರನ್ವಯ ಪ್ರಶ್ನೆಗಳನ್ನು ಉತ್ತರಿಸಲು ಮಕ್ಕಳಿಗೆ ಕಷ್ಟವಾಗುತ್ತದೆ ಎಂದು ವಾದಿಸಿದ ವಕೀಲ ಧನಂಜಯ.
Karnataka High Court
Karnataka High Court
Published on

ರಾಜ್ಯ ಪಠ್ಯಕ್ರಮದ ಶಾಲೆಗಳ 5 ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೆ ಮಂಡಳಿ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ಸಿದ್ಧಪಡಿಸಲಾಗಿರುವ ಪ್ರಶ್ನೆಪತ್ರಿಕೆಗಳಲ್ಲಿ ಪಠ್ಯಕ್ರಮದಿಂದ ಹೊರತಾದ ಯಾವುದಾದರೂ ಪ್ರಶ್ನೆಗಳು ಇವೆಯೇ ಇಲ್ಲವೇ ಎಂಬುದನ್ನು ಸ್ಪಷ್ಟಪಡಿಸಲು ಅಫಿಡವಿಟ್‌ ಸಲ್ಲಿಸಿ ಎಂದು ಕರ್ನಾಟಕ ಹೈಕೋರ್ಟ್‌ ಮಂಗಳವಾರ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ನಿರ್ದೇಶಿಸಿದೆ.

ಮಂಡಳಿ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ರದ್ದುಪಡಿಸಿದ್ದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯನ್ನು ನ್ಯಾಯಮೂರ್ತಿಗಳಾದ ಜಿ‌ ನರೇಂದರ್ ಮತ್ತು ಅಶೋಕ್‌ ಎಸ್.‌ ಕಿಣಗಿ ಅವರ ನೇತೃತ್ವದ ವಿಭಾಗೀಯ ಪೀಠವು ಮಂಗಳವಾರ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ವಕೀಲ ಕೆ ವಿ ಧನಂಜಯ ಅವರು ಕಲಿಕಾ ಚೇತರಿಕೆ ಕೇವಲ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಮಾತ್ರವೇ ಅನ್ವಯ ಆಗುತ್ತದೆ. ಇದು ಪಠ್ಯಕ್ರಮದ ಭಾಗವಲ್ಲ. ಇದರನ್ವಯ ಪ್ರಶ್ನೆಗಳನ್ನು ಉತ್ತರಿಸಲು ಮಕ್ಕಳಿಗೆ ಕಷ್ಟವಾಗುತ್ತದೆ ಎಂದರು.

ಇದನ್ನು ಅಲ್ಲಗಳೆದ ಸರ್ಕಾರದ ಪರ ಹಾಜರಿದ್ದ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಧ್ಯಾನ್‌ ಚಿನ್ನಪ್ಪ ಅವರು ಕಲಿಕಾ ಚೇತರಿಕೆ ಕೂಡಾ ಪಠ್ಯಕ್ರಮದ ಭಾಗವೇ ಆಗಿದೆ. ಮಕ್ಕಳ ಬುದ್ಧಿಮತ್ತೆಯನ್ನು ಸಕಾರಾತ್ಮಕವಾಗಿ ಉದ್ದೀಪಿಸುವ ದಿಸೆಯಲ್ಲಿ ಇದನ್ನು ರೂಪಿಸಲಾಗಿದೆ. ಪ್ರಶ್ನೆಪತ್ರಿಕೆಯಲ್ಲಿ ಪಠ್ಯಕ್ರಮದಿಂದ ಹೊರತಾದ ಪ್ರಶ್ನೆಗಳಿಲ್ಲ ಎಂದು ಸಮರ್ಥಿಸಿಕೊಂಡರು.

Also Read
ಐದು, ಎಂಟನೇ ತರಗತಿ ಪರೀಕ್ಷೆ ಅನಿರ್ದಿಷ್ಟಾವಧಿಗೆ ಮುಂದೂಡಿಕೆ: ಹೈಕೋರ್ಟ್‌ಗೆ ಸರ್ಕಾರದ ವಿವರಣೆ

ಆಗ ಪೀಠವು ಆಯುಕ್ತರು ಈ ಸಂಬಂಧ ಅಫಿಡವಿಟ್‌ ಸಲ್ಲಿಸಲಿ ಎಂದು ಧ್ಯಾನ್‌ ಚಿನ್ನಪ್ಪ ಅವರಿಗೆ ಸೂಚಿಸಿ ವಿಚಾರಣೆಯನ್ನು ಬುಧವಾರಕ್ಕೆ (ಮಾರ್ಚ್‌ 14) ‌ಮುಂದೂಡಿತು.

ರಾಜ್ಯ ಮಟ್ಟದ ಮಂಡಳಿ ಪರೀಕ್ಷೆ ನಡೆಸಲು ಹೊರಡಿಸಲಾಗಿದ್ದ ಸುತ್ತೋಲೆ ರದ್ದುಪಡಿಸುವಂತೆ ಕೋರಿ ಕರ್ನಾಟಕ ನೋಂದಾಯಿತ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ಹಾಗೂ ಇತರರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಪ್ರದೀಪ್‌ ಸಿಂಗ್ ಯೆರೂರ್ ಅವರ ನೇತೃತ್ವದ ಏಕಸದಸ್ಯ ಪೀಠವು ಇದೇ 10ರಂದು ಪುರಸ್ಕರಿಸಿತ್ತು.

Kannada Bar & Bench
kannada.barandbench.com