ರಾಜ್ಯ ಪಠ್ಯಕ್ರಮದ ಐದು ಮತ್ತು ಎಂಟನೇ ತರಗತಿಯ ಪರೀಕ್ಷೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ ಎಂದು ರಾಜ್ಯ ಸರ್ಕಾರವು ಶನಿವಾರ ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದೆ.
ರಾಜ್ಯ ಪಠ್ಯಕ್ರಮದ ಐದು ಮತ್ತು ಎಂಟನೇ ತರಗತಿಯ ವಿದ್ಯಾರ್ಥಿಗಳಿಗೆ ಶಾಲಾ ಮಟ್ಟದ ಮೌಲ್ಯಮಾಪನಕ್ಕೆ ಬದಲಾಗಿ ರಾಜ್ಯ ಮಟ್ಟದ ಮಂಡಳಿ ಪರೀಕ್ಷೆ (ಪಬ್ಲಿಕ್) ನಡೆಸಲು ಶಿಕ್ಷಣ ಇಲಾಖೆ ಹೊರಡಿಸಿದ್ದ ಸುತ್ತೋಲೆಯನ್ನು ಪ್ರಸಕ್ತ ಸಾಲಿಗೆ ಅನ್ವಯಿಸುವಂತೆ ರದ್ದುಪಡಿಸಿ ಹೈಕೋರ್ಟ್‌ನ ಏಕಸದಸ್ಯ ಪೀಠವು ಶುಕ್ರವಾರ ಹೊರಡಿಸಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯ ವಿಶೇಷ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಜಿ ನರೇಂದರ್ ಮತ್ತು ಅಶೋಕ್ ಎಸ್.ಕಿಣಗಿ ಅವರ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.
ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಧ್ಯಾನ್ ಚಿನ್ನಪ್ಪ ಅವರು “ಪಬ್ಲಿಕ್ ಪರೀಕ್ಷೆ ಬರೆಯುವುದರಿಂದ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆಯಾಗುವುದಿಲ್ಲ. ಪರೀಕ್ಷೆಯಲ್ಲಿ ಯಾರನ್ನೂ ಅನುತ್ತೀರ್ಣಗೊಳಿಸಲಾಗುವುದಿಲ್ಲ. ಅದಾಗ್ಯೂ, ಐದು ಮತ್ತು ಎಂಟನೇ ತರಗತಿಗಳಿಗೆ ನಡೆಸಲು ಉದ್ದೇಶಿಸಿದ್ದ ಪರೀಕ್ಷೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ” ಎಂದು ಸರ್ಕಾರ ಹೊರಡಿಸಿರುವ ಸುತ್ತೋಲೆಯನ್ನು ಪೀಠಕ್ಕೆ ಸಲ್ಲಿಸಿದರು.
ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಸಂಘವನ್ನು ಪ್ರತಿನಿಧಿಸಿದ್ದ ವಕೀಲ ಕೆ ವಿ ಧನಂಜಯ ಅವರು “ಸ್ವೇಚ್ಛೆಯಿಂದ ನಡೆಸಲಾಗುತ್ತಿರುವ ಪರೀಕ್ಷೆಗೆ ಬೆಂಬಲ ನೀಡಬಾರದು. ಸರ್ಕಾರವು ಶಾಸನ ಸಭೆಯ ಮೇಲ್ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದೆ. ಈ ವಿಚಾರದಲ್ಲಿ ಸಂಬಂಧಿತರನ್ನು ಸಂಪರ್ಕಿಸುವ ಯತ್ನವನ್ನೂ ಸರ್ಕಾರ ಮಾಡಿಲ್ಲ” ಎಂದು ಆಕ್ಷೇಪಿಸಿದರು.
ಸುಮಾರು ನಾಲ್ಕು ತಾಸು ವಾದ-ಪ್ರತಿವಾದ ಆಲಿಸಿದ ಪೀಠವು ರಾಜ್ಯ ಸರ್ಕಾರದ ಮಧ್ಯಂತರ ತಡೆ ಕೋರಿಕೆಯನ್ನು ಪುರಸ್ಕರಿಸಲಿಲ್ಲ. ಬದಲಿಗೆ ವಿಚಾರಣೆಯನ್ನು ಮಂಗಳವಾರಕ್ಕೆ (ಮಾರ್ಚ್ 14) ಮುಂದೂಡಿತು.