ಧರ್ಮಸ್ಥಳದಲ್ಲಿ 74 ಅಸಹಜ ಸಾವಿನ ಪ್ರಕರಣ: ಕೈಗೊಂಡ ಕ್ರಮದ ಮಾಹಿತಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಧರ್ಮಸ್ಥಳದಲ್ಲಿ 2012ರಲ್ಲಿ ಸಾಮೂಹಿಕ ಅತ್ಯಾಚಾರಕ್ಕೀಡಾಗಿ ಕೊಲೆಯಾದ ವಿದ್ಯಾರ್ಥಿನಿ ಸೌಜನ್ಯಾ ತಾಯಿ ಕುಸುಮವತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್‌ ನಡೆಸಿತು.
High Court of Karnataka
High Court of Karnataka
Published on

ಧರ್ಮಸ್ಥಳ ಗ್ರಾಮದಲ್ಲಿ 1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ 74 ಅಸಹಜ ಸಾವಿನ ಪ್ರಕರಣಗಳ ಕುರಿತಾದ ವಸ್ತುಸ್ಥಿತಿ, ಈವರೆಗೆ ತೆಗೆದುಕೊಂಡಿರುವ ಕ್ರಮಗಳು ಹಾಗೂ ಮುಂದೆ ಕೈಗೊಳ್ಳಬೇಕೆಂದಿರುವ ಕ್ರಮಗಳ ಕುರಿತು ಎರಡು ವಾರಗಳಲ್ಲಿ ವಿವರಣೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಮಂಗಳವಾರ ನಿರ್ದೇಶಿಸಿದೆ. ಜೊತೆಗೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಸಹ ಜಾರಿಗೊಳಿಸಿದೆ.

ಧರ್ಮಸ್ಥಳದಲ್ಲಿ 2012ರಲ್ಲಿ ಸಾಮೂಹಿಕ ಅತ್ಯಾಚಾರಕ್ಕೀಡಾಗಿ ಕೊಲೆಯಾದ ವಿದ್ಯಾರ್ಥಿನಿ ಸೌಜನ್ಯಾ ತಾಯಿ ಕುಸುಮವತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿಎಂ ಪೂಣಚ್ಚ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಸರ್ಕಾರವನ್ನು ಪ್ರತಿನಿಧಿಸಿದ್ದ ಅಡ್ವೋಕೇಟ್ ಜನರಲ್ ಕೆ ಶಶಿಕಿರಣ್ ಶೆಟ್ಟಿ ಅವರು “ಇದು 74 ಪ್ರಕರಣಗಳಿಗೆ ಸಂಬಂಧಿಸಿದ ವಿಚಾರವಾಗಿದೆ. ಯಾವ ಪ್ರಕರಣ ಯಾವ ಹಂತದಲ್ಲಿದೆ, ಈವರೆಗೆ ಏನಾಗಿದೆ ಎಂಬ ಬಗ್ಗೆ ಮಾಹಿತಿ ಪಡೆದುಕೊಂಡು ಒಂದು ವಾರದಲ್ಲಿ ನ್ಯಾಯಾಲಯಕ್ಕೆ ಸಂಪೂರ್ಣ ವಿವರ ನೀಡಲಾಗುವುದು” ಎಂದರು.

ಅರ್ಜಿದಾರರ ಪರ ವಕೀಲ ಎಸ್ ಬಾಲನ್ ಅವರು “ಎಲ್ಲಾ 74 ಪ್ರಕರಣಗಳೂ ತನಿಖೆ ಮತ್ತು ವಿಚಾರಣೆಗೊಳಪಡಿಸಬೇಕಾದ ಪ್ರಕರಣಗಳಾಗಿವೆ” ಎಂದರು. ಅದಕ್ಕೆ, ಪೀಠವು ಮೊದಲು ಸರ್ಕಾರದಿಂದ ಮಾಹಿತಿ ಬರಲಿ ಎಂದು ಹೇಳಿತು. ಅದರಂತೆ, ಅರ್ಜಿಯಲ್ಲಿ ಪ್ರಸ್ತಾಪಿಸಲಾದ ಪ್ರಕರಣಗಳ ಈಗಿನ ವಸ್ತುಸ್ಥಿತಿ, ಈವರೆಗೆ ತೆಗೆದುಕೊಂಡಿರುವ ಕ್ರಮಗಳು ಹಾಗೂ ಮುಂದೆ ಕೈಗೊಳ್ಳಬೇಕೆಂದಿರುವ ಕ್ರಮಗಳ ಕುರಿತು ಎರಡು ವಾರಗಳಲ್ಲಿ ವಿವರಣೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿ ವಿಚಾರಣೆಯನ್ನು ಫೆಬ್ರವರಿ 19ಕ್ಕೆ ಮುಂದೂಡಿತು.

Also Read
ಧರ್ಮಸ್ಥಳದಲ್ಲಿ ಅಸಹಜ ಸಾವುಗಳ ಪ್ರಕರಣ: ಎಸ್‌ಐಟಿ ತನಿಖೆಗೆ ಕೋರಿಕೆ, ನಿಲುವು ತಿಳಿಸಲು ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

ಈ ಮಧ್ಯೆ, ಅರ್ಜಿಯಲ್ಲಿ ರಾಜ್ಯ ಸರ್ಕಾರವನ್ನು ಪ್ರತಿವಾದಿಯನ್ನಾಗಿ ಮಾಡಿಲ್ಲ ಎಂಬ ವಿಚಾರವನ್ನು ಸರ್ಕಾರದ ಪರ ವಕೀಲರು ನ್ಯಾಯಾಲಯದ ಗಮನಕ್ಕೆ ತಂದರು. ರಾಜ್ಯ ಸರ್ಕಾರವನ್ನು ಪ್ರತಿವಾದಿಯನ್ನಾಗಿಸುವಂತೆ ಅರ್ಜಿದಾರರ ಪರ ವಕೀಲರಿಗೆ ಸೂಚಿಸಿದ ಪೀಠವು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿತು.

Kannada Bar & Bench
kannada.barandbench.com